ಸಾರಾಂಶ
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಾಧಿಪತಿ ಹುದ್ದೆಯನ್ನು ರಾಜ್ಯಪಾಲರ ಬದಲು ಮುಖ್ಯಮಂತ್ರಿಗಳಿಗೆ ನೀಡುತ್ತಿರುವ ಸರ್ಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಚಿತ್ರದುರ್ಗ: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಾಧಿಪತಿ ಹುದ್ದೆಯನ್ನು ರಾಜ್ಯಪಾಲರ ಬದಲು ಮುಖ್ಯಮಂತ್ರಿಗಳಿಗೆ ನೀಡುತ್ತಿರುವ ಸರ್ಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.ನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆಯಲ್ಲಿ ಬಂದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಬಳಿ ಸಭೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ವಿಶ್ವವಿದ್ಯಾಲಯಗಳು ಶಿಕ್ಷಣದ ಭಾಗವಾಗಬೇಕು ಹೊರತು ರಾಜಕಾರಣದ ಕೇಂದ್ರವಾಗಬಾರದು ಎಂಬ ಉದ್ದೇಶದಿಂದ ವಿಶ್ವವಿದ್ಯಾಲಯಗಳ ಕುಲಾಧಿಪತಿ ಹುದ್ದೆಯು ರಾಜ್ಯಪಾಲರ ಬಳಿ ಇರುತ್ತದೆ. ಆದರೆ ನವೆಂಬರ್ 27ರಂದು ನಡೆದ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಾಧಿಪತಿ ಅಧಿಕಾರವನ್ನು ರಾಜ್ಯಪಾಲರಿಂದ ಮುಖ್ಯಮಂತ್ರಿಗಳಿಗೆ ನೀಡುವ ನಿರ್ಧಾರ ಕೈಗೊಂಡಿದೆ. ಇದರಿಂದ ವಿಶ್ವವಿದ್ಯಾಲಯಗಳಲ್ಲಿ ರಾಜಕೀಯ ಪ್ರವೇಶವಾಗಿ ಅಲ್ಲಿನ ವಾತಾವರಣ ಪರಿವರ್ತನೆಯಾಗುವ ಎಲ್ಲ ಲಕ್ಷಣಗಳು ಕಂಡು ಬರುತ್ತಿವೆ. ಈ ನಡೆಯನ್ನು ಸರ್ಕಾರ ಕೂಡಲೇ ಕೈಬಿಟ್ಟು ಮೊದಲಿನಂತೆ ರಾಜ್ಯಪಾಲರು ಕುಲಾಧಿಪತಿ ಹುದ್ದೆಯಲ್ಲಿರುವಂತೆ ಆಗ್ರಹಿಸಿದರು.ಮುಡಾ ಹಗರಣದಲ್ಲಿ ಪ್ರಾಸಿಕ್ಯುಶನ್ ಗೆ ಅನುಮತಿ ನೀಡಿದ ರಾಜ್ಯಪಾಲರ ವಿರುದ್ಧ ಮುಖ್ಯಮಂತ್ರಿಗಳು ತಮ್ಮ ಸ್ವಾರ್ಥಕ್ಕಾಗಿ ಅಧಿಕಾರವನ್ನು ದುರುಪಯೋಗ ಪಡೆಸಿಕೊಳ್ಳುತ್ತಿರುವುದು ಈ ನಡೆಯಿಂದ ತಿಳಿಯುತ್ತದೆ. ಯಾವುದೇ ಕಾರಣಕ್ಕೂ ವಿಶ್ವವಿದ್ಯಾಲಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಈ ರೀತಿಯ ಚಟುವಟಿಕೆಗಳು ಸೂಕ್ತವಲ್ಲ. ಸಾಂವಿಧಾನಿಕ ಹುದ್ದೆಗಳ ವಿರುದ್ಧ ಸರ್ಕಾರ ಈ ರೀತಿಯ ನಿರ್ಣಯ ಕೈಗೊಳ್ಳುವುದರಿಂದ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ರಾಜಕೀಯ ಬೆರೆತಂತಾಗಿದೆ ಎಂದು ದೂರಿದರು. ರಾಜ್ಯ ಸರ್ಕಾರ ಈ ನಿರ್ಣಯವನ್ನು ಕೈ ಬಿಟ್ಟು ಉನ್ನತ ಶಿಕ್ಷಣದ ಉನ್ನತೀಕರಣಕ್ಕಾಗಿ ಪ್ರಯತ್ನಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿಭಾಗ ಸಹ ಸಂಚಾಲಕ ಗೋಪಿ, ಜಿಲ್ಲಾ ಸಂಚಾಲಕ ಕನಕರಾಜ್ ಕೋಡಿಹಳ್ಳಿ, ನಗರ ಸಹ ಕಾರ್ಯದರ್ಶಿ ಸಂಜಯ್, ಚಂದನ, ಜಿಲ್ಲಾ ಸಾಮಾಜಿಕ ಜಾಲತಾಣದ ಆದರ್ಶ, ಕಾರ್ಯಕರ್ತರಾದ ತಿಪ್ಪೇಶ್, ರಾಜು, ಧನಂಜಯ್, ಶ್ರೇಯಸ್, ಜೀವನ್, ಸಂಜು, ರಘು ಇದ್ದರು.