ಸಾರಾಂಶ
ಕನ್ನಡಪ್ರಭವಾರ್ತೆ ಚಿತ್ರದುರ್ಗ
ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆ.15 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ನಿರ್ಮಿಸುತ್ತಿರುವ 145 ಕಿ.ಮೀ ಉದ್ದದ ಮಾನವ ಸರಪಳಿ ರಾಜ್ಯದ ಇತರೆ ಜಿಲ್ಲೆಗಳ ಪೈಕಿ ಅತೀ ಉದ್ದದ ಮಾನವ ಸರಪಳಿಯಾಗಿದ್ದು, ಅಂದಾಜು 1.50 ಲಕ್ಷ ಜನರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದರು.ಮಾನವ ಸರಪಳಿ ನಿರ್ಮಾಣ ಕುರಿತಂತೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪ್ರತಿ ಕಿ.ಮೀಗೆ ಅಂದಾಜು 850 ಜನರಂತೆ ಮಾನವ ಸರಪಳಿ ನಿರ್ಮಿಸಲಾಗುವುದು. 35 ಸಾವಿರ ಪ್ರೌಢಶಾಲಾ , 8 ಸಾವಿರ ಪದವಿಪೂರ್ವ, 5 ಸಾವಿರ ಪದವಿ ಕಾಲೇಜಿನ ವಿದ್ಯಾರ್ಥಿಗಳು, 13 ಸಾವಿರ ಸ್ವ-ಸಹಾಯ ಸಂಘಗಳ ಸದಸ್ಯರು, 35 ಸಾವಿರ ಧರ್ಮಸ್ಥಳ ಸ್ವ-ಸಹಾಯ ಸಂಘಗಳ ಸದಸ್ಯರು, 800 ಆಶಾ ಕಾರ್ಯಕರ್ತರು, 1200 ಅಂಗನವಾಡಿ ಕಾರ್ಯಕರ್ತರು, 8 ಸಾವಿರ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಪಾಲ್ಗೊಳ್ಳುವರು ಎಂದು ತಿಳಿಸಿದರು.ಮಾನವ ಸರಪಳಿ ರಚಿಸುವ ಮಾರ್ಗದಲ್ಲಿ ಅಕ್ಕಪಕ್ಕದ ಗ್ರಾಮ ಪಂಚಾಯಿತಿಗಳಿಂದ ಸುಮಾರು 25 ಸಾವಿರ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಂದ ಸುಮಾರು 15 ಸಾವಿರ ಜನರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಪ್ರತಿ 100 ಮೀಟರ್ ಗೆ ಒಬ್ಬರಂತೆ ಒಟ್ಟು 1400 ಸಿಬ್ಬಂದಿ, ಪ್ರತಿ ಕಿಮೀಟರ್ ಗೆ ಒಬ್ಬರಂತೆ ಒಟ್ಟು 145 ನೋಡಲ್ ಅಧಿಕಾರಿಗಳು, ತಾಲೂಕು ಅಧಿಕಾರಿಗಳು ಹಾಗೂ ಪ್ರತಿ 5 ಕಿಮೀಟರ್ ಗೆ ಒಬ್ಬರಂತೆ 28 ಜಿಲ್ಲಾ ಮಟ್ಟದ ಅಧಿಕಾರಿಗಳು, ಪ್ರತಿ 20 ರಿಂದ 25 ಕಿ.ಮೀಗೆ ಹಿರಿಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಮೇಲ್ವಿಚಾರಣಾ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.
ಜಿಲ್ಲೆಯ ಗಡಿಭಾಗ ಮೊಳಕಾಲ್ಮುರು ತಾಲೂಕಿನ ಕಣಿವೆ ಗ್ರಾಮದಿಂದ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿಯವರೆಗೆ ಮಾನವ ಸರಪಳಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಎಲ್ಲ ರೀತಿಯ ಪೂರ್ವಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಕಳೆದ ವಾರದಿಂದಲೂ ಎಲ್ಲ ತಾಲೂಕುಗಳಲ್ಲಿಯೂ ನಿರಂತರವಾಗಿ ಸಭೆಗಳನ್ನು ನಡೆಸಿ, ಅಧಿಕಾರಿಗಳು, ನೌಕರರು, ಸಾರ್ವಜನಿರು, ಸಂಘ ಸಂಸ್ಥೆಳ ಜತೆ ಸಂಪರ್ಕ ಸಾಧಿಸಿ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮನವಿ ಮಾಡಲಾಗಿದೆ ಎಂದು ಹೇಳಿದರು.ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಮಾತನಾಡಿ, ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆ ಅಂಗವಾಗಿ ಸೆ.15 ರಂದು ಬೆಳಿಗ್ಗೆ ವೇದಿಕೆ ಕಾರ್ಯಕ್ರಮ ಹಿರಿಯೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಗಣ್ಯಾತಿಗಣ್ಯರು, ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುವರು ಎಂದು ಹೇಳಿದರು. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಸುದ್ದಿಗೋಷ್ಠಿಯಲ್ಲಿದ್ದರು.