ಹಾಸ್ಟೆಲ್ ಹಂಚಿಕೆಯಲ್ಲಿ ತಾರತಮ್ಯಕ್ಕೆ ಆಕ್ರೋಶ

| Published : Dec 15 2023, 01:30 AM IST / Updated: Dec 15 2023, 01:31 AM IST

ಸಾರಾಂಶ

ವಿದ್ಯಾರ್ಥಿಗಳ ಹಾಸ್ಟೆಲ್ ಹಂಚಿಕೆ ವಿಚಾರದಲ್ಲಿ ಸಾಕಷ್ಟು ತಾರತಮ್ಯ ನಡೆದಿದ್ದು, ಕೂಡಲೇ ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ ವತಿಯಿಂದ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ರಸ್ತೆ ಬಂದ್ ಮಾಡಿ ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಧಾರವಾಡ

ಧಾರವಾಡ ವಿದ್ಯಾಕಾಶಿಯಾಗಿರುವುದರಿಂದ ಇಲ್ಲಿ ಬೇರೆ ಬೇರೆ ಜಿಲ್ಲೆಗಳಿಂದಲೂ ವಿದ್ಯಾರ್ಥಿಗಳು ಶಿಕ್ಷಣ ಅರಸಿ ಬರುತ್ತಾರೆ. ಹೀಗೆ ಬರುವ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಕರ್ಯ ಬೇಕು. ಆದರೆ, ಇಲ್ಲಿ ಕೆಲವೊಂದಿಷ್ಟು ಪ್ರಭಾವಿ ವ್ಯಕ್ತಿಗಳಿಂದ ಅರ್ಹ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಸೌಕರ್ಯ ದೊರಕುತ್ತಿಲ್ಲ. ಅಧಿಕಾರಿಗಳು ಹಣ ಪಡೆದು ಹಾಸ್ಟೆಲ್ ಸೌಕರ್ಯ ನೀಡುತ್ತಿದ್ದಾರೆ. ಈ ವ್ಯವಸ್ಥೆ ವಿರುದ್ಧ ಜಿಲ್ಲಾಧಿಕಾರಿಗಳು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಇಲ್ಲಿ ಅಧಿಕಾರಿಗಳು ಆಡಿದ್ದೇ ಆಟ ಎಂಬಂತಾಗಿದ್ದು, ಹೆಚ್ಚು ಅಂಕ ಪಡೆದು ಹಾಸ್ಟೆಲ್‌ಗೆ ಅರ್ಹತೆ ಹೊಂದಿರುವ ವಿದ್ಯಾರ್ಥಿಗಳು ಈಗ ಬೀದಿಗೆ ಬಿದ್ದಂತಾಗಿದ್ದು, ಕೂಡಲೇ ಅರ್ಹ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಕರ್ಯ ಸಿಗುವಂತಾಗಬೇಕು. ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.