ಪದವಿ ಪೂರ್ವ ಉಪನ್ಯಾಸಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳ ಪರಿಹಾರಕ್ಕಾಗಿ ಎಲ್ಲರೂ ಸಂಘಟಿತರಾಗಬೇಕು. ಶಿಕ್ಷಣ, ಸಂಘಟನೆ ಹಾಗೂ ಹೋರಾಟದ ಮಹತ್ವ ಅರಿತು ಮುನ್ನಡೆಯಬೇಕು. ಪ್ರಸ್ತುತ ಸಂದರ್ಭದಲ್ಲಿ ಸಂಘಟನೆ ಇಲ್ಲದೆ ಯಾವುದೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಕಷ್ಟ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಪದವಿ ಪೂರ್ವ ಉಪನ್ಯಾಸಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳ ಪರಿಹಾರಕ್ಕಾಗಿ ಎಲ್ಲರೂ ಸಂಘಟಿತರಾಗಬೇಕು. ಶಿಕ್ಷಣ, ಸಂಘಟನೆ ಹಾಗೂ ಹೋರಾಟದ ಮಹತ್ವ ಅರಿತು ಮುನ್ನಡೆಯಬೇಕು. ಪ್ರಸ್ತುತ ಸಂದರ್ಭದಲ್ಲಿ ಸಂಘಟನೆ ಇಲ್ಲದೆ ಯಾವುದೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಕಷ್ಟ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಹೇಳಿದರು.

ನಗರದ ಎಸ್‌ಜಿಬಿಐಟಿ ಸಭಾಂಗಣದಲ್ಲಿ ಭಾನುವಾರ ನಡೆದ ಕರ್ನಾಟಕ ರಾಜ್ಯ ಪದವಿ ಪೂರ್ವ ಮಹಾವಿದ್ಯಾಲಯಗಳ ನೌಕರರ ಸಂಘದ ಬೆಳಗಾವಿ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ಶೈಕ್ಷಣಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಸೂಕ್ತ ಆದ್ಯತೆ ನೀಡುತ್ತಿಲ್ಲ. ದೇಶದ ಅಭಿವೃದ್ಧಿಗೆ ಶಿಕ್ಷಣವೇ ಮೂಲಾಧಾರ. ಆದರೆ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಅಗತ್ಯ ಪ್ರಮಾಣದ ಅನುದಾನ ಮೀಸಲಿಡುತ್ತಿಲ್ಲ. ಶಾಲಾ ಶಿಕ್ಷಣ ಇಲಾಖೆಯಲ್ಲಿ 79 ಸಾವಿರ ಹುದ್ದೆಗಳು ಖಾಲಿ ಇದ್ದು, ಕೇವಲ 15 ಸಾವಿರ ಹುದ್ದೆಗಳ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ನೇಮಕಾತಿ ಕುರಿತು ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕಳೆದ 10 ವರ್ಷಗಳಿಂದ ನೇಮಕಾತಿ ನಡೆದಿಲ್ಲ. ಹೀಗಿರುವಾಗ ಗುಣಮಟ್ಟದ ಶಿಕ್ಷಣ ನೀಡುವುದು ಹೇಗೆ ಸಾಧ್ಯ? ಸರ್ಕಾರದ ಉದ್ದೇಶ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಬೆಳೆಸುವುದಾಗಿದೆ ಎಂಬ ಅನುಮಾನ ಮೂಡುತ್ತಿದೆ. ಯಾವುದೇ ಸರ್ಕಾರ ಅಧಿಕಾರದಲ್ಲಿದ್ದರೂ ನಾವು ಹೋರಾಟ ನಡೆಸಿದ್ದೇವೆ ಎಂದರು.ಪದವಿ ಪೂರ್ವ ಉಪನ್ಯಾಸಕರಿಗೆ 9 ಮತ್ತು 10ನೇ ತರಗತಿಗಳಿಗೂ ಬೋಧನೆ ಮಾಡಿಸುವ ಚಿಂತನೆ ಸರ್ಕಾರದ ಮಟ್ಟದಲ್ಲಿ ನಡೆಯುತ್ತಿದೆ. ಇದರಿಂದ ಉಪನ್ಯಾಸಕರ ಕರ್ತವ್ಯಕ್ಕೆ ಧಕ್ಕೆಯಾಗುವುದಲ್ಲದೆ, ಕಾರ್ಯದ ಒತ್ತಡವೂ ಹೆಚ್ಚಲಿದೆ. ಹೀಗಾಗಿ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಪದವಿ ಪೂರ್ವ ಮಹಾವಿದ್ಯಾಲಯಗಳ ನೌಕರರ ಸಂಘಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿ ಸರ್ಕಾರವನ್ನು ಎಚ್ಚರಿಸಬೇಕು. ಈ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲಾ ಘಟಕದ ಕಾರ್ಯ ಮಾದರಿಯಾಗಬೇಕು ಎಂದರು.ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪದವಿ ಪೂರ್ವ ಮಹಾವಿದ್ಯಾಲಯಗಳ ನೌಕರರ ಸಂಘದ ಬೆಳಗಾವಿ ಜಿಲ್ಲಾ ಘಟಕದ ಪದಾಧಿಕಾರಿಗಳ ಪಟ್ಟಿಯನ್ನು ಗಣ್ಯರು ಬಿಡುಗಡೆಗೊಳಿಸಿದರು. ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ, ಡಿಡಿಪಿಯು ಎಂ.ಎಂ. ಕಾಂಬಳೆ, ಸಂಘದ ಬೆಳಗಾವಿ ಘಟಕದ ಅಧ್ಯಕ್ಷ ಟಿ.ಎಸ್.ಗಿರಿಯಪ್ಪನವರ, ಗೌರವಾಧ್ಯಕ್ಷ ಎಂ.ಕೆ.ಭಜಂತ್ರಿ, ಬಿ.ವೈ.ಗೌಡರ, ಪ್ರಭು ಶಿವನಾಯ್ಕರ, ಆರ್.ಜಿ.ಮಠ, ಡಾ.ನಾಗರಾಜ ಮರೆಣ್ಣವರ, ಪ್ರಕಾಶ ಶಿವನವ್ವನವರ, ವೈ.ಎಂ.ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಶಿಕ್ಷಣಕ್ಕೆ ಹೆಚ್ಚಿನ ಅನುದಾನ ಅಗತ್ಯ: ತೋಂಟದ ಸಿದ್ಧರಾಮ ಶ್ರೀ

ತೋಂಟದಾರ್ಯ ಸಂಸ್ಥಾನ ಮಠದ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮೀಜಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವಿದೆ. ದೇಶದ ಪ್ರಗತಿಗಾಗಿ ಸರ್ಕಾರಗಳು ಶಿಕ್ಷಣ, ಕೃಷಿ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಿ, ಅಗತ್ಯ ಅನುದಾನ ಮೀಸಲಿಡಬೇಕು ಎಂದರು.ಶೈಕ್ಷಣಿಕ ಕ್ಷೇತ್ರದಲ್ಲಿ 75 ಸಾವಿರ ಹುದ್ದೆಗಳು ಖಾಲಿ ಇರುವುದು ವಿಷಾದನೀಯ. ಇಂದಿನ ಸಂದರ್ಭದಲ್ಲಿ ಪ್ರತಿಯೊಂದನ್ನೂ ಹೋರಾಟದ ಮೂಲಕವೇ ಪಡೆಯಬೇಕಾದ ಪರಿಸ್ಥಿತಿ ಇದೆ. ಶಿಕ್ಷಕರು ಹಾಗೂ ಉಪನ್ಯಾಸಕರ ಹಿತಕ್ಕಾಗಿ ರೂಪಿಸಿರುವ ತಜ್ಞರ ವರದಿಗಳನ್ನು ಸರ್ಕಾರಗಳು ಅನುಷ್ಠಾನಗೊಳಿಸಬೇಕು. ಗಡಿ ಭಾಗದ ಜಿಲ್ಲೆಗಳಲ್ಲಿ ಶಿಕ್ಷಕರ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕು. ಆಗ ಮಾತ್ರ ನಾಡು-ನುಡಿಯ ಬೆಳವಣಿಗೆ ಸಾಧ್ಯ ಎಂದರು.