ಸಾರಾಂಶ
ಗದಗ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಪಂಚ ಗ್ಯಾರಂಟಿಗಳ ಮೂಲಕ ಗದಗ ತಾಲೂಕು, ಜಿಲ್ಲೆ ಸೇರಿ ರಾಜ್ಯಾದ್ಯಂತ ಬಡತನ ರೇಖೆಯಲ್ಲಿದ್ದ ಕುಟುಂಬಗಳನ್ನು ಆರ್ಥಿಕವಾಗಿ ಮೇಲೆತ್ತಲು ಸಹಕಾರಿಯಾಗಿದೆ ಎಂದು ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಹೇಳಿದರು.
ನಗರದಲ್ಲಿ ನಡೆದ ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ವಿಶೇಷ ಅಭಿಯಾನದಲ್ಲಿ ಅವರು ಮಾತನಾಡಿದರು.ಈಗಾಗಲೇ ಗದಗ ತಾಲೂಕಿನಲ್ಲಿ ಶೇ. 98ಕ್ಕೂ ಅಧಿಕ ಕುಟುಂಬಗಳು ಪಂಚ ಗ್ಯಾರಂಟಿ ಯೋಜನೆಗಳ ಸದುಪಯೋಗಪಡಿಸಿಕೊಂಡಿವೆ. ಉಳಿದ ಅರ್ಹ ಫಲಾನುಭವಿಗಳನ್ನು ಯೋಜನೆಯ ವ್ಯಾಪ್ತಿಗೆ ಸೇರಿಸಲು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರ ಸಲಹೆಯಂತೆ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಈ ವಿಶೇಷ ಅಭಿಯಾನದಲ್ಲಿ ರೇಷನ್ ಕಾರ್ಡ್ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ, ಕುಟುಂಬದ ಸದಸ್ಯರ ಪೋಟೋ ಬದಲಾವಣೆ, ಕುಟುಂಬದ ಮುಖ್ಯಸ್ಥರ ಬದಲಾವಣೆ ಸೇರಿ ಗೃಹಲಕ್ಷ್ಮೀ, ಯುವನಿಧಿ, ಗೃಹಜ್ಯೋತಿ ಯೋಜನೆಯಡಿ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಪಂಚ ಗ್ಯಾರಂಟಿ ಯೋಜನೆ ವಂಚಿತ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿರುವುದು ಸಂತಸವಾಗಿದೆ. ತಾಲೂಕಿನಲ್ಲಿ ಶೇ.100ಕ್ಕೆ 100ರಷ್ಟು ಅರ್ಹ ಫಲಾನುಭವಿಗಳು ಪಂಚ ಗ್ಯಾರಂಟಿಯಿಂದ ದೂರ ಉಳಿಯಬಾರದು ಎಂಬುದು ನಮ್ಮ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಮತ್ತೊಂದು ದಿನ ನಿಗದಿಪಡಿಸಿ ಮತ್ತೊಮ್ಮೆ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದರು.
ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಗದಗ ತಾಲೂಕಿನಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಈವರೆಗೂ ಉಪಯೋಗ ಪಡೆಯದ ಫಲಾನುಭವಿಗಳಿಗೆ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳುವ ಮೂಲಕ ಪಂಚ ಗ್ಯಾರಂಟಿ ಯೋಜನೆಗಳ ವ್ಯಾಪ್ತಿಗೆ ಸೇರದ 150ಕ್ಕೂ ಅಧಿಕ ಅರ್ಹ ಫಲಾನುಭವಿಗಳನ್ನು ಸೇರ್ಪಡೆಗೊಳಿಸಿರುವುದು ಮಾದರಿಯಾಗಿದ್ದು, ಇದೇ ಮಾದರಿಯಲ್ಲಿ ಗ್ರಾಮ, ಹೋಬಳಿ, ವಾರ್ಡ್ ಮಟ್ಟದಲ್ಲಿ ಅಭಿಯಾನ ಹಮ್ಮಿಕೊಂಡು ರಾಜ್ಯದಲ್ಲಿ 100ಕ್ಕೆ 100ರಷ್ಟು ಅರ್ಹ ಫಲಾನುಭವಿಗಳನ್ನು ಪಂಚ ಗ್ಯಾರಂಟಿ ಯೋಜನೆಗಳ ವ್ಯಾಪ್ತಿಗೆ ಸೇರಿಸಬಹುದಾಗಿದೆ ಎಂದು ಸಚಿವ ಎಚ್.ಕೆ. ಪಾಟೀಲ ಅವರು ಅಭಿಯಾನದ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿ, ಬೆಂಬಲಿಸಿದ್ದಾರೆ ಎಂದು ತಿಳಿಸಿದರು.ಈ ವಿಶೇಷ ಅಭಿಯಾನದಲ್ಲಿ ಗೃಹಲಕ್ಷ್ಮೀ, ಗೃಹಜ್ಯೋತಿ, ಯುವನಿಧಿ ಹಾಗೂ ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿಗಳು ಸೇರಿ ಒಟ್ಟು 150ಕ್ಕೂ ಅಧಿಕ ಅರ್ಜಿಗಳು ಸ್ವೀಕೃತಗೊಂಡಿವೆ.ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಕೃಷ್ಣಗೌಡ ಎಚ್. ಪಾಟೀಲ, ಶಂಭು ಕಾಳೆ, ಸಾವಿತ್ರಿ ಹೂಗಾರ, ದಯಾನಂದ ಪವಾರ, ಸಂಗಮೇಶ ಕೆರಕಲಮಟ್ಟಿ, ಎನ್.ಬಿ. ದೇಸಾಯಿ, ಸಂಗಮೇಶ ಹಾದಿಮನಿ, ರಮೇಶ ಹೊನ್ನಿನಾಯ್ಕರ, ದೇವರಡ್ಡಿ ತಿರ್ಲಾಪೂರ, ಮಲ್ಲಪ್ಪ ದಂಡಿನ, ಗಣೇಶಸಿಂಗ ಮಿಟಾಡೆ, ಮಲ್ಲಪ್ಪ ಬಾರಕೇರ, ಭಾಷಾಸಾಬ ಮಲ್ಲಸಮುದ್ರ ಸೇರಿ ಹಲವರಿದ್ದರು.