ಕುಷ್ಟಗಿ ತಾಲೂಕಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ಸ್ಮರಣೆಯನ್ನು ಶಾಶ್ವತಗೊಳಿಸುವ ಉದ್ದೇಶದಿಂದ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಭವನ ನಿರ್ಮಿಸುವಂತೆ ಆಗ್ರಹಿಸಿ ನ.19ರಂದು ಪಟ್ಟಣದಲ್ಲಿ ಪಾದಯಾತ್ರೆ ಹಾಗೂ ಸಾಂಕೇತಿಕ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.
ಶಾಸಕ, ತಹಸೀಲ್ದಾರ್, ಪುರಸಭೆ ಮುಖ್ಯಾಧಿಕಾರಿ ಮನವಿ ಸ್ವೀಕರಿಸಲು ಒತ್ತಾಯ
ಕನ್ನಡಪ್ರಭವಾರ್ತೆ ಕುಷ್ಟಗಿಕುಷ್ಟಗಿ ತಾಲೂಕಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ಸ್ಮರಣೆಯನ್ನು ಶಾಶ್ವತಗೊಳಿಸುವ ಉದ್ದೇಶದಿಂದ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಭವನ ನಿರ್ಮಿಸುವಂತೆ ಆಗ್ರಹಿಸಿ ನ.19ರಂದು ಪಟ್ಟಣದಲ್ಲಿ ಪಾದಯಾತ್ರೆ ಹಾಗೂ ಸಾಂಕೇತಿಕ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಹೈದರಾಬಾದ್ ಕರ್ನಾಟಕ ಯುವಶಕ್ತಿ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಗಾಣಿಗೇರ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನ.19ರಂದು ಪಟ್ಟಣದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪಾದಯಾತ್ರೆ ಆರಂಭವಾಗಿ ಟೆಂಗುಂಟಿ ರಸ್ತೆಯಲ್ಲಿರುವ ಮೋಹನಲಾಲ್ ಜೈನ್ ಕುಟುಂಬದವರು ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಭವನ ನಿರ್ಮಾಣಕ್ಕಾಗಿ ನೀಡಿರುವ ನಿವೇಶನದವರೆಗೆ ಸಾಗಲಿದೆ. ಅಲ್ಲಿ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದರು.ಶಾಸಕ ದೊಡ್ಡನಗೌಡ ಪಾಟೀಲ್, ತಹಸೀಲ್ದಾರ್ ಅಶೋಕ ಶಿಗ್ಗಾಂವಿ ಹಾಗೂ ಪುರಸಭೆ ಮುಖ್ಯಾಧಿಕಾರಿ ವೆಂಕಪ್ಪ ಬೀಳಗಿ ಅವರು ನಿವೇಶನದ ಸ್ಥಳಕ್ಕೆ ಆಗಮಿಸಿ ಹೋರಾಟಗಾರರ ಮನವಿ ಸ್ವೀಕರಿಸಬೇಕು. ಸ್ಮಾರಕ ಭವನ ನಿರ್ಮಾಣಕ್ಕೆ ಅಗತ್ಯ ಅನುದಾನ ಬಿಡುಗಡೆ, ಕ್ರಿಯಾಯೋಜನೆ ಸಿದ್ಧಪಡಿಸಿ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಹಾಗೂ ಅವರ ಸ್ಮರಣೆಯನ್ನು ಶಾಶ್ವತಗೊಳಿಸುವುದು ನಮ್ಮ ಉದ್ದೇಶವಾಗಿದೆ. ಇದಕ್ಕಾಗಿ ಮೋಹನಲಾಲ್ ಜೈನ್ ಕುಟುಂಬದವರು ನಿವೇಶನವನ್ನು ಸ್ಮಾರಕ ಭವನ ನಿರ್ಮಾಣಕ್ಕಾಗಿ ನೀಡಿದ್ದು, ಈ ಮಹತ್ವದ ಕಾರ್ಯಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಪಂದಿಸಬೇಕು. ಬೇಡಿಕೆ ಈಡೇರುವವರೆಗೆ ಹಂತ ಹಂತವಾಗಿ ಹೋರಾಟ ಮುಂದುವರಿಸಲಾಗುವುದು ಎಂದು ತಿಳಿಸಿದರು.ಈ ಹೋರಾಟಕ್ಕೆ ಕುಷ್ಟಗಿ ನಗರ ಹಿತರಕ್ಷಣಾ ವೇದಿಕೆ, ತಾಲೂಕು ಮಾಜಿ ಸೈನಿಕರ ಸಂಘ ಹಾಗೂ ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ನೀಡಿವೆ. ಸಾರ್ವಜನಿಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಕ್ಷಾತೀತವಾಗಿ ಪಾದಯಾತ್ರೆ ಹಾಗೂ ಧರಣಿಯಲ್ಲಿ ಪಾಲ್ಗೊಂಡು ಸಹಕರಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕುಷ್ಟಗಿ ನಗರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ದೇವೇಂದ್ರಪ್ಪ ಕಟ್ಟಿಮನಿ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಹಂಪನಗೌಡ ಬಳೂಟಗಿ, ಶರಣಯ್ಯ, ಕಿರಣಜ್ಯೋತಿ, ಬಸವರಾಜ ಹಿರೇಮನ್ನಾಪೂರ, ಚಂದನಗೌಡ ಮನ್ನೇರಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.