ಪೋಷಕರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿಲಿ: ಚಂದ್ರಯ್ಯ

| Published : Feb 08 2024, 01:30 AM IST

ಪೋಷಕರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿಲಿ: ಚಂದ್ರಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಪೋಷಕರು ಖಾಸಗಿ ಶಾಲೆಯ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಚಂದ್ರಯ್ಯ ತಿಳಿಸಿದರು.

ಕನ್ನಡಪ್ರಭ ವಾರ್ತೆ ತಿಪಟೂರು

ಪ್ರತಿ ಮಗುವಿಗೂ ಶಿಕ್ಷಣ ದೊರೆಯುವಂತಾಗಬೇಕೆಂಬ ಉದ್ದೇಶದಿಂದ ಸರ್ಕಾರ ಶಿಕ್ಷಣಕ್ಕೆ ಸಂಬಂಧಪಟ್ಟ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಪೋಷಕರು ಖಾಸಗಿ ಶಾಲೆಯ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಚಂದ್ರಯ್ಯ ತಿಳಿಸಿದರು.

ತಾಲೂಕಿನ ಕರಡಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಶಾಲಾ ವಾರ್ಷಿಕೋತ್ಸವ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ವಿಶೇಷ ಯೋಜನೆಗಳನ್ನು ಅನುಷ್ಠಾನಗೊಳಿಸಿ, ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು ತಮ್ಮ ಊರಿನ ಶಾಲೆಗೆ ಮಕ್ಕಳನ್ನು ದಾಖಲಿಸುವ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ದಾಖಲಾತಿ ಹೊಂದಿದ್ದು ಶಿಕ್ಷಕರ ಶ್ರಮ ಹಾಗೂ ಪೋಷಕರ ಸಹಕಾರ ಮುಖ್ಯವಾಗಿದೆ ಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಚ್.ಇ. ರಮೇಶ್ ಮಾತನಾಡಿ, ಆಧುನಿಕ ಜಗತ್ತಿನಲ್ಲಿ ಪ್ರತಿಯೊಬ್ಬರೂ ವಿದ್ಯಾವಂತರಾಗಬೇಕೆಂಬ ಸದುದ್ದೇಶದಿಂದ ಸರ್ಕಾರ ಕಡ್ಡಾಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದ್ದು, ಗ್ರಾಮೀಣ ಪ್ರದೇಶಗಳಿಂದಿಡಿದು ಎಲ್ಲಾ ಕಡೆ ಸರ್ಕಾರಿ ಶಾಲೆಗಳನ್ನು ಉನ್ನತೀಕರಿಸಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಟ್ಟಿದೆ. ಕಲಿಕೆಗೆ ಮುಕ್ತ ವಾತಾವರಣ ಕಲ್ಪಿಸಿದ್ದು, ಉಚಿತ ಸಮವಸ್ತ್ರ, ಪಠ್ಯಪುಸ್ತಕ, ಅಕ್ಷರ ದಾಸೋಹದಂತಹ ಯೋಜನೆಗಳನ್ನು ಜಾರಿಗೆ ತಂದು ಸರ್ಕಾರಿ ಶಾಲೆಗಳಲ್ಲಿ ಕಲಿಯಬೇಕೆಂಬ ಹಂಬಲವನ್ನು ಹೆಚ್ಚಿಸಿದೆ. ಗ್ರಾಮೀಣ ಭಾಗದಲ್ಲಿ ಶಾಲೆಯ ಅಭಿವೃದ್ಧಿಗೆ ಹಳೆಯ ವಿದ್ಯಾರ್ಥಿಗಳ ಸಭೆ ಕರೆದು ಅವಶ್ಯಕತೆ ಇರುವ ಉಪಕರಣಗಳ ಬಗ್ಗೆ ಮಾಹಿತಿ ನೀಡಿ ಉಪಯೋಗ ಪಡೆದುಕೊಳ್ಳಬೇಕು. ತಾಲೂಕಿನಲ್ಲಿ ಶಿಕ್ಷಕರ ಕೊರತೆ ಹೆಚ್ಚಿದ್ದು ಸರ್ಕಾರ ಕೂಡಲೆ ಶಿಕ್ಷಕರನ್ನು ನೇಮಿಸುವ ಕೆಲಸ ಮಾಡಬೇಕೆಂದರು.

ಕೆಪಿಸಿಸಿ ಹಾಗೂ ನಗರಸಭಾ ಸದಸ್ಯ ವಿ. ಯೋಗೇಶ್ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಶಿಕ್ಷಣ ಅತ್ಯಾವಶ್ಯಕವಾಗಿದ್ದು, ಮಕ್ಕಳು ಶ್ರದ್ಧೆ, ಪ್ರಾಮಾಣಿಕತೆ, ಶಿಸ್ತು ಮತ್ತು ಪರಿಶ್ರಮದಿಂದ ಶಿಕ್ಷಣ ಪಡೆದು ಉನ್ನತ ಮಾರ್ಗದಲ್ಲಿ ಸಾಗಬೇಕು. ಅದೇ ರೀತಿ ಸರ್ಕಾರದ ಸೌಲಭ್ಯದೊಂದಿಗೆ ಹಳೆ ವಿದ್ಯಾರ್ಥಿಗಳು ತಾವು ಓದಿದ ಶಾಲೆಗೆ ಕೈಲಾಸ ಸೇವೆ ಸಲ್ಲಿಸುವುದರಿಂದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬಹುದಾಗಿದೆ ಎಂದರು.

ಮುಖ್ಯ ಶಿಕ್ಷಕ ರವೀಶ್ ಮಾತನಾಡಿ, ನಮ್ಮ ಶಾಲೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಕಲಿಕೆಯಲ್ಲಿ ಪಾಲ್ಗೊಂಡಿದ್ದು ಡಿಜಿಟಲ್ ಗ್ರಂಥಾಲಯ, ಉತ್ತಮ ಪರಿಸರದ ಆಟದ ಮೈದಾನ, ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪರದೆಯ ಮುಖಾಂತರ ಪ್ರದರ್ಶಿಸಿ ಮಕ್ಕಳಿಗೆ ಉತ್ತೇಜನ ನೀಡುತ್ತಿದ್ದೇವೆ. ಪ್ರತಿ ಮಗುವಿನ ಆಟೋಟ ಗಮನಿಸಲು ಉತ್ತಮ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಪೋಷಕರು ಮತ್ತು ದಾನಿಗಳು ಸಹಕಾರದಿಂದ ನಮ್ಮ ಶಾಲೆ ನಗರದ ಶಾಲೆಗಳಿಗೆ ಸಮನಾಗಿದೆ ಎಂದರು.

ಈ ಸಂದರ್ಭದಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ದಾನಿಗಳಾದ ಕರಡಾಳು ಗ್ರಾಮದ ಪಟೇಲ್ ಲೋಕೇಶ್, ಮುದ್ದು ಲಿಂಗೇಗೌಡ, ಅನಿತಾ ಸೇರಿದಂತೆ ಶಾಲೆಯ ಶಿಕ್ಷಕರು, ಸಿಬ್ಬಂದಿ ವರ್ಗದವರು, ಮಕ್ಕಳು ಭಾಗವಹಿಸಿದ್ದರು.