ಸಾರಾಂಶ
ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಅಥ್ಲೆಟಿಕ್ಸ್ ಕ್ರೀಡಾಕೂಟ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಮಕ್ಕಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಐಕ್ಯತಾ ಮನೋಭಾವ ವೃದ್ಧಿಯಾಗುವುದರೊಂದಿಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸುಸ್ಥಿತಿಯಲ್ಲಿರುತ್ತದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಆಟದ ಮೈದಾನದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಅಥ್ಲೆಟಿಕ್ಸ್ ಕ್ರೀಡಾಕೂಟ, ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಶೇಷ ಚೇತನ ( 14/17 ವಯೋಮಾನ) ಮಕ್ಕಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.ಪ್ರತಿಯೊಂದು ಮಗುವಿಗೂ ಶಿಕ್ಷಣ ಕೊಡಿಸುವುದು ಬಹುಮುಖ್ಯ. ಶಿಕ್ಷಣ ಸಂಸ್ಥೆಯಲ್ಲಿ ಅಕ್ಷರ ಅಭ್ಯಾಸದ ಜೊತೆಗೆ ಶಿಕ್ಷಣದ ಪೂರಕ ಚಟುವಟಿಕೆ ಗಳಾದ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಮಕ್ಕಳು ತಮ್ಮನ್ನು ತಾವು ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸುವುದು ಶಿಕ್ಷಕರ ಕರ್ತವ್ಯ ಎಂದರು.
ಮಕ್ಕಳು ತಮ್ಮ ಐಚ್ಛಿಕ ವಿಷಯದಲ್ಲಿ ವಿಶೇಷ ಆಸಕ್ತಿ ಹಾಗೂ ಜ್ಞಾನ ಹೊಂದಿರುತ್ತಾರೆ. ಅವುಗಳನ್ನು ಗುರುತಿಸಿ ಅವರ ಪ್ರತಿಭೆಯನ್ನು ಸಮಾಜಕ್ಕೆ ಪರಿಚಯಿಸುವಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ. ಪೋಷಕರು ಮಕ್ಕಳ ವಿದ್ಯಾಭ್ಯಾಸದ ಜೊತೆಗೆ ಅವರ ಕ್ರೀಡಾಸಕ್ತಿಯನ್ನು ಪ್ರೋತ್ಸಾಹಿಸಬೇಕು. ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ ಸಧೃಡರಾಗಿರುತ್ತಾರೆ. ರೋಗ ಮುಕ್ತರಾಗಿರಲು ಸಹಕಾರಿ ಹಾಗೂ ನಾಯಕತ್ವದ ಗುಣಗಳು ಬೆಳೆಯುತ್ತವೆ ಎಂದು ಹೇಳಿದರು.ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಕ್ರೀಡೆಗಳಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಥಾನ ದೊರಕಿರುವುದು ಸಂತಸದ ವಿಷಯ. ಸರ್ಕಾರ ಕ್ರೀಡೆಯನ್ನು ಪ್ರೋತ್ಸಾಹಿಸಲು ಹಲವಾರು ಯೋಜನೆ ಜಾರಿಗೆ ತಂದಿದೆ. ಅವುಗಳನ್ನು ಸದುಪಯೋಗ ಪಡಿಸಿಕೊಂಡಲ್ಲಿ ತಮ್ಮ ಗುರಿ ತಲುಪಲು ಸಹಕಾರಿ ಎಂದು ತಿಳಿಸಿದರು.
ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಯು.ವಿ. ಪಾಲಾಕ್ಷಮೂರ್ತಿ ಮಾತನಾಡಿ, ಕ್ರೀಡೆ ಮಕ್ಕಳಲ್ಲಿ ಶಿಸ್ತು ಹಾಗೂ ಬದ್ಧತೆಯ ಪ್ರಜ್ಞೆ ಕಲಿಸುತ್ತದೆ. ಸಮುದಾಯ ಮತ್ತು ಸೌಹಾರ್ದತೆ ಭಾವ ಒದಗಿಸುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆ ಬಹುಮುಖ್ಯ ಪಾತ್ರ ವಹಿಸಿದ್ದು ಅವರ ಪ್ರತಿಭೆ ಹೊರಹಾಕಲು ಕ್ರೀಡಾಕೂಟ ಮುಖ್ಯ ವೇದಿಕೆಯಾಗಿದೆ ಎಂದರು.ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಭೈರೇಗೌಡ ಮಾತನಾಡಿ, ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಕ್ಕಳು ದೈಹಿಕವಾಗಿ ಸಕ್ರಿಯವಾಗಿರಲು ಸಹಾಯ ಮಾಡುತ್ತದೆ. ನಿಯಮಿತ ದೈಹಿಕ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ಸಮನ್ವಯತೆ ಹಾಗೂ ದೈಹಿಕ ಸಹಿಷ್ಣುತೆ ಹೆಚ್ಚಿಸುತ್ತದೆ. ಸ್ನಾಯುಗಳ ಬೆಳವಣಿಗೆ ವೃದ್ಧಿಸಿ ಸದಾ ಆರೋಗ್ಯವಾಗಿರಲು ಕ್ರೀಡೆ ಸಹಕಾರಿ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರನಾಯ್ಕ, ಜಿಲ್ಲಾ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಪಿ. ಕುಮಾರಸ್ವಾಮಿ, ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಯ್ಯ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಪರಮೇಶ್ವರಪ್ಪ ಉಪಸ್ಥಿತರಿದ್ದರು.
5 ಕೆಸಿಕೆಎಂ 3ಚಿಕ್ಕಮಗಳೂರು ಜಿಲ್ಲಾ ಆಟದ ಮೈದಾನದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಶಾಸಕ ಎಚ್.ಡಿ. ತಮ್ಮಯ್ಯ ಉದ್ಘಾಟಿಸಿದರು. ಪಾಲಾಕ್ಷಮೂರ್ತಿ, ಚಂದ್ರನಾಯ್ಕ, ಕುಮಾರಸ್ವಾಮಿ ಇದ್ದರು.