ಸಾರಾಂಶ
ಮಂಗಳೂರು ವಿಶ್ವ ವಿದ್ಯಾನಿಲಯದಡಿ ಕೊಡಗಿನಲ್ಲಿ ಸುಮಾರು 45ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದು, ಕಳೆದ ಐದು ತಿಂಗಳಿಂದ ವೇತನ ಪಾವತಿಯಾಗಿಲ್ಲ. ಇದರಿಂದ ಬೇಸತ್ತ ಅತಿಥಿ ಉಪನ್ಯಾಸಕರು ಕಳೆದ ನಾಲ್ಕು ದಿನಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕನ್ನಡಪ್ರಭ ವಾರ್ತೆ ಮಡಿಕೇರಿ
ಬಾಕಿ ವೇತನ ನೀಡುವಂತೆ ಆಗ್ರಹಿಸಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರು ಸೋಮವಾರ ಮಾಸ್ಕ್ ಧರಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಅತಿಥಿ ಉಪನ್ಯಾಸಕರ ಪ್ರತಿಭಟನೆಗೆ ವಿವಿಧ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ.ಮಂಗಳೂರು ವಿಶ್ವ ವಿದ್ಯಾನಿಲಯದಡಿ ಕೊಡಗಿನಲ್ಲಿ ಸುಮಾರು 45ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದು, ಕಳೆದ ಐದು ತಿಂಗಳಿಂದ ವೇತನ ಪಾವತಿಯಾಗಿಲ್ಲ. ಇದರಿಂದ ಬೇಸತ್ತ ಅತಿಥಿ ಉಪನ್ಯಾಸಕರು ಕಳೆದ ನಾಲ್ಕು ದಿನಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಸೋಮವಾರ ಕಾಲೇಜಿನ ಮಾಜಿ ಪ್ರಾಂಶುಪಾಲರು, ಮಾಜಿ ಸಿಂಡಿಕೇಟ್ ಸದಸ್ಯೆ ಮತ್ತು ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷೆ ಡಾ. ಪಾರ್ವತಿ ಅಪ್ಪಯ್ಯ ಭೇಟಿ ನೀಡಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿ ನಂತರ ಪ್ರಾಂಶುಪಾಲರೊಂದಿಗೆ ಚರ್ಚೆ ನಡೆಸಿದರು.ಕೊಡಗು ರಕ್ಷಣಾ ವೇದಿಕೆ ಅಧ್ಯಕ್ಷ ವಕೀಲ ಪವನ್ ಪೆಮ್ಮಯ್ಯ, ಪದಾಧಿಕಾರಿಗಳಾದ ಶರತ್, ಸಮೀರ್ ಮತ್ತು ರಂಜನ್ ಅವರು ಧರಣಿಯಲ್ಲಿ ಕುಳಿತು ಬೆಂಬಲ ಸೂಚಿಸಿದರು.
ಕೊಡಗು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಮತ್ತು ಪಕ್ಷದ ಧುರೀಣ ಟಿ. ಪಿ ರಮೇಶ್, ಮುನೀರ್ ಅಹಮದ್, ಕೊಲ್ಯದ ಗಿರೀಶ್ ಆಗಮಿಸಿ ಸಮಸ್ಯೆಗಳ ಬಗ್ಗೆ ತಿಳಿದು ಶಾಸಕರು ಮತ್ತು ಸರಕಾರದ ಗಮನ ಸೆಳೆಯುವುದಾಗಿ ಭರವಸೆ ನೀಡಿದರು. ಎಲ್ಲಾ ಬಾಕಿ ವೇತನ ಬರುವವರೆಗೆ ಧರಣಿ ಮುಂದುವರಿಯುತ್ತದೆ ಎಂದು ಅತಿಥಿ ಉಪನ್ಯಾಸಕರು ಭೇಟಿ ನೀಡಿದವರೊಂದಿಗೆ ಸ್ಪಷ್ಟ ಪಡಿಸಿದರು.