ಹಾವೇರಿ: ದೇಶದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ದೇಶಭಕ್ತಿಯನ್ನು ಸ್ಮರಿಸುತ್ತಾ, ರಾಷ್ಟ್ರೀಯ ಏಕತೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಆತ್ಮನಿರ್ಭರ ಭಾರತದ ನಿರ್ಮಾಣದ ಸಂಕಲ್ಪದೊಂದಿಗೆ ನಗರದ ಕೆಎಲ್‌ಇ ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದಲ್ಲಿ 80ನೇ ಸ್ವಾತಂತ್ರ್ಯ ದಿನ ಆಚರಿಸಲಾಯಿತು.

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಪ್ರಾಚಾರ್ಯ ಪ್ರೊ. ಎಂ. ಎಂ. ಹೊಳ್ಳಿಯವರ ಮಾತನಾಡಿ, ಭಾರತದ ಸ್ವಾತಂತ್ರ್ಯವು ಅನೇಕ ಹೋರಾಟಗಾರರ ನಿರಂತರ ಹೋರಾಟ, ತ್ಯಾಗ ಮತ್ತು ಬಲಿದಾನದ ಫಲವಾಗಿದೆ. ಅವರ ಆದರ್ಶಗಳನ್ನು ಇಂದಿನ ಯುವಜನತೆ ಅಳವಡಿಸಿಕೊಂಡು ದೇಶದ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡಬೇಕಿದೆ. ಯುವಜನರಲ್ಲಿ ದೇಶಭಕ್ತಿ, ಸಂವಿಧಾನದ ಮೌಲ್ಯಗಳು, ಸಾಮಾಜಿಕ ಹೊಣೆಗಾರಿಕೆ ಹಾಗೂ ರಾಷ್ಟ್ರೀಯ ಏಕತೆಯ ಮನೋಭಾವ ಬೆಳೆಸುವ ಅಗತ್ಯವಿದೆ. ವಿದ್ಯಾರ್ಥಿಗಳು ದೇಶದ ಭವಿಷ್ಯದ ಶಕ್ತಿಯಾಗಿದ್ದು, ಜ್ಞಾನ, ಕೌಶಲ್ಯ, ಶಿಸ್ತು ಮತ್ತು ಸೇವಾ ಮನೋಭಾವದ ಮೂಲಕ ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.

ರಾಷ್ಟ್ರಗೀತೆ ಹಾಗೂ ದೇಶಭಕ್ತಿ ಗೀತೆಗಳ ಮೂಲಕ ದೇಶದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಲಾಯಿತು. ಮಹಾತ್ಮ ಗಾಂಧೀಜಿ, ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಸೇರಿದಂತೆ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಲಾಯಿತು. ಸ್ವಾತಂತ್ರ‍್ಯ ದಿನಾಚರಣೆಯ ಸಂದರ್ಭದಲ್ಲಿ “ವಂದೇ ಮಾತರಂ” ಹಾಗೂ “ಆತ್ಮನಿರ್ಭರ ಭಾರತ”ದ ಆಶಯಗಳಿಗೆ ವಿಶೇಷ ಮಹತ್ವ ನೀಡಲಾಯಿತು. ದೇಶವು ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ, ರಕ್ಷಣಾ ಕ್ಷೇತ್ರ, ಕೃಷಿ ಹಾಗೂ ಕೈಗಾರಿಕಾ ಕ್ಷೇತ್ರಗಳಲ್ಲಿ ಸ್ವಾವಲಂಬನೆಯತ್ತ ಮುನ್ನಡೆಯುತ್ತಿರುವುದನ್ನು ಸ್ಮರಿಸಲಾಯಿತು.

ಇದೇ ಸಂದರ್ಭದಲ್ಲಿ ಹಾವೇರಿ ವಿಶ್ವವಿದ್ಯಾಲಯದ ವ್ಯಾಪ್ತಿಯ ಮಹಾವಿದ್ಯಾಲಯದ ಬಿ.ಎಸ್ಸಿ. 3ನೇ ಸೆಮಿಸ್ಟರ್ ವಿದ್ಯಾರ್ಥಿನಿ ಹಾಗೂ ಎನ್.ಎಸ್.ಎಸ್. ಸ್ವಯಂಸೇವಕಿ ತುಂಗಾ ಶಿವಲಿಂಗಯ್ಯ ಅವರು ಕರ್ನಾಟಕ ರಾಜ್ಯದ ಪ್ರತಿನಿಧಿಯಾಗಿ ನವದೆಹಲಿಯ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗವಹಿಸಿದ್ದರ ತರುವಾಯ ಅವರ ಸಾಧನೆಯನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಪದವಿಪೂರ್ವ ಪಾಚಾರ್ಯ ಡಾ. ಜೆ. ಆರ್. ಶಿಂಧೆ, ಬಿಸಿಎ ಪ್ರಾಚಾರ್ಯ ವೆಂಕಟೇಶ ಕಲಾಲ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು. ಎನ್‌ಸಿಸಿ ಅಧಿಕಾರಿ ಡಾ. ನಾಗರಾಜ್ ಎಂ. ಸ್ವಾಗತಿಸಿ ನಿರ್ವಹಿಸಿದರು. ಎನ್.ಎಸ್.ಎಸ್. ಅಧಿಕಾರಿ ಡಾ. ಶಮಂತಕುಮಾರ್ ಕೆ. ಎಸ್. ವಂದಿಸಿದರು.