ಸಾರಾಂಶ
ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಬಿಜೆಪಿ ಮುಖಂಡರು ಹಾಗೂ ಎಸ್ಟಿ ಮೋರ್ಚಾದ ಪದಾಧಿಕಾರಿಗಳು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಬಳ್ಳಾರಿ: ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭಿವೃದ್ಧಿಗೆಂದು ಮೀಸಲಾಗಿಟ್ಟಿದ್ದ ಎಸ್‌ಸಿಪಿ/ಟಿಎಸ್‌ಪಿ ಹಣವನ್ನು ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿರುವುದನ್ನು ಖಂಡಿಸಿ ಬಿಜೆಪಿ ಎಸ್ಟಿ ಮೋರ್ಚಾ ನೇತೃತ್ವದಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ರಾಜ್ಯದ ಅಭಿವೃದ್ಧಿಗೆ ಬಳಸಬೇಕಾಗಿದ್ದ ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿದೆ. ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಮೀಸಲಾದ ಹಣವನ್ನು ಸಹ ಬಳಸಿಕೊಳ್ಳುತ್ತಿರುವುದರಿಂದ ತಳಸಮುದಾಯಗಳ ಕಲ್ಯಾಣಕ್ಕೆ ಹಿನ್ನಡೆಯಾಗಿದೆ. ದಲಿತ, ಹಿಂದುಳಿದ ಸಮುದಾಯಗಳ ಪರ ಎಂದು ಹೇಳಿಕೊಳ್ಳುವ ರಾಜ್ಯ ಸರ್ಕಾರ ದಲಿತರ ಪ್ರಗತಿಗೆ ಯಾವುದೇ ಮಹತ್ವದ ಯೋಜನೆಗಳನ್ನು ಜಾರಿಗೊಳಿಸುತ್ತಿಲ್ಲ. ಬದಲಿಗೆ ಇರುವ ಅನುದಾನವನ್ನು ಕಡಿತಗೊಳಿಸುತ್ತಿದೆ. ದಲಿತರ ಅಭವೃದ್ಧಿಗೆ ಮೀಸಲಾದ ಎಸ್‌ಸಿಪಿ/ ಟಿಎಸ್‌ಪಿ ಹಣವನ್ನು ಬಳಸಿಕೊಳ್ಳುತ್ತಿದ್ದು, ಕೂಡಲೇ ಈಗಾಗಲೇ ಬಳಕೆ ಮಾಡಿರುವ ಹಣವನ್ನು ಬಿಡುಗಡೆಗೊಳಿಸಬೇಕು. ಇನ್ನು ಮುಂದೆ ಪರಿಶಿಷ್ಟರ ಕಲ್ಯಾಣಕ್ಕೆಂದು ಮೀಸಲಾಗಿರುವ ಹಣಕ್ಕೆ ಕೈ ಹಾಕಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಬಿಜೆಪಿ ಮುಖಂಡರು ಹಾಗೂ ಎಸ್ಟಿ ಮೋರ್ಚಾದ ಪದಾಧಿಕಾರಿಗಳು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪಕ್ಷದ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಮೋಕಾ ಅವರು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಬಳಸಿಕೊಂಡು ಖಜಾನೆ ಮಾಡಿಕೊಂಡಿದೆ. ಸರ್ಕಾರದ ಬಳಿ ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲದಂತಾಗಿದೆ. ಹೀಗಾಗಿ ರಾಜ್ಯದಲ್ಲಿ ಯಾವುದೇ ಜನಪರ ಯೋಜನೆಗಳು ಚಾಲನೆ ದೊರೆತಿಲ್ಲ. ಘೋಷಿತ ಕಾಮಗಾರಿಗಳನ್ನು ಕೈಗೊಳ್ಳಲು ಸಹ ಸರ್ಕಾರದ ಬಳಿ ಹಣವಿಲ್ಲ ಎಂದು ಟೀಕಿಸಿದರು.ಪಕ್ಷದ ಹಿರಿಯ ಮುಖಂಡ ಡಾ. ಮಹಿಪಾಲ್, ಗಣಪಾಲ್ ಐನಾಥ ರೆಡ್ಡಿ, ಮುರಹರಗೌಡ ಗೋನಾಳ್, ಉಡೇದ ಸುರೇಶ್ ಸೇರಿದಂತೆ ಪಕ್ಷದ ಜಿಲ್ಲಾ ಪದಾಧಿಕಾರಿಗಳು ಹಾಗೂ ಎಸ್ಟಿ ಮೋರ್ಚಾದ ಪದಾಧಿಕಾರಿಗಳು, ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.