ಪಿ.ಎಂ.ನರೇಂದ್ರಸ್ವಾಮಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ

| Published : Feb 06 2025, 11:47 PM IST

ಪಿ.ಎಂ.ನರೇಂದ್ರಸ್ವಾಮಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ
Share this Article
  • FB
  • TW
  • Linkdin
  • Email

ಸಾರಾಂಶ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರನ್ನು ರಾಜ್ಯಸರ್ಕಾರ ನಾಮನಿರ್ದೇಶನ ಮಾಡಿದೆ. ನರೇಂದ್ರಸ್ವಾಮಿ ಅವರು ಬುಧವಾರ ರಾತ್ರಿ ೯ ಗಂಟೆ ವೇಳೆಗೆ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.

ಕನ್ನಡಪ್ರಭ ವಾರ್ತೆ ಮಂಡ್ಯ

ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರಿಗೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ಒಲಿದಿದೆ. ಮುಖ್ಯಮಂತ್ರಿ ಬದಲಾವಣೆ, ಸಂಪುಟ ಪುನಾರಚನೆಯಂತಹ ಬೆಳವಣಿಗೆಗಳು ಸದ್ಯಕ್ಕೆ ನಡೆಯುವ ಸಾಧ್ಯತೆಗಳು ಇಲ್ಲದಿರುವುದರಿಂದ ಈ ಹುದ್ದೆಯನ್ನು ಒಪ್ಪಿಕೊಳ್ಳುವುದು ನರೇಂದ್ರಸ್ವಾಮಿ ಅವರಿಗೆ ಅನಿವಾರ್ಯವೂ ಆಗಿದೆ.

ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಪಿ.ಎಂ.ನರೇಂದ್ರಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂಬುದು ಅವರ ಬೆಂಬಲಿಗರು, ಕಾರ್ಯಕರ್ತರ ಆಗ್ರಹವಾಗಿದೆ. ಮುಂದಿನ ಸಂಪುಟ ಪುನಾರಚನೆ ವೇಳೆ ಪಿ.ಎಂ.ನರೇಂದ್ರಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಮನವಿ ಮಾಡಿದ್ದರು. ಸಂಪುಟ ಪುನಾರಚನೆ ಮಾಡುವ ಸಾಹಸಕ್ಕೆ ಹೈಕಮಾಂಡ್ ಮುಂದಾಗುವ ಧೈರ್ಯ ಮಾಡದಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತನಿಗೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ದೊರಕಿಸಿಕೊಟ್ಟು ಸಮಾಧಾನಪಡಿಸಿದ್ದಾರೆ.

ಮೊದಲ ಬಾರಿಗೆ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದ ವೇಳೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾಗುವ ಅದೃಷ್ಟ ಕೂಡಿಬಂದಿತ್ತು. ಆನಂತರ ಕಾಂಗ್ರೆಸ್ ಪಕ್ಷ ಸೇರಿದ ಪಿ.ಎಂ.ನರೇಂದ್ರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೆಚ್ಚಿನ ಶಿಷ್ಯರಾಗಿದ್ದರೂ ಪರಿಶಿಷ್ಟ ಜಾತಿ ಕೋಟಾದಡಿ ಸಚಿವರಾಗುವ ಅವಕಾಶ ಕೂಡಿ ಬರದೇ ಇರದಿರುವುದು ಸಹಜವಾಗಿಯೇ ನರೇಂದ್ರಸ್ವಾಮಿ ಅವರ ಬೇಸರಕ್ಕೆ ಕಾರಣವಾಗಿತ್ತು.

ಕಳೆದೊಂದು ವರ್ಷದ ಹಿಂದೆಯೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನವನ್ನು ಶಾಸಕ ಪಿ.ಎಂ.ನರೇಂದ್ರಸ್ವಾಮಿಗೆ ನೀಡಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ, ಆ ಸಮಯದಲ್ಲಿ ಇನ್ನೂ ಅಧ್ಯಕ್ಷರ ಅವಧಿ ಪೂರ್ಣಗೊಂಡಿರಲಿಲ್ಲ. ಇದನ್ನು ನಂತರ ಮನಗಂಡ ಸರ್ಕಾರ ಬದಲಿ ಆದೇಶವನ್ನು ಹೊರಡಿಸಿತ್ತು. ಹಾಗಾಗಿ ಒಂದು ವರ್ಷದಿಂದಲೂ ಸಚಿವ ಸ್ಥಾನ ಸಿಗಬಹುದೆಂಬ ನಿರೀಕ್ಷೆಯಲ್ಲೇ ನರೇಂದ್ರಸ್ವಾಮಿ ಇದ್ದರು. ಆದರೆ, ಪ್ರಸ್ತುತ ಅಂತಹ ಯಾವುದೇ ಬೆಳವಣಿಗೆಗಳು ನಡೆಯುವ ಸಾಧ್ಯತೆಗಳು ಕಡಿಮೆ ಇರುವುದರಿಂದ ಮುಖ್ಯಮಂತ್ರಿ ಆದಿಯಾಗಿ ಇತರರು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನವನ್ನು ಒಪ್ಪಿಕೊಳ್ಳುವಂತೆ ಪಿ.ಎಂ.ನರೇಂದ್ರಸ್ವಾಮಿ ಅವರ ಮನವೊಲಿಸಿದ್ದಾರೆ ಎಂದು ತಿಳಿದುಬಂದಿದೆ.

ಮುಂದೆ ಸಂಪುಟ ಪುನಾರಚನೆ ಮಾಡುವಂತಹ ಪರಿಸ್ಥಿತಿ ಸೃಷ್ಟಿಯಾದರೆ ಆಗ ಸಚಿವ ಹುದ್ದೆಗೆ ಪರಿಗಣಿಸುವ ಭರವಸೆಯನ್ನೂ ನೀಡಿದ್ದಾರೆ ಎನ್ನಲಾಗಿದೆ. ಪಕ್ಷದ ನಾಯಕರ ಮಾತನ್ನು ಒಪ್ಪಿರುವ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಧ್ಯಕ್ಷ ಹುದ್ದೆಯನ್ನು ವಹಿಸಿಕೊಂಡಿದ್ದಾರೆ.

ನರೇಂದ್ರ ಸ್ವಾಮಿ ಅವರು ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸದನ ಸಮಿತಿ ಅಧ್ಯಕ್ಷರಾಗಿಯೂ ಈ ಸರ್ಕಾರದಲ್ಲಿ ಕಾರ್ಯನಿರ್ವಹಿಸಿದ್ದರು.

ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ:

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರನ್ನು ರಾಜ್ಯಸರ್ಕಾರ ನಾಮನಿರ್ದೇಶನ ಮಾಡಿದೆ. ನರೇಂದ್ರಸ್ವಾಮಿ ಅವರು ಬುಧವಾರ ರಾತ್ರಿ ೯ ಗಂಟೆ ವೇಳೆಗೆ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಫೆ.೫ರಂದು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಬಿ.ಎನ್.ಪ್ರವೀಣ್ ಅವರು ರಾಜ್ಯಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಪಿ.ಎಂ.ನರೇಂದ್ರಸ್ವಾಮಿ ಅವರನ್ನು ರಾಜ್ಯಪಾಲರ ಆದೇಶಾನುಸಾರ ಅಧಿಸೂಚನೆ ಹೊರಡಿಸಿದ್ದರು.

ಮಂಡಳಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ವೇಳೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಮದ್ದೂರು ಕ್ಷೇತ್ರದ ಶಾಸಕ ಕೆ.ಎಂ.ಉದಯ್, ವಿಧಾನಪರಿಷತ್ ಮಾಜಿ ಸದಸ್ಯ ಬಿ.ರಾಮಕೃಷ್ಣ ಉಪಸ್ಥಿತರಿದ್ದು ಅಭಿನಂದಿಸಿದರು.