ಕನ್ನಡಪ್ರಭ ವಾರ್ತೆ ಬೈಲಹೊಂಗಲ
ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ತಾಲೂಕಿನ ಕೊಳದೂರು ಹಾಗೂ ಮದನಭಾವಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಎಐಡಿಎಸ್ಓ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ಓ ಜಿಲ್ಲಾ ಸಂಚಾಲಕ ಮಹಾಂತೇಶ ಬಿಳೂರ ಮಾತನಾಡಿ, ಸರ್ಕಾರವು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ಬದಲು ಗ್ರಾಮೀಣ ಪ್ರದೇಶಗಳಲ್ಲಿರುವ ಹಳೆಯ ಶಾಲೆಗಳನ್ನು ಮುಚ್ಚುವ ಮೂಲಕ ಬಡ ಮಕ್ಕಳ ಶಿಕ್ಷಣಕ್ಕೆ ತೊಂದರೆ ಉಂಟುಮಾಡುತ್ತಿದೆ ಎಂದು ಆರೋಪಿಸಿದರು.ಕೊಳದೂರು ಶಾಲೆ 1938ರಲ್ಲಿ ಹಾಗೂ ಮದನಭಾವಿ ಶಾಲೆ 1927ರಲ್ಲಿ ಸ್ಥಾಪನೆಯಾಗಿದೆ. ಈ ಶಾಲೆಗಳಿಗೆ ಹೆಚ್ಚಿನ ಸೌಲಭ್ಯ ಒದಗಿಸಿ ಅಭಿವೃದ್ಧಿಪಡಿಸಬೇಕಾದ ಸರ್ಕಾರವು ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ಅವುಗಳನ್ನು ಮುಚ್ಚಲು ಮುಂದಾಗಿದೆ ಎಂದು ದೂರಿದ ಅವರು, ಇಂದು ದೇಶದಲ್ಲಿ ಹಸಿವು, ಬಡತನ, ನಿರುದ್ಯೋಗ ಸೇರಿದಂತೆ ಅನೇಕ ಸಮಸ್ಯೆಗಳಿದ್ದು, ಜನರ ಬದುಕು ಸುಧಾರಣೆಗೆ ಯೋಜನೆಗಳನ್ನು ರೂಪಿಸಬೇಕಾದ ಸರ್ಕಾರಗಳು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನೇ ದುರ್ಬಲಗೊಳಿಸುವ ಕೆಲಸ ಮಾಡುತ್ತಿವೆ ಎಂದರು.
ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಮೂಲಕ ಸಾವಿರಾರು ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರ ನಡೆಯುತ್ತಿದ್ದು, ಇದರ ವಿರುದ್ಧ ಜನರು ಸಂಘಟಿತ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.ಈ ಸಂದರ್ಭದಲ್ಲಿ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ರದ್ದಾಗುವವರೆಗೆ ಹೋರಾಟ ಮುಂದುವರಿಸುವ ಉದ್ದೇಶದಿಂದ "ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ "ಗಳನ್ನು ರಚಿಸಲಾಯಿತು. ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಅಧ್ಯಕ್ಷ ರಾಮನಗೌಡ ಪಾಟೀಲ ಮಾತನಾಡಿ, ನಮ್ಮೂರ ಶಾಲೆ ಮುಚ್ಚಲು ನಮ್ಮ ಒಪ್ಪಿಗೆಯಿಲ್ಲ. ಸರ್ಕಾರ ಎಲ್ಲ ಸೌಲಭ್ಯಗಳನ್ನು ನಮ್ಮ ಶಾಲೆಗೆ ನೀಡಬೇಕು. ಬಡ ಮಕ್ಕಳನ್ನು ಬೇರೆ ಊರಿಗೆ ಕಳುಹಿಸುವುದು ಸಾಧ್ಯವಿಲ್ಲ ಎಂದು ಹೇಳಿದರು.ಗ್ರಾಮಸ್ಥ ಬಸವರಾಜ ಕೌಜಲಗಿ ಮಾತನಾಡಿ, ನಮ್ಮ ಹಿರಿಯರು ನೀಡಿದ ಜಾಗದಲ್ಲಿ ಶಾಲೆ ನಡೆಯುತ್ತಿದೆ. ಶಾಲೆಯ ಅಭಿವೃದ್ಧಿಗೆ ಇನ್ನಷ್ಟು ಭೂಮಿ ನೀಡಲು ನಾವು ಸಿದ್ಧರಿದ್ದೇವೆ. ಯಾವುದೇ ಕಾರಣಕ್ಕೂ ನಮ್ಮೂರ ಶಾಲೆ ಮುಚ್ಚಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.ಪ್ರತಿಭಟನೆಯಲ್ಲಿ ಗ್ರಾಮಸ್ಥರು, ಪೋಷಕರು ಹಾಗೂ ಯುವಕರು ಭಾಗವಹಿಸಿದ್ದರು.