ಚಾಮರಾಜನಗರ- ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಗ್ರಾಮದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡುತ್ತಿದ್ದು, ಇದಕ್ಕೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಅವೈಜ್ಞಾನಿಕವಾಗಿ ಡಿಪಿಆರ್ ರಚನೆ ಮಾಡಿದ್ದಾರೆ .

ಚಾಮರಾಜನಗರ: ತಾಲೂಕಿನ ಪಣ್ಯದಹುಂಡಿ ಗ್ರಾಮದಲ್ಲಿ ರೈಲ್ವೆ ಮೇಲ್ಸೇತುವೆಯ ಡಿಪಿಆರ್ ರಚನೆ ಮಾಡಿರುವುದು ಅವೈಜ್ಞಾನಿಕವಾಗಿದ್ದು, ಮತ್ತೊಂದು ಸಲ ಪರಿಶೀಲಿಸಿ ಡಿಪಿಆರ್ ಮಾಡಿ ಎಂದು ಆಗ್ರಹಿಸಿ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರಿಂದ ಪ್ರತಿಭಟನೆ ನಡೆಸಲಾಯಿತು.

ಗ್ರಾಮದ ಬಸ್ ನಿಲ್ದಾಣದ ಬಳಿ ಜಮಾಯಿಸಿದ ರೈತಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು, ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.

ರೈತಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಬಸವಣ್ಣ ಮಾತನಾಡಿ, ಚಾಮರಾಜನಗರ- ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಗ್ರಾಮದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡುತ್ತಿದ್ದು, ಇದಕ್ಕೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಅವೈಜ್ಞಾನಿಕವಾಗಿ ಡಿಪಿಆರ್ ರಚನೆ ಮಾಡಿದ್ದಾರೆ ಎಂದು ಆರೋಪಿಸಿದರು,

ಮತ್ತೊಂದು ಡಿಪಿಆರ್ ಅನ್ನು ರಚಿಸಬೇಕು. ಅದರಲ್ಲಿ ರೈಲ್ವೆ ಕೆಳ ಸೇತುವೆ, ಬಸ್ ನಿಲ್ದಾಣ ಹಾಗೂ ಜಮೀನು ಕಳೆದುಕೊಂಡಿರುವ ರೈತರಿಗೆ ಸರಿಸಮಾನವಾಗಿ ಪರಿಹಾರವನ್ನು ವಿತರಣೆ ಮಾಡಬೇಕು ಎಂದು ಆಗ್ರಹ ಮಾಡಿದರು.

ಈ ಮೇಲ್ಸೇತುವೆಯಿಂದಾಗಿ ಇಲ್ಲಿನ ಸುತ್ತಮುತ್ತಲಿನ ಗ್ರಾಮಗಳಿಂದ ಮೈಸೂರಿಗೆ ತೆರಳುವ ರೈತರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಕೂಲಿ ಕಾರ್ಮಿಕರಿಗೆ ತೊಂದರೆಯಾಗುತ್ತದೆ ಎಂದರು.

ಪ್ರತಿಭಟನೆಯಲ್ಲಿ ರೈತಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹೆಗ್ಗೋಠಾರ ವಿಜಯ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೇಲಾಜಿಪುರ ಕುಮಾರ್, ಪದಾಧಿಕಾರಿಗಳಾದ ಸಂತೋಷ, ಮೋಹನ್, ಸಿದ್ದರಾಜು, ದೊರೆರಾಜು, ಸತೀಶ್, ಕುಮಾರ್ ಇನ್ನಿತರರು ಭಾಗವಹಿಸಿದ್ದರು.