ಸಾರಾಂಶ
ಸಬ್ ಜೂನಿಯರ್. ಜೂನಿಯರ್ ಹಾಗೂ ಹಗ್ಗ ಕಿರಿಯ ಸೇರಿದಂತೆ ಸುಮಾರು ೨೦೦ ಜತೆ ಕೋಣಗಳು ಕಂಬಳದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು ೨೪ ಗಂಟೆಯೊಳಗೆ ಕಂಬಳ ಸ್ಪರ್ಧೆಯನ್ನು ಮುಕ್ತಾಯಗೊಳಿಸಲು ತೀರ್ಮಾನಿಸಿದ್ದೇವೆ ಎಂದರು.
ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಪಣಪಿಲ ಜೋಡುಕರೆ ಜಯ-ವಿಜಯ ಕಂಬಳ ಸಮಿತಿ ವತಿಯಿಂದ ೧೫ನೇ ವರ್ಷದ ಜೋಡುಕರೆ ಕಂಬಳ ನವೆಂಬರ್ ೯ರಂದು ಶನಿವಾರ ಪಣಪಿಲದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕಂಬಳ ತೀರ್ಪುಗಾರರ ಸಂಚಾಲಕರಾದ ವಿಜಯ್ ಕುಮಾರ್ ಜೈನ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಗ್ರಾಮೀಣ ಭಾಗದಲ್ಲಿ ಕಂಬಳ ಕ್ರೀಡೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಾಗೂ ಕಂಬಳದ ಯುವ ಓಟಗಾರರಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಪಣಪಿಲದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಕಂಬಳದ ಓಟಗಾರರಾಗಿ ಮಾಡಿದ ಸಾಧನೆಗೆ ರಾಜ್ಯ ಸರಕಾರದಿಂದ ಕ್ರೀಡಾರತ್ನ ಪ್ರಶಸ್ತಿ ಪಡೆದ ಪ್ರವೀಣ್ ಕೋಟ್ಯಾನ್‌ಗೆ ಪಣಪಿಲ ಕಂಬಳ ಪ್ರೇರಣೆಯಾಗಿದೆ. ಸಬ್ ಜೂನಿಯರ್. ಜೂನಿಯರ್ ಹಾಗೂ ಹಗ್ಗ ಕಿರಿಯ ಸೇರಿದಂತೆ ಸುಮಾರು ೨೦೦ ಜತೆ ಕೋಣಗಳು ಕಂಬಳದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು ೨೪ ಗಂಟೆಯೊಳಗೆ ಕಂಬಳ ಸ್ಪರ್ಧೆಯನ್ನು ಮುಕ್ತಾಯಗೊಳಿಸಲು ತೀರ್ಮಾನಿಸಿದ್ದೇವೆ ಎಂದರು.
ನವೆಂಬರ್ ೯ರಂದು ಬೆಳಿಗ್ಗೆ ೮ ಗಂಟೆಗೆ ಪಣಪಿಲ ಅರಮನೆಯ ವಿಮಲ್ ಕುಮಾರ್ ಶೆಟ್ಟಿ ಕಂಬಳವನ್ನು ಉದ್ಘಾಟಿಸಲಿದ್ದು ಕಂಬಳ ಸಮಿತಿ ಅಧ್ಯಕ್ಷ ಯುವರಾಜ್ ಜೈನ್ ಅಧ್ಯಕ್ಷತೆ ವಹಿಸುವರು. ಸಮಿತಿ ಗೌರವ ಅಧ್ಯಕ್ಷ ಶಾಸಕ ಉಮಾನಾಥ ಕೋಟ್ಯಾನ್, ಧರೆಗುಡ್ಡೆ ಪಂಚಾಯಿತಿ ಅಧ್ಯಕ್ಷ ಅಶೋಕ್ ಶೆಟ್ಟಿ ಬೇಲೊಟ್ಟು ಹಾಗೂ ಮತ್ತಿತರರ ಪ್ರಮುಖರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ೮.೩೦ಕ್ಕೆ ನಡೆಯು ಸಭಾ ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.ಸಮಿತಿ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯಾಧ್ಯಕ್ಷ ಸುಭಾಶ್ಚಂದ್ರ ಚೌಟ, ಪ್ರಧಾನ ಕಾರ್ಯದರ್ಶಿ ಅಶ್ವತ್ಥ ಪಣಪಿಲ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.