ಯಾವುದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಚುನಾವಣೆಗಳ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದ್ದು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಈಗಿನಿಂದಲೇ ಚುನಾವಣೆಗೆ ಸನ್ನದ್ಧರಾಗಬೇಕು ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ದೇವರಹಿಪ್ಪರಗಿ ಉಸ್ತುವಾರಿ ಡಾ.ಪ್ರಭುಗೌಡ ಲಿಂಗದಳ್ಳಿ (ಚಬನೂರ) ಹೇಳಿದರು.
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ
ಯಾವುದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಚುನಾವಣೆಗಳ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದ್ದು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಈಗಿನಿಂದಲೇ ಚುನಾವಣೆಗೆ ಸನ್ನದ್ಧರಾಗಬೇಕು ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ದೇವರಹಿಪ್ಪರಗಿ ಉಸ್ತುವಾರಿ ಡಾ.ಪ್ರಭುಗೌಡ ಲಿಂಗದಳ್ಳಿ (ಚಬನೂರ) ಹೇಳಿದರು.ತಾಲೂಕಿನ ಮುಳಸಾವಳಗಿ ಜಿಲ್ಲಾ ಪಂಚಾಯತಿ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ನಮ್ಮದೇ ಪಕ್ಷದ ಸರ್ಕಾರವಿದ್ದು, ವಿಧಾನಸಭಾ ಚುನಾವಣೆಯಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಲಾಗಿದೆ. ಸರ್ಕಾರದ ಜನಪರ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಮೂಲಕ ಮುಂಬರುವ ಜಿಪಂ ಮತ್ತು ತಾಪಂ ಚುನಾವಣೆಗಳನ್ನು ಎದುರಿಸಬೇಕು ಎಂದರು.ಮತಕ್ಷೇತ್ರದ ಎಲ್ಲ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಪಕ್ಷದ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾರ್ಯಕರ್ತರೂ ಗ್ರಾಮಮಟ್ಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು ಎಲ್ಲರೂ ಒಗ್ಗಟ್ಟಿನಿಂದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದರು.ಸಭೆಯಲ್ಲಿ ಜಿಪಂ ಹಾಗೂ ತಾಪಂ ಚುನಾವಣೆಯ ಆಕಾಂಕ್ಷಿಗಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸೀರ ಅಹ್ಮದ್ ಬೇಪಾರಿ, ಮುಖಂಡರುಗಳಾದ ಸುರೇಶಗೌಡ ಬಿರಾದಾರ, ಅಡಿವಪ್ಪ ಕೊಂಡಗೂಳಿ, ತಿಪ್ಪಣ್ಣ ಮೂಲಿಮನಿ, ಸುಭಾಷ ಹೊಸಟ್ಟಿ, ನೀಲಪ್ಪ ನಾಟಿಕಾರ, ಬಸು ಇಮ್ಮಣ್ಣ, ಸಾಯಬಣ್ಣ ಸೊನ್ನಹಳ್ಳಿ,ಡಾ. ರಮೇಶ ರಾಠೋಡ, ಭೀಮಶಂಕರಗೌಡ ಪಾಟೀಲ, ರಾಜಶೇಖರ ಕೋಣಶಿರಸಿಗಿ, ಮಲ್ಲಿಕಾರ್ಜುನ ಬಸವರೆಡ್ಡಿ, ಮಲ್ಕಪ್ಪ ನಾಯ್ಕೋಡಿ, ಲಲಿತಾ ದೊಡಮನಿ, ಶ್ರೀಕಾಂತ್ ರಾಠೋಡ ಸೇರಿದಂತೆ ಮುಳಸಾವಳಗಿ ಜಿಪಂ ಕ್ಷೇತ್ರದ ವ್ಯಾಪ್ತಿಯ ವಿವಿಧ ಗ್ರಾಮಗಳ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಮಹಿಳೆಯರು ಹಾಗೂ ಚುನಾವಣಾ ಆಕಾಂಕ್ಷಿಗಳು ಉಪಸ್ಥಿತರಿದ್ದರು.