ಮಕ್ಕಳ ಬಗ್ಗೆ ಪೋಷಕರು ಕಾಳಜಿವಹಿಸಿ: ನ್ಯಾಯಾಧೀಶೆ ಬಿ.ಎಸ್‌.ಭಾರತಿ

| Published : Jun 27 2024, 01:14 AM IST

ಸಾರಾಂಶ

ಚಾಮರಾಜನಗರದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತು ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಜಾಗೃತಿ ಜಾಥಾ ನಡೆಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಮಕ್ಕಳ ಬಗ್ಗೆ ಪೋಷಕರು ಕಾಳಜಿವಹಿಸಿ ಅವರ ದಿನ ನಿತ್ಯದ ಅಭ್ಯಾಸಗಳ ಬಗ್ಗೆ ಗಮನಹರಿಸಿ ಉತ್ತಮ ಭವಿಷ್ಯ ರೂಪಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಸಲಹೆ ಮಾಡಿದರು.

ನಗರದ ಚಾಮರಾಜೇಶ್ವರ ದೇವಸ್ಥಾನ ಮುಂಭಾಗದಲ್ಲಿಂದು ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.

ಮಾದಕ ವಸ್ತುಗಳ ಸೇವನೆಗೆ ಮಕ್ಕಳು ಹಾಗೂ ಯುವಕರು ಬೇಗನೆ ಆಕರ್ಷಣೆಯಾಗುವುದರಿಂದ ಮಕ್ಕಳ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ. ಪೋಷಕರು ಮಕ್ಕಳ ಹವ್ಯಾಸ, ದಿನನಿತ್ಯದ ಚಟುವಟಿಕೆಗಳ ಬಗ್ಗೆ ಗಮನ ಹರಿಸಬೇಕು ಎಂದರು.ಇತ್ತೀಚಿನ ದಿನಗಳಲ್ಲಿ ಮದ್ಯಪಾನ, ಧೂಮಪಾನ ಹಾಗೂ ಡ್ರಗ್ಸ್‌ಗಳ ಬಳಕೆ ಹೆಚ್ಚಾಗುತ್ತಿದೆ. ಇವುಗಳ ಸೇವನೆಯಿಂದ ಆ ಕ್ಷಣಕ್ಕೆ ಸಂತೋಷವಾಗಬಹುದು ಆದರೆ ಇದರಿಂದ ದೀರ್ಘ ಕಾಲದ ಆರೋಗ್ಯ ಸಮಸ್ಯೆ ಉಂಟಾಗುತ್ತದೆ. ಈ ಬಗ್ಗೆ ಜಾಗೃತಿ ಉಂಟು ಮಾಡಬೇಕಿದೆ. ಇದಕ್ಕಾಗಿಯೇ ಸಾರ್ವಜನಿಕರಲ್ಲಿ ಅರಿವು ಉಂಟು ಮಾಡಲು ಜಾಥಾ, ಮತ್ತಿತ್ತರ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಿದಂಬರ ಅವರು ಮಾತನಾಡಿ ಮಾನಸಿಕ ಮತ್ತು ದೈಹಿಕ ತೊಂದರೆ ಉಂಟುಮಾಡುವ ಮಾದಕ ವಸ್ತುಗಳ ಸೇವೆನೆಯಿಂದ ದೂರವಿರಬೇಕು. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಅರಿವು ಮೂಡಿಸುವ ಉದ್ದೇಶದಿಂದ ಜಾಗೃತಿ ಜಾಥಾ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.

ಜಿಲ್ಲಾ ಆರೋಗ್ಯ ತಜ್ಞ, ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ. ಜಿ. ಚಂದ್ರಶೇಖರ್, ಮನೋರೋಗ ತಜ್ಞರಾದ ಡಾ. ಎಂ.ಎನ್. ರಾಜೇಶ್, ತಾಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ್ ಇನ್ನಿತರರು ಇದ್ದರು.