ಸಾರಾಂಶ
ಸ್ಥಳೀಯ ಪ್ರಾಧಿಕಾರದ ದ್ವೈವಾರ್ಷಿಕ ಚುನಾವಣಾ ಕ್ಷೇತ್ರಕ್ಕೆ ಉಪಚುನಾವಣೆಯ ವೇಳಾಪಟ್ಟಿ ಹೊರಡಿಸಲಾಗಿದ್ದು, ಸೆ.19ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತಡೆಗಟ್ಟುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ವಿವಿಧ ತಂಡಗಳನ್ನು ರಚಿಸಲಾಗಿದೆ.
ಕನ್ನಡಪ್ರಭ ವಾರ್ತೆ ಮಂಗಳೂರು
ಸ್ಥಳೀಯ ಪ್ರಾಧಿಕಾರದ ದ್ವೈವಾರ್ಷಿಕ ಚುನಾವಣಾ ಕ್ಷೇತ್ರಕ್ಕೆ ಉಪಚುನಾವಣೆಯ ವೇಳಾಪಟ್ಟಿ ಹೊರಡಿಸಲಾಗಿದ್ದು, ಸೆ.19ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತಡೆಗಟ್ಟುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ವಿವಿಧ ತಂಡಗಳನ್ನು ರಚಿಸಲಾಗಿದೆ. ಈ ಅವಧಿಯಲ್ಲಿ ರಾಜಕೀಯ ಪಕ್ಷದವರು ಸಾರ್ವಜನಿಕ ಕಾರ್ಯಕ್ರಮ ಮತ್ತು ಪ್ರಚಾರ ಕಾರ್ಯ ಆಯೋಜಿಸುವಾಗ ಜಿಲ್ಲಾಧಿಕಾರಿ ಕಚೇರಿಯ 1ನೇ ಮಹಡಿಯಲ್ಲಿ ತೆರೆಯಲಾದ ಏಕಾಗವಾಕ್ಷಿ ಕೇಂದ್ರಕ್ಕೆ ಮುಂಚಿತವಾಗಿ ಮಾಹಿತಿ ನೀಡಬೇಕು ಹಾಗೂ ಅರ್ಜಿ ಸಲ್ಲಿಸಿ ಅನುಮತಿ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ.ರಾಜಕೀಯ ರಹಿತವಾದ ಇತರ ಸಾರ್ವಜನಿಕ ಸಭೆ, ಸಮಾರಂಭಗಳನ್ನು ನಡೆಸುವ ಆಯೋಜಕರು ಜಿಲ್ಲೆಯ ಎಲ್ಲ ತಾಲೂಕು ಕಚೇರಿಯಲ್ಲಿ ಮತ್ತು ಮಹಾನಗರ ಪಾಲಿಕೆಯಲ್ಲಿ ತೆರೆಯಲಾಗಿರುವ ಏಕಗವಾಕ್ಷಿ ಕೇಂದ್ರಕ್ಕೆ ಮುಂಚಿತವಾಗಿ ಮಾಹಿತಿ ನೀಡಬೇಕು. ಅಲ್ಲದೆ, ಅರ್ಜಿ ಸಲ್ಲಿಸಿ ತಾಲೂಕು ತಹಸೀಲ್ದಾರರಿಂದ ಮತ್ತು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಿಂದ ಅನುಮತಿ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ.ಸಾರ್ವಜನಿಕ ಮದುವೆ ಮತ್ತು ಇನ್ನಿತರ ಖಾಸಗಿ ಕಾರ್ಯಕ್ರಮಗಳನ್ನು ನಡೆಸುವವರು ಅನುಮತಿ ಪಡೆಯುವ ಅವಶ್ಯಕತೆ ಇರುವುದಿಲ್ಲ. ಆದರೆ ಸಭೆ, ಸಮಾರಂಭಗಳಲ್ಲಿ ಯಾವುದೇ ರೀತಿಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಆಯೋಜಕರು ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಕ್ಷೇತ್ರ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.