ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಕ್ರೀಡಾ ಸ್ಫೂರ್ತಿಯಿಂದ ಹಾಗೂ ಹುಮ್ಮಸ್ಸಿನಿಂದ ಭಾಗವಹಿಸುವುದು ಅತ್ಯಂತ ಮುಖ್ಯ.

ಗದಗ: ದಸರಾ ಕ್ರೀಡಾಕೂಟದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಬೇಕು. ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸುಧಾರಿಸುವುದರ ಜೊತೆಗೆ ಆತ್ಮವಿಶ್ವಾಸ, ಶಿಸ್ತು ಮತ್ತು ತಂಡದ ಮನೋಭಾವ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಬಿ.ಬಿ. ಅಸೂಟಿ ಹೇಳಿದರು.

ಅವರು ಶುಕ್ರವಾರ ಗದಗ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಗದಗ ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಕ್ರೀಡಾ ಸ್ಪೂರ್ತಿಯಿಂದ ಹಾಗೂ ಹುಮ್ಮಸ್ಸಿನಿಂದ ಭಾಗವಹಿಸುವುದು ಅತ್ಯಂತ ಮುಖ್ಯ. ಪ್ರತಿಯೊಬ್ಬರೂ ಕ್ರೀಡೆಯ ಮಹತ್ವ ಹಾಗೂ ಅದರಿಂದ ದೊರೆಯುವ ಪ್ರಯೋಜನಗಳನ್ನು ಅರಿತು, ತಮ್ಮ ದೈನಂದಿನ ಜೀವನದಲ್ಲಿ ಯಾವುದಾದರೊಂದು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಅಭ್ಯಾಸ ಬೆಳೆಸಿಕೊಳ್ಳಬೇಕು.

ದಸರಾ ಹಬ್ಬದ ಅಂಗವಾಗಿ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದ್ದು, ಹಬ್ಬದ ಸಂಭ್ರಮ, ಉತ್ಸಾಹ ಮತ್ತು ಸೌಹಾರ್ದತೆಯ ವಾತಾವರಣ ಕ್ರೀಡಾಕೂಟದಲ್ಲಿಯೂ ಮೂಡಿಬರಬೇಕು. ಕ್ರೀಡಾಪಟುಗಳು ಕ್ರೀಡಾ ಸ್ಫೂರ್ತಿಯಿಂದ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು. ಗದಗ ತಾಲೂಕಿನ ಕ್ರೀಡಾಪಟುಗಳು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಉತ್ತಮ ಸಾಧನೆ ಮಾಡುವುದರೊಂದಿಗೆ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟಗಳಲ್ಲಿಯೂ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು. ರಾಜ್ಯಮಟ್ಟದಲ್ಲಿ ಸಾಧನೆಗೈದು ಗದಗ ಜಿಲ್ಲೆ ಹಾಗೂ ತಾಲೂಕಿಗೆ ಕೀರ್ತಿ ತರಬೇಕು ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಎಸ್.ಎನ್. ಬಳ್ಳಾರಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶರಣು ಗೋಗೇರಿ ಸೇರಿದಂತೆ ಅಧಿಕಾರಿಗಳು, ಕ್ರೀಡಾಪಟುಗಳು ಹಾಗೂ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.