ಭದ್ರಾ ಮೇಲ್ದಂಡೆಗೆ ಕೇಂದ್ರ ಹಣ ನೀಡದಿರುವ ಕ್ರಮಕ್ಕೆ ಆಕ್ರೋಶ

| Published : Feb 10 2024, 01:48 AM IST / Updated: Feb 10 2024, 05:13 PM IST

ಸಾರಾಂಶ

ಭದ್ರಾಮೇಲ್ದಂಡೆ ಯೋಜನೆಗಾಗಿ ಕೇಂದ್ರ ಸರ್ಕಾರ ಕಾಯ್ದಿರಿಸಿರುವ ಐದು ಸಾವಿರದ ಮುನ್ನೂರು ಕೋಟಿ ರು. ಬಿಡುಗಡೆಗೊಳಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಭದ್ರಾಮೇಲ್ದಂಡೆಯ ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿ ಐದು ಸಾವಿರದ ಮುನ್ನೂರು ಕೋಟಿ ರು. ಕಾಯ್ದಿರಿಸಿರುವ ಕೇಂದ್ರ ಸರ್ಕಾರ ಹಣ ಬಿಡುಗಡೆಗೊಳಿಸದಿರುವುದನ್ನು ವಿರೋಧಿಸಿ ಕಳೆದ ಐದು ದಿನಗಳಿಂದಲೂ ಜಿಲ್ಲಾ ಪಂಚಾಯಿತಿ ಮುಂಭಾಗ ಧರಣಿ ನಡೆಸುತ್ತಿರುವ ಕರ್ನಾಟಕ ರಾಜ್ಯ ರೈತ ಸಂಘ, ಅಖಂಡ ಕರ್ನಾಟಕ ರೈತ ಸಂಘ ಹಾಗೂ ವಿವಿಧ ಜನಪರ ಸಂಘಟನೆಗಳ ಮುಖಂಡರು ಶುಕ್ರವಾರ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರದ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ಮಾತನಾಡಿ, ಸದಾ ಬರಗಾಲವನ್ನೆ ಎದುರಿಸುತ್ತಿರುವ ಚಿತ್ರದುರ್ಗ ಜಿಲ್ಲೆಯಲ್ಲಿ ರೈತರು ಸಾಲಗಾರರಾಗಿ ಹೈರಾಣಾಗಿದ್ದಾರೆ. 

ಕಳೆದ ಮೂವತ್ತು ನಲವತ್ತು ವರ್ಷಗಳಿಂದಲೂ ನೀರಾವರಿ ಯೋಜನೆಗಾಗಿ ಹೋರಾಟ ಮಾಡಿಕೊಂಡು ಬರುತ್ತಿರುವ ರೈತರನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಗುರವಾಗಿ ಕಾಣುತ್ತಿವೆ. 

ಭದ್ರಾಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿ ಕೇಂದ್ರ ಸರ್ಕಾರ ಕಾಯ್ದಿರಿಸಿರುವ ಐದು ಸಾವಿರದ ಮುನ್ನೂರು ಕೋಟಿ ರು.ಗಳನ್ನು ಕೂಡಲೆ ಬಿಡುಗಡೆಗೊಳಿಸಿ ಕಾಮಗಾರಿಗೆ ಚುರುಕು ಮುಟ್ಟಿಸಿ ನೀರು ಹರಿಸಬೇಕು. ಇಲ್ಲವಾದಲ್ಲಿ ಧರಣಿ ಉಗ್ರ ಸ್ವರೂಪಕ್ಕೆ ಕೊಂಡೊಯ್ಯಲಾಗುವುದೆಂದು ಎಚ್ಚರಿಸಿದರು.

ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ ಮಾತನಾಡಿ, ಮಧ್ಯ ಕರ್ನಾಟಕದ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಯ ರೈತರು ಮಳೆಯನ್ನೇ ಆಧರಿಸಿ ಕೃಷಿ ನಂಬಿಕೊಂಡಿದ್ದಾರೆ. 

ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಭದ್ರಾಮೇಲ್ದಂಡೆ ಯೋಜನೆಗಾಗಿ ಕಾಯ್ದಿರಿಸಿರುವ ಹಣ ಬಿಡುಗಡೆಗೊಳಿಸಲು ಮೀನಾ ಮೇಷ ಎಣಿಸುತ್ತಿದೆ. ರೈತರನ್ನು ತಿರಸ್ಕಾರ ಮನೋಭಾವದಿಂದ ಕಾಣುವುದು ಸರಿಯಲ್ಲ. ಕೂಡಲೆ ಯೋಜನೆ ಪೂರ್ಣಗೊಳಿಸಿ ಜಿಲ್ಲೆಗೆ ನೀರು ಹರಿಸಬೇಕು. ರಾಜ್ಯ ಸರ್ಕಾರ ಕೇಂದ್ರದ ಅನುದಾನಕ್ಕೆ ಕಾಯದೆ ತನ್ನ ಪಾಲಿನ ಹಣ ವೆಚ್ಚ ಮಾಡಿ ಕಾಮಗಾರಿ ಪೂರ್ಣಗೊಳಿಸಬೇಕೆಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್, ಹಿರಿಯೂರು ತಾಲೂಕು ಅಧ್ಯಕ್ಷ ತಿಪ್ಪೇಸ್ವಾಮಿ, ಹನುಮೇಶ್ ಟಿ.ಎಮ್ಮಿಗನೂರು, ರಂಗಸ್ವಾಮಿ, ವಿಜಯಕುಮಾರ್, ಗೌರಮ್ಮ, ಅನುಸೂಯಮ್ಮ, ಮಂಜುಳ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.