ರಾಜ್ಯಪಾಲರ ವಿರುದ್ಧ ಅವಹೇಳನಾಕಾರಿ ಮಾತಿಗೆ ಆಕ್ರೋಶ

| Published : Aug 23 2024, 01:05 AM IST

ರಾಜ್ಯಪಾಲರ ವಿರುದ್ಧ ಅವಹೇಳನಾಕಾರಿ ಮಾತಿಗೆ ಆಕ್ರೋಶ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡುತ್ತಿರುವ ಕಾಂಗ್ರೆಸ್ ನಡೆ ವಿರೋಧಿಸಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಗುರುವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭವಾರ್ತೆ ಚಿತ್ರದುರ್ಗ

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅವಕಾಶ ನೀಡಿರುವ ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡುತ್ತಿರುವ ಕಾಂಗ್ರೆಸ್ ನಡೆಗೆ ಭಾರತೀಯ ಜನತಾಪಕ್ಷ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಗುರುವಾರ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿ ನಂತರ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಟಿ. ಸುರೇಶ್‍ ಸಿದ್ದಾಪುರ, ಮುಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಭಂಡತನ ಪ್ರದರ್ಶಿಸುವ ಬದಲು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಅದನ್ನು ಬಿಟ್ಟು ರಾಜ್ಯಪಾಲರಿಗೆ ಏಕವಚನದಲ್ಲಿ ಮೂದಲಿಸುವುದು ಸರಿಯಲ್ಲ. ಬಿ.ಎಸ್. ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಅಂದಿನ ರಾಜ್ಯಪಾಲ ಹಂಸರಾಜ್ ಭಾರಧ್ವಾಜ್‍ರವರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿದಾಗ ನಾವುಗಳ್ಯಾರು ಪ್ರತಿಭಟನೆ ಮಾಡದೇ ಕಾನೂನನ್ನು ಗೌರವಿಸಿದೆವು. ಈಗಿನ ಕಾಂಗ್ರೆಸ್ ಸರ್ಕಾರದ ಸಚಿವರು ಮತ್ತು ಸಿದ್ದರಾಮಯ್ಯನವರು ಯಾವುದೇ ತಪ್ಪು ಮಾಡಿಲ್ಲ ಎಂದು ಸಮರ್ಥಿಸಿಕೊಳ್ಳುತ್ತಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು?ಮುಡಾದಲ್ಲಿ ಹಗರಣವಾಗಿರುವುದನ್ನು ಒಪ್ಪಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿದು ಕಾನೂನು ರೀತಿಯಲ್ಲಿ ಹೋರಾಟ ಮಾಡಲಿ. ಈ ಹೊರತಾಗಿ ರಾಜ್ಯಪಾಲರ ವಿರುದ್ಧ ಸಂವಿಧಾನಬಾಹಿರ ಮಾತುಗಳನ್ನಾಡುವುದು ಸರಿಯಲ್ಲ. ಐವಾನ್ ಡಿಸೋಜ, ದಿನೇಶ್‍ಗುಂಡೂರಾವ್, ಕೃಷ್ಣಭೈರೇಗೌಡ ಇನ್ನು ಅನೇಕ ನಾಯಕರುಗಳು ಹೀನಾಯ ಪದಗಳನ್ನು ಬಳಸುವುದನ್ನು ನಿಲ್ಲಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದರು.ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಸಂಪತ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಮೂರು ತಿಂಗಳಷ್ಟರೊಳಗೆ ನಾನಾ ರೀತಿಯ ಹಗರಣಗಳನ್ನು ಎಸಗಿರುವುದನ್ನು ನೋಡಿದರೆ ಆಲಿಬಾಬು ಮತ್ತು ನಲವತ್ತು ಕಳ್ಳರು ಎನ್ನುವಂತಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅವಕಾಶ ನೀಡಿರುವುದನ್ನು ಸಹಿಸಿಕೊಳ್ಳಲು ಆಗದ ಕಾಂಗ್ರೆಸ್ ನಾಯಕರು ರಾಜ್ಯಪಾಲರ ಬಗ್ಗೆ ಅಗೌರವದ ಮಾತುಗಳನ್ನಾಡುತ್ತಿದ್ದಾರೆ. ದಲಿತ ವಿರೋಧಿ ಕಾಂಗ್ರೆಸ್‍ನಲ್ಲಿ ಒಬ್ಬರಿಗಿಂತ ಒಬ್ಬರು ಹಗರಣಗಳನ್ನು ಮಾಡುವುದರಲ್ಲಿ ನಿಸ್ಸೀಮರು. ಐವಾನ್ ಡಿಸೋಜರನ್ನು ಕೂಡಲೆ ಬಂಧಿಸಬೇಕೆಂದು ಒತ್ತಾಯಿಸಿದರು. ಬಿಜೆಪಿ ನಗರ ಮಂಡಲ ಅಧ್ಯಕ್ಷ ನವೀನ್ ಚಾಲುಕ್ಯ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಕಳಂಕ ಬಂದಿರುವುದರಿಂದ ಕೂಡಲೇ ರಾಜೀನಾಮೆ ನೀಡಬೇಕು. ಬಿ.ಎಸ್ ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಅಂದಿನ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿದಾಗ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯನವರು ರಾಜೀನಾಮೆಗೆ ಒತ್ತಡ ಹೇರಿದ್ದನ್ನು ಮರೆತಂತಿದೆ. ಯಾವುದೇ ಕಪ್ಪುಚುಕ್ಕೆಯಿಲ್ಲದೇ ಆಡಳಿತ ನಡೆಸುತ್ತಿದ್ದೇನೆಂದು ಹೇಳಿಕೊಳ್ಳುತ್ತಿರುವ ಸಿದ್ದರಾಮಯ್ಯನವರು ಮೈತುಂಬ ಬರೀ ಕಳಂಕವನ್ನೇ ಮೆತ್ತಿಕೊಂಡಿದ್ದಾರೆ. ಆದ್ದರಿಂದ ತಕ್ಷಣವೇ ಅಧಿಕಾರದಿಂದ ಕೆಳಗಿಳಿದು ವಿಚಾರಣೆಗೆ ಸಹಕರಿಸಬೇಕೆಂದು ಆಗ್ರಹಿಸಿದರು.ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಳೆಕಾಯಿ ರಾಂದಾಸ್, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ್, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ವೆಂಕಟೇಶ್‍ ಯಾದವ್, ವಕ್ತಾರ ನಾಗರಾಜ್‍ಬೇದ್ರೆ, ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚಂದ್ರು, ಭಾರ್ಗವಿ ದ್ರಾವಿಡ್, ನಂದಿ ನಾಗರಾಜ್, ಬಸಮ್ಮ, ವೀರೇಶ್, ಕಿರಣ್, ವೀಣ, ನಗರಸಭೆ ಸದಸ್ಯ ಸುರೇಶ್, ಶಂಭು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.