ಕಾರ್ಯಕರ್ತರೇ ಕಾಂಗ್ರೆಸ್ ಪಕ್ಷದ ನಿಜವಾದ ಆಸ್ತಿ. ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸುವಲ್ಲಿ ಕಾರ್ಯಕರ್ತರ ಪರಿಶ್ರಮ, ತ್ಯಾಗ ಹಾಗೂ ಕೊಡುಗೆ ಅಪಾರವಾಗಿದೆ.

ಶೋಷಿತರು, ದುರ್ಬಲ ವರ್ಗದ ಜನರ ಹಿತ ಬಯಸುವ ಕಾಂಗ್ರೆಸ್‌

ಕನ್ನಡಪ್ರಭ ವಾರ್ತೆ ಬ್ಯಾಡಗಿ

ಕಾರ್ಯಕರ್ತರೇ ಕಾಂಗ್ರೆಸ್ ಪಕ್ಷದ ನಿಜವಾದ ಆಸ್ತಿ. ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸುವಲ್ಲಿ ಕಾರ್ಯಕರ್ತರ ಪರಿಶ್ರಮ, ತ್ಯಾಗ ಹಾಗೂ ಕೊಡುಗೆ ಅಪಾರವಾಗಿದೆ. ಕಾರ್ಯಕರ್ತರೇ ಪಕ್ಷದ ಬುನಾದಿಯಾಗಿದ್ದು, ಅವರ ಶ್ರಮದ ಫಲವಾಗಿ ಕಾಂಗ್ರೆಸ್ ಪಕ್ಷ ದೇಶದಲ್ಲಿ ಬಲಿಷ್ಠವಾಗಿ ಬೆಳೆದಿದೆ ಎಂದು ಕನಿಷ್ಠ ವೇತನಾ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹಿದ್ ತಕ್ಕೀಲ್ ಹೇಳಿದರು.

ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾಗಿದ್ದ ಸಂಘಟನಾ ಸೃಜನಾ ಭಹಿಯಾನ-2 ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದಲ್ಲಿ ಬಡವರು, ಶೋಷಿತರು ಹಾಗೂ ದುರ್ಬಲ ವರ್ಗದ ಜನರ ಹಿತ ಬಯಸಿ ಅವರ ಪರವಾಗಿ ನಿರಂತರವಾಗಿ ಧ್ವನಿ ಎತ್ತುವ ಪಕ್ಷ ಕಾಂಗ್ರೆಸ್ ಮಾತ್ರ ಎಂದರು.

ಟಿಕೆಟ್ ಹಂಚಿಕೆ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ:

ಶಾಸಕ ಬಸವರಾಜ ಶಿವಣ್ಣನವರ ಮಾತನಾಡಿ, ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಆಯ್ಕೆ ಮತ್ತು ಟಿಕೆಟ್ ಹಂಚಿಕೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಪಕ್ಷದ ಶಿಸ್ತು ಹಾಗೂ ತೀರ್ಮಾನಕ್ಕೆ ಪ್ರತಿಯೊಬ್ಬರೂ ಬದ್ಧರಾಗಿರಬೇಕು. ಟಿಕೆಟ್ ಯಾರಿಗೆ ದೊರೆತರೂ ವೈಯಕ್ತಿಕ ಪ್ರತಿಷ್ಠೆಯನ್ನು ಬದಿಗಿಟ್ಟು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು. ಪಕ್ಷದೊಳಗಿನ ಭಿನ್ನಾಭಿಪ್ರಾಯಗಳಿಗೆ ಅವಕಾಶ ನೀಡದೆ ಸಂಘಟಿತ ಹೋರಾಟ ನಡೆಸಬೇಕು ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

ಮನೆ ಮನೆಗೆ ತಲುಪಿಸಿ:

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿ, ಪಕ್ಷದ ತತ್ವ, ಸಿದ್ಧಾಂತ ಹಾಗೂ ಜನಪರ ಕಾರ್ಯಕ್ರಮಗಳನ್ನು ಪ್ರತಿಯೊಬ್ಬ ಕಾರ್ಯಕರ್ತರು ಮನೆ-ಮನೆಗೆ ತಲುಪಿಸಬೇಕು. ಪಕ್ಷದ ಸಂಘಟನೆಯಲ್ಲಿ ಕಾರ್ಯಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಚುನಾವಣೆ ಸಂದರ್ಭದಲ್ಲಿ ಮಾತ್ರವಲ್ಲದೆ ನಿರಂತರವಾಗಿ ಜನರೊಂದಿಗೆ ಸಂಪರ್ಕದಲ್ಲಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಪಕ್ಷದ ಸಂಘಟನೆ ಬಲಗೊಂಡಾಗ ಮಾತ್ರ ಮುಂಬರುವ ಚುನಾವಣೆಗಳಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ ಎಂದರು.

ಚುನಾವಣೆಗೆ ಸಿದ್ಧರಾಗಿ:

ಪಂಚ ಗ್ಯಾರಂಟಿ ಯೋಜನೆ ರಾಜ್ಯ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಮಾತನಾಡಿ, ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಗಮನದಲ್ಲಿಟ್ಟುಕೊಂಡು ಕಾರ್ಯಕರ್ತರು ಈಗಿನಿಂದಲೇ ಸಂಘಟನಾತ್ಮಕವಾಗಿ ಸಜ್ಜಾಗಬೇಕು. ಗ್ರಾಮೀಣ ಭಾಗದಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಿ, ಪ್ರತಿಯೊಂದು ಗ್ರಾಮ ಹಾಗೂ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಪಕ್ಷದ ಗೆಲುವಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.

ಸಭೆಯಲ್ಲಿ ಪಕ್ಷದ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಮತ ಚಲಾವಣೆ:

ಕಾಂಗ್ರೆಸ್ ತಾಲೂಕಾಧ್ಯಕ್ಷ ಸ್ಥಾನಕ್ಕೆ ದಾನಪ್ಪ ಚೂರಿ ರಾಜೀನಾಮೆ ನೀಡಿದ ಹಿನ್ನೆಲೆ ತೆರವಾಗಿರುವ ಸ್ಥಾನಕ್ಕೆ ಹಲವು ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆ ಪಟ್ಟಣದ ಕಾಂಗ್ರೆಸ್ ಭವನದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿರುವ ಆಕಾಂಕ್ಷಿಗಳ ಪರವಾಗಿ ಕಾಂಗ್ರೆಸ್ ಮುಖಂಡರು ತಮ್ಮ ತಮ್ಮ ಮತ ಚಲಾಯಿಸಿದರು. ಮುಖಂಡರ ಅಭಿಪ್ರಾಯ ಹಾಗೂ ಮತಗಳ ವಿವರವನ್ನು ಕಾಂಗ್ರೆಸ್ ಹೈಕಮಾಂಡ್ ಪರಿಶೀಲಿಸಿ, ಅಂತಿಮ ನಿರ್ಧಾರ ಕೈಗೊಂಡ ಬಳಿಕ ನೂತನ ತಾಲೂಕಾಧ್ಯಕ್ಷರ ಹೆಸರನ್ನು ಅಧಿಕೃತವಾಗಿ ಘೋಷಿಸಲಿದೆ.