ಸಾರಾಂಶ
ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನ-ಪೂರ್ವಸಿದ್ಧತಾ ಸಭೆ
ಕನ್ನಡಪ್ರಭ ವಾರ್ತೆ ಕೊಪ್ಪಳಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಜು. 29ರಿಂದ ಆ. 14ರವರೆಗೆ ಹಮ್ಮಿಕೊಂಡಿರುವ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನ-2024-25 ಕಾರ್ಯಕ್ರಮದಲ್ಲಿ ಅಧಿಕಾರಿಗಳು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಪ್ಪಳ ಇವುಗಳ ಸಂಯುಕ್ತಾಶ್ರಯದಲ್ಲಿ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಜು. 29ರಿಂದ ಆ. 14ರವರೆಗೆ ಹಮ್ಮಿಕೊಂಡಿರುವ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಅಭಿಯಾನಕ್ಕೂ ಒಂದೆರಡು ದಿನಗಳ ಮುನ್ನ ಕಾರ್ಯಕ್ರಮದ ಕುರಿತು ಗ್ರಾಮಗಳಲ್ಲಿ ಧ್ವನಿವರ್ಧಕಗಳ ಮೂಲಕ, ತ್ಯಾಜ್ಯ ಸಂಗ್ರಹ ಮತ್ತು ವಿಲೇವಾರಿ ವಾಹನಗಳ ಮೂಲಕ ಗ್ರಾಮಗಳಲ್ಲಿ ಜಾಗೃತಿ ಮೂಡಿಸಬೇಕು. ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಮುಖಂಡರು ಭಾಗವಹಿಸುವಂತೆ ಕ್ರಮ ವಹಿಸಬೇಕು. ನಗರ ಪ್ರದೇಶಗಳಲ್ಲಿ ವಾರ್ಡ್ ಸದಸ್ಯರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಕ್ರಮ ವಹಿಸಬೇಕು. ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತರು ಮನೆಗೆ ಭೇಟಿ ನೀಡಿದ ಸಂದರ್ಭ ಸಮೀಕ್ಷಾ ತಂಡಕ್ಕೆ ಸಾರ್ವಜನಿಕರು ಸಹಕರಿಸುವಂತೆ ತಿಳುವಳಿಕೆ ಮೂಡಿಸಬೇಕು ಎಂದರು.
ತಾಯಿ ಮರಣ ಪರಿಶೀಲನಾ ಸಭೆ:ಬಳಿಕ ನಡೆದ ತಾಯಿ ಮರಣ ಪರಿಶೀಲನಾ ಸಭೆ ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ನಲಿನ್ ಅತುಲ್, ಬೇರೆ ಜಿಲ್ಲೆಗಳಿಂದ ಕೊನೆಯ ಹಂತದಲ್ಲಿ ನಮ್ಮ ಜಿಲ್ಲಾಸ್ಪತ್ರೆಗೆ ದಾಖಲಾಗುವ ಹೆರಿಗೆ ಪ್ರಕರಣಗಳಲ್ಲಿ ತಾಯಿ ಮರಣ ಹೊಂದಿದ ಪ್ರಕರಣಗಳಲ್ಲಿ ಕಂಡುಕೊಂಡ ವೈದ್ಯಕೀಯ ಅಂಶಗಳನ್ನು ಪಟ್ಟಿ ಮಾಡಿ, ಸಂಬಂಧಿಸಿದ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ವಿವರವಾದ ಪತ್ರ ಬರೆದು ಮಾಹಿತಿ ನೀಡಬೇಕು. ಜಿಲ್ಲೆಯಲ್ಲಿ ಯಾವುದೇ ಗರ್ಭಿಣಿ ಗಂಭೀರ ಆರೋಗ್ಯ ಸಮಸ್ಯೆಯಲ್ಲೂ ಆಸ್ಪತ್ರೆಗೆ ದಾಖಲಾಗಲು ಹಿಂದೇಟು ಹಾಕಿದಾಗ ಸಂಬಂಧಿಸಿದ ಆಶಾ, ಪಿಎಚ್‌ಸಿ ವೈದ್ಯರು ಗರ್ಭಿಣಿ ಹಾಗೂ ಆಕೆಯ ಕುಟುಂಬದವರಿಗೆ ಸೂಕ್ತ ತಿಳುವಳಿಕೆ ನೀಡುವುದರ ಮೂಲಕ ಮನವೊಲಿಸಿ ಅಗತ್ಯ ವೈದ್ಯಕೀಯ ಸೌಲಭ್ಯಕ್ಕೆ ಶಿಫಾರಸ್ಸು ಮಾಡಬೇಕು. ಶಿಫಾರಸ್ಸು ಮಾಡಿದ ವೈದ್ಯರಿಗೆ ಈ ಬಗ್ಗೆ ಮಾಹಿತಿ ನೀಡಬೇಕು ಎಂದು ವೈದ್ಯಾಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಲಿಂಗರಾಜು ಟಿ., ಡಿಎಸ್‌ಒ ಡಾ. ನಂದಕುಮಾರ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರವೀಂದ್ರನಾಥ ಎಂ.ಎಚ್., ಡಿಟಿಒ ಡಾ. ಶಶಿಧರ ಎ., ಡಿಎಲ್‌ಒ ಡಾ. ಪ್ರಕಾಶ ಎಚ್. ಸಿಎಂಒ ಡಾ. ಈಶ್ವರ ಸವಡಿ, ಕಿಮ್ಸ್ ಎಚ್‌ಒಡಿ ಡಾ. ನಾರಾಯಣ, ನಗರಸಭೆ ಪೌರಾಯುಕ್ತ ಗಣಪತಿ ಪಾಟೀಲ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಇತರರಿದ್ದರು.