ಸಾರಾಂಶ
ಕನ್ನಡಪ್ರಭ ವಾರ್ತೆ ಚಾಮರಾಜನಗರಗ್ಯಾರಂಟಿ ಯೋಜನೆಗಳ ಸೌಲಭ್ಯ ರಾಜ್ಯದ ೪ ಕೋಟಿ ೬೦ ಲಕ್ಷ ಫಲಾನುಭವಿಗಳಿಗೆ ತಲುಪುತ್ತಿದ್ದು ನುಡಿದಂತೆ ನಡೆದ ಸರ್ಕಾರ ನಮ್ಮದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಗರದ ಡಾ. ಬಿ.ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತ, ಜಿಪಂ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಚಾಮರಾಜನಗರ ಜಿಲ್ಲೆಯ ಸರ್ಕಾರದ ವಿವಿಧ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಐದು ಗ್ಯಾರಂಟಿ ಯೋಜನೆಗಳನ್ನು ಪ್ರತಿನಿಧಿಸುವ ಸಿರಿಧಾನ್ಯಗಳ ಜ್ಯೋತಿ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ದೇಶ ಸ್ವಾತಂತ್ರ್ಯಗೊಂಡು ೭೫ ವರ್ಷಗಳಾಗಿದ್ದರೂ ಅಸಮಾನತೆ ಇನ್ನೂ ಜೀವಂತವಾಗಿದೆ. ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು ಕನಸಾಗಿಯೇ ಉಳಿದಿದೆ. ಅಸಮಾನತೆಗೆ ಮೂಲಕಾರಣ ದೇಶದಲ್ಲಿನ ಜಾತಿ ವ್ಯವಸ್ಥೆಯಾಗಿದೆ. ಅಧಿಕಾರ, ಸಂಪತ್ತು ಕೆಲವೇ ಜನರ ಬಳಿಯಿದೆ. ಅದು ಎಲ್ಲಾ ವರ್ಗದವರಿಗೂ ಸಮಾನವಾಗಿ ಹಂಚಿಕೆಯಾಗ ಬೇಕೆಂಬುದೇ ಸರ್ಕಾರದ ಧ್ಯೇಯೋದ್ದೇಶವಾಗಿದೆ. ಹಾಗೆಯೇ ಚಾಮರಾಜನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಕಟಿಬದ್ಧವಾಗಿದೆ ಎಂದು ತಿಳಿಸಿದರು. ಸಮಾವೇಶದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್, ಇದು ವಿಶೇಷವಾದ ಕಾರ್ಯಕ್ರಮವಾಗಿದೆ. ಚುನಾವಣೆಗೂ ಪೂರ್ವದಲ್ಲಿ ನೀಡಿದ ಭರವಸೆಗಳನ್ನು ಸರ್ಕಾರ ಅಧಿಕಾರಕ್ಕೆ ಬಂದ ಆರಂಭದಲ್ಲಿಯೇ ಈಡೇರಿಸಿದ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ. ಮಹಿಳೆಯರು, ಬಡವರ, ರೈತರ ಪರವಾಗಿ ಕೆಲಸ ಮಾಡಲು ಸರ್ಕಾರ ಬದ್ಧವಾಗಿದೆ. ಗ್ಯಾರಂಟಿ ಯೋಜನೆಗಳ ಅನುಷ್ಟಾನದಲ್ಲಿ ನಮ್ಮ ಚಾಮರಾಜನಗರ ಜಿಲ್ಲೆ ರಾಜ್ಯದಲ್ಲಿ ೨ನೇ ಸ್ಥಾನದಲ್ಲಿದ್ದು, ಸರಾಸರಿಯಲ್ಲಿ ಮೊದಲ ಸ್ಥಾನ ಪಡೆದಿದೆ ಎಂದರು.ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಮಾತನಾಡಿ, ಜಿಲ್ಲೆಯ ಇತಿಹಾಸದಲ್ಲಿ ಇದೊಂದು ಅಭೂತಪೂರ್ವ ಕಾರ್ಯಕ್ರಮವಾಗಿದೆ. ದೇಶದಲ್ಲಿಯೇ ನುಡಿದಂತೆ ನಡೆದ ಸರ್ಕಾರ ನಮ್ಮದು. ಸಂವಿಧಾನದ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಕೆಲಸ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಇಡೀ ರಾಜ್ಯದ ಜನರಿಗೆ ತಲುಪಿಸುವ ದಿಸೆಯಲ್ಲಿ ಸರ್ಕಾರ ಯಶಸ್ವಿಯಾಗಿದೆ ಎಂದರು.ಅಧ್ಯಕ್ಷತೆ ವಹಿಸಿದ್ದ ಶಾಸಕ ಹಾಗೂ ಎಂಎಸ್‌ಐಎಲ್ ಅಧ್ಯಕ್ಷ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಲಾಭವನ್ನು ಜಿಲ್ಲೆಯ ಶೇ. ೯೮ರಷ್ಟು ಜನರು ಪಡೆದಿದ್ದಾರೆ. ಇದು ಹೆಮ್ಮೆಯ ಸಂಗತಿ. ಕುಡಿಯುವ ನೀರು, ಕೆರೆಗಳನ್ನು ತುಂಬಿಸುವ ಯೋಜನೆ, ರಸ್ತೆಗಳು ಸೇರಿದಂತೆ ಜಿಲ್ಲೆಯ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ಚಿನ ಒತ್ತು ನೀಡಿದ್ದಾರೆ. ಪ್ರಸ್ತುತ ಜಿಲ್ಲೆಗೆ ಕುಡಿಯುವ ನೀರಿನ ಯೋಜನೆಗಾಗಿ ೩೬೭ ಕೋಟಿ ರೂ. ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಮಾತನಾಡಿ, ಜನಸಾಮಾನ್ಯರ ಸಬಲೀಕರಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಯಾವುದೇ ತಾರತಮ್ಯವಿಲ್ಲದೆ ಸಮಾಜದ ಎಲ್ಲಾ ವರ್ಗಗಳ ಜನರಿಗೂ ಸಮತೋಲಿತ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಮನ್ನಣೆ ಗಳಿಸಿದ್ದಾರೆ. ಸರ್ಕಾರದ ಬಗ್ಗೆ ಜನರು ವಿಶ್ವಾಸ ಹೊಂದಿದ್ದಾರೆ ಎಂದು ತಿಳಿಸಿದರು. ಗುಂಡ್ಲುಪೇಟೆ ಶಾಸಕ ಎಸ್. ಎಂ. ಗಣೇಶ್ ಪ್ರಸಾದ್ ಮಾತನಾಡಿ, ಸರ್ಕಾರ ಅಧಿಕಾರಿಕ್ಕೆ ಬಂದ ಕಡಿಮೆ ಸಮಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿ ನುಡಿದಂತೆ ನಡೆದಿದೆ. ಜಿಲ್ಲೆಯ ಅಭಿವೃದ್ದಿಗೆ ಸರ್ಕಾರ ಸಾಕಷ್ಟು ನೀಡಿದೆ. ಜಿಲ್ಲೆಯ ಪ್ರಗತಿಗೆ ಎಚ್.ಎಸ್. ಮಹದೇವಪ್ರಸಾದ್ ಅವರು ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಕಾಲೇಜು ಸೇರಿದಂತೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ ಎಂದರು. ಇದೇ ವೇಳೆ ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಯ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಲಾಯಿತು.