ಪಂಚರಾಜ್ಯ ಚುನಾವಣೆ- ಕಾಂಗ್ರೆಸ್ಸಿಗೆ ಕರ್ನಾಟಕವೇ ಎಟಿಎಂ!

| Published : Dec 07 2023, 01:15 AM IST

ಪಂಚರಾಜ್ಯ ಚುನಾವಣೆ- ಕಾಂಗ್ರೆಸ್ಸಿಗೆ ಕರ್ನಾಟಕವೇ ಎಟಿಎಂ!
Share this Article
  • FB
  • TW
  • Linkdin
  • Email

ಸಾರಾಂಶ

ಕಾಂಗ್ರೆಸ್ ದುರಾಡಳಿತದಿಂದ ರಾಜ್ಯದ ಜನರು ತಲೆ ತಗ್ಗಿಸುವಂತಾಗಿದ್ದು, ಲಂಗು-ಲಗಾಮು ಇಲ್ಲದೇ, ಮನಬಂದಂತೆ ಆಡಳಿತ ನಡೆಸಲಾಗುತ್ತಿದೆ. ಭೀಕರ ಬರಗಾಲ ಎದುರಿಸುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಪ್ರವಾಸ ಮಾಡುತ್ತಿಲ್ಲ.

ಶಿರಸಿ:

ಇತ್ತೀಚೆಗೆ ನಡೆದ ಐದು ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್‌ ಕರ್ನಾಟಕವನ್ನು ಎಟಿಎಂ ಆಗಿ ಬಳಸಿಕೊಂಡಿದೆ. ತೆಲಂಗಾಣಕ್ಕೆ ಅಧಿಕ ಪ್ರಮಾಣದ ಹಣದ ಹರಿವು ರಾಜ್ಯದಿಂದ ಆಗಿದೆ ಎಂದು ವಿಧಾನಸಭೆ ಮಾಜಿ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.ಬುಧವಾರ ನಗರದ ದೀನ ದಯಾಳ ಸಭಾಭವನದಲ್ಲಿ ಜಿಲ್ಲಾ ಕಾರ್ಯಕಾರಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ತೆಲಂಗಾಣ ಗೆದ್ದಿರುವುದು ನಾವೇ ಎಂದು ಹೇಳಿಕೊಂಡು ಕಾಂಗ್ರೆಸ್ ಮುಖಂಡರು ಓಡಾಡುತ್ತಿದ್ದಾರೆ. ಬಿಆರ್‌ಎಸ್‌ನಿಂದ ಕಾಂಗ್ರೆಸ್ ಗೆದ್ದಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಲಿ. ಮುಂದಿನ ದಿನಗಳಲ್ಲಿ ತೆಲಂಗಾಣವನ್ನು ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಕಾಂಗ್ರೆಸ್ ದುರಾಡಳಿತದಿಂದ ರಾಜ್ಯದ ಜನರು ತಲೆ ತಗ್ಗಿಸುವಂತಾಗಿದ್ದು, ಲಂಗು-ಲಗಾಮು ಇಲ್ಲದೇ, ಮನಬಂದಂತೆ ಆಡಳಿತ ನಡೆಸಲಾಗುತ್ತಿದೆ. ಭೀಕರ ಬರಗಾಲ ಎದುರಿಸುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಪ್ರವಾಸ ಮಾಡುತ್ತಿಲ್ಲ. ಕೇವಲ ವರ್ಗಾವಣೆ ದಂಧೆ ಮತ್ತು ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದಾರೆ ಎಂದು ದೂರಿದರು.

ಅಲ್ಪಸಂಖ್ಯಾತರ ಓಲೈಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ₹೧೦ ಸಾವಿರ ಕೋಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿ, ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ ಮೇಲಿನ ಸಿಬಿಐ ಪ್ರಕರಣವನ್ನು ಕ್ಯಾಬಿನೆಟ್ ಸಭೆಯಲ್ಲಿ ಚರ್ಚಿಸಿ ಹಿಂತೆಗೆದುಕೊಂಡಿದ್ದಾರೆ. ಅವರು ಪ್ರಾಮಾಣಿಕರಾಗಿದ್ದಾರೆ ತನಿಖೆ ಎದುರಿಸಬೇಕಿತ್ತು ಎಂದು ಪ್ರಶ್ನಿಸಿದರು.ಬಿ.ಆರ್. ಅಂಬೇಡ್ಕರ್‌ ಅವರನ್ನು ಕಾಂಗ್ರೆಸ್ ಅಗೌರವದಿಂದ ನಡೆಸಿಕೊಂಡು ರಾಜಕೀಯ ಅವಕಾಶ ನೀಡದೇ ಅವರನ್ನು ಸೋಲಿಸಿದೆ. ಸ್ವರ್ಗಸ್ಥರಾದ ವೇಳೆ ಅವರ ಅಂತ್ಯಕ್ರಿಯೆಗೆ ಜಾಗ ನೀಡಲಿಲ್ಲ. ಬಾಯಲ್ಲಿ ಮಾತ್ರ ಅಂಬೇಡ್ಕರ್‌ ತತ್ವ ಹೇಳುತ್ತಾರೆ. ಆದರೆ, ಅಟಲ್ ಬಿಹಾರಿ ವಾಜಪೇಯಿ ಮತ್ತು ನರೇಂದ್ರ ಮೋದಿ ಅಂಬೇಡ್ಕರ್‌ ಅವರಿಗೆ ನಿಜಯವಾಗಿಯೂ ಗೌರವ ನೀಡಿದ್ದಾರೆ ಎಂದು ಹೇಳಿದರು.ಬಿಜೆಪಿ ಮೇಲೆ ಜನಸಾಮಾನ್ಯರಿಗೆ ನಂಬಿಕೆ ಹಾಗೂ ವಿಶ್ವಾಸವಿದ್ದು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ೨೮ ಸ್ಥಾನ ಗೆದ್ದು ಮತ್ತೊಮ್ಮೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಸ್ಥಾಪನೆಯಾಗುವಂತೆ ಕಾರ್ಯನಿರ್ವಹಿಸಬೇಕಿದೆ. ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಂಘಟನೆ ಮಾಡಿದ್ದಾರೆ ಎಂದ ಅವರು, ನಮ್ಮ ಜವಾಬ್ದಾರಿ ಮುಂದಿನವರಿಗೆ ಪ್ರೇರಣೆ ನೀಡಬೇಕು. ಜವಾಬ್ದಾರಿ ಬೇರೆ ಆಗಬಹುದು. ಆದರೆ ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು. ಕೇಂದ್ರ ಸರ್ಕಾರದ ಫಲಾನುಭವಿಗಳು ಪ್ರತಿ ಮನೆಯಲ್ಲಿದ್ದಾರೆ. ಆ ಎಲ್ಲ ಕಾರ್ಯಕ್ರಮಗಳನ್ನು ತಿಳಿಸಬೇಕು ಎಂದು ಕಾಗೇರಿ ಕಾರ್ಯಕರ್ತರಿಗೆ ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ವೆಂಕಟೇಶ ನಾಯಕ, ವಿಧಾನಸಭಾ ಚುನಾವಣೆ ನಂತರ ಪಕ್ಷಕ್ಕೆ ಹಿನ್ನಡೆಯಾಗಿತ್ತು. ಇದೀಗ ಉತ್ಸಾಹಿ ಯುವ ನಾಯಕ ಬಿ.ವೈ. ವಿಜಯೇಂದ್ರ ಮತ್ತು ಹಿರಿಯ ನಾಯಕ ಆರ್. ಅಶೋಕ ನೇತೃತ್ವದಲ್ಲಿ ಪಕ್ಷದ ಸಂಘಟನೆ ಮಾಡಬೇಕಿದೆ. ಕೇಂದ್ರ ತಂಡದ ಮಾರ್ಗದರ್ಶನದಂತೆ ಕಾರ್ಯಕರ್ತರ ಪರಿಶ್ರಮದಿಂದ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿದೆ ಎಂದರು.ಜಿಲ್ಲಾ ಪ್ರಭಾರಿ ಗಿರೀಶ ಪಟೇಲ, ವಿಭಾಗ ಸಹ ಪ್ರಭಾರಿ ಎನ್.ಎಸ್. ಹೆಗಡೆ, ಪಶ್ಚಿಮ ಘಟ್ಟ ಕಾರ್ಯಪಡೆ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ, ಪಂಚಾಯತ್‌ ರಾಜ್ ವಿಕೇಂದ್ರೀಕರಣ ಉಪಾಧ್ಯಕ್ಷ ಪ್ರಮೋದ ಹೆಗಡೆ, ಸಹ ಪ್ರಭಾರಿ ಪ್ರಸನ್ನ ಕೆರೆಕೈ, ಮಾಜಿ ಶಾಸಕ ಸುನೀಲ ಹೆಗಡೆ ಉಪಸ್ಥಿತರಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರು ಎಸಳೆ ಸ್ವಾಗತಿಸಿದರು. ಗುರುಪ್ರಸಾದ ಹೆಗಡೆ ಹರ್ತೆಬೈಲ ನಿರೂಪಿಸಿದರು.