ಪ್ರಧಾನಮಂತ್ರಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಡಯಾಲಿಸಿಸ್ ಸೇವೆ ಲಭ್ಯವಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ್ಲಾ ರಮೇಶ್ ಬಾಬು ಹೇಳಿದರು.

ಬಳ್ಳಾರಿ: ಜಿಲ್ಲೆಯ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಡಯಾಲಿಸಿಸ್ ಸೇವೆ ಲಭ್ಯವಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ್ಲಾ ರಮೇಶ್ ಬಾಬು ಹೇಳಿದರು.

ಜಿಲ್ಲಾಸ್ಪತ್ರೆಯಲ್ಲಿ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಮಾಹಿತಿ ನೀಡುತ್ತ ಡಯಾಲಿಸಿಸ್ ಸೇವೆಗಳನ್ನು ಅರ್ಹ ರೋಗಿಗಳಿಗೆ ಸೂಕ್ತ ಸಮಯದಲ್ಲಿ ಒದಗಿಸುವುದು ಮುಖ್ಯವಾಗಿದೆ ಎಂದರು.

ಬಳ್ಳಾರಿ ಜಿಲ್ಲೆಯಲ್ಲಿ ಈಗಾಗಲೇ ಜಿಲ್ಲಾಸ್ಪತ್ರೆ, ಸಿರುಗುಪ್ಪ ಸಾರ್ವಜನಿಕ ಆಸ್ಪತ್ರೆ ಹಾಗೂ ಸಂಡೂರು ತಾಲೂಕುಗಳಲ್ಲಿ ಡಯಾಲಿಸಿಸ್ ಕೇಂದ್ರಗಳು ಉಚಿತವಾಗಿ ಡಯಾಲಿಸಿಸ್ ಸೇವೆ ಒದಗಿಸುತ್ತಿವೆ. ಹೊಸದಾಗಿ ಕುರುಗೋಡು ಹಾಗೂ ಕಂಪ್ಲಿ ತಾಲೂಕುಗಳ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ 2 ಡಯಾಲಿಸಿಸ್ ಕೇಂದ್ರಗಳು ಹೊಸದಾಗಿ ಅನುಮೋದನೆಯಾಗಿದ್ದು, ಡಯಾಲಿಸಿಸ್ ಸೇವೆಗಳು ಪ್ರಾರಂಭಿಸುವ ಹಂತದಲ್ಲಿದೆ ಎಂದು ತಿಳಿಸಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎನ್. ಬಸರೆಡ್ಡಿ ಅವರು ಮಾತನಾಡಿ, ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ (ಬಿ.ಎಮ್.ಸಿ.ಆರ್.ಸಿ)ಯಲ್ಲಿ 100, ಜಿಲ್ಲಾ ಆಸ್ಪತ್ರೆ-50, ಸಿರುಗುಪ್ಪ ಸಾರ್ವಜನಿಕ ಆಸ್ಪತ್ರೆ-7, ಸಂಡೂರು ಸಾರ್ವಜನಿಕ ಆಸ್ಪತ್ರೆ-6 ಸೇರಿದಂತೆ ಒಟ್ಟು 163 ರೋಗಿಗಳು ಉಚಿತ ಡಯಾಲಿಸಿಸ್ ಸೇವೆ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

ಡಯಾಲಿಸಿಸ್ ಸೇವೆಗಳಿಗೆ ಅವಶ್ಯವಿರುವ ಸಾಮಗ್ರಿ ಏಕಬಳಕೆ ಡಯಾಲೈಜರನ್ನು ಉಪಯೋಗಿಸಲಾಗುತ್ತಿದೆ. ತಾಲೂಕು ಆಸ್ಪತ್ರೆಗಳಲ್ಲಿನ (ತಾಲೂಕುಗಳಲ್ಲಿರುವ ಸಾರ್ವಜನಿಕ ಆಸ್ಪತ್ರೆ) ಡಯಾಲಿಸಿಸ್ ಕೇಂದ್ರಗಳಲ್ಲಿ ಡಯಾಲಿಸಿಸ್ ಪ್ರಕ್ರಿಯೆ. ಕಾರ್ಯವಿಧಾನ ಮುಗಿದ ನಂತರ ರೋಗಿಗಳನ್ನು ಸಂಬಂಧಪಟ್ಟ ಆಸ್ಪತ್ರೆಯ ವ್ಯಾಪ್ತಿಯ ನಗು ಮಗು ವಾಹನದ ಮೂಲಕ ಮನೆಗೆ ತೆರಳಲು ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಸೇವೆಗಳನ್ನು ಸೂಕ್ತ ಸಮಯದಲ್ಲಿ ಒದಗಿಸಲಾಗುತ್ತಿದೆ ಹಾಗೂ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಸೇವೆಯನ್ನು ಪಡೆಯುತ್ತಿರುವ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಸೇವೆಯನ್ನು ಪಡೆಯಲು ಮನವೊಲಿಸಲು ಆಪ್ತ ಸಮಾಲೋಚನ ನಡೆಸಲಾಗುತ್ತಿದೆ ಎಂದು ಡಾ. ಎನ್. ಬಸರೆಡ್ಡಿ ತಿಳಿಸಿದರು. ಈ ಸಂದರ್ಭದಲ್ಲಿ ವೈದ್ಯರು, ಸಾರ್ವಜನಿಕರು ಇದ್ದರು.