ಸಾರಾಂಶ
ಕನ್ನಡಪ್ರಭ ವಾರ್ತೆ ಮದ್ದೂರು
ಪುರಸಭೆ ವ್ಯಾಪ್ತಿಯಲ್ಲಿ ಈ ಹಿಂದೆ ಕಾಮಗಾರಿಗಳನ್ನು ಪೂರ್ಣಗೊಳಿಸದ ಗುತ್ತಿಗೆದಾರರಿಗೆ ಬಿಲ್ ಹಣ ಪಾವತಿ ಮಾಡಿರುವ ಮುಖ್ಯಾಧಿಕಾರಿ ಮೀನಾಕ್ಷಿ ಅವರ ಕ್ರಮವನ್ನು ಜೆಡಿಎಸ್ ಸದಸ್ಯರು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಪ್ರಸಂಗ ಜರುಗಿತು.ಪಟ್ಟಣದ ಪುರಸಭೆ ಎಸ್.ಎಂ.ಕೃಷ್ಣ ಸಭಾಂಗಣದಲ್ಲಿ ಅಧ್ಯಕ್ಷರು ಕೋಕಿಲ ಅರುಣ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ವಿಶೇಷ ಸಭೆಯಲ್ಲಿ ಅಪೂರ್ಣ ಕಾಮಗಾರಿಗೆ ಬಿಲ್ ಪಾವತಿ ಮಾಡಿರುವ ಬಗ್ಗೆ ಜೆಡಿಎಸ್ ಸದಸ್ಯರು ವಿರೋಧ ವ್ಯಕ್ತಪಡಿಸುತ್ತಿದ್ದರೂ ಸಹ ಆಡಳಿತಾರೂಢ ಕಾಂಗ್ರೆಸ್ ಸದಸ್ಯರು ಜಾಣ ಕುರುಡು ಪ್ರದರ್ಶನ ನಡೆಸಿದ್ದು, ತೀವ್ರ ಚರ್ಚೆಗೆ ಗ್ರಾಸವಾಯಿತು.
ಜೆಡಿಎಸ್ ಸದಸ್ಯರಾದ ಎಂ.ಐ.ಪ್ರವೀಣ್, ಮನೋಜ್, ಪ್ರಿಯಾಂಕ, ಅಪ್ಪು ಗೌಡ ಹಾಗೂ ನಂದೀಶ್ ಅವರು, ಪುರಸಭೆ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿರುವ ಕಾಮಗಾರಿಗಳನ್ನು ಗುತ್ತಿಗೆದಾರರು ಅಪೂರ್ಣಗೊಳಿಸಿದ್ದಾರೆ. ಈ ಬಗ್ಗೆ ಸದಸ್ಯರ ಗಮನಕ್ಕೆ ತಾರದೆ ಬಿಲ್ ಪಾವತಿ ಮಾಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.ಪಟ್ಟಣ ವ್ಯಾಪ್ತಿಯಲ್ಲಿ ಹಿಂದೆ ನಡೆದಿರುವ ಕುಡಿಯುವ ನೀರು ಮತ್ತು ಒಳಚರಂಡಿ ಯೋಜನೆಗಳ ಕಾಮಗಾರಿಗಳು ಸಮರ್ಪಕವಾಗಿ ನಡೆಯದಿರುವ ಬಗ್ಗೆ ಹತ್ತಾರು ಬಾರಿ ಸಭೆ ಗಮನಕ್ಕೆ ತಂದಿದ್ದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದರು.ಅನುದಾನ ಹಂಚಿಕೆ, ಕ್ರಿಯಾಯೋಜನೆಗಳ ಕಾಮಗಾರಿಗಳ ಅನುಷ್ಠಾನ ಸೇರಿದಂತೆ ಹಲವು ವಿಷಯಗಳ ಬಗ್ಗೆ ವಿರೋಧ ಪಕ್ಷಗಳ ಸದಸ್ಯರನ್ನು ಹಿಂದಿನಿಂದಲೂ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಜೆಡಿಎಸ್ ಸದಸ್ಯರು ಸಭೆಯಲ್ಲಿ ಗಂಭೀರ ಆರೋಪ ಮಾಡಿದರು.
ವಾರ್ಡ್ ಗಳ ಅಭಿವೃದ್ಧಿ ಕಾಮಗಾರಿಗೆ ಬಿಡುಗಡೆಯಾಗಿರುವ ಅನುದಾನ ಕುರಿತಂತೆ ಸದಸ್ಯರ ಅನುಮೋದನೆ ಪಡೆಯಲಷ್ಟೇ ಸಭೆ ಕರೆಯಲಾಗಿದೆ. ಅನುದಾನ ಬಿಡುಗಡೆ ಸಂಬಂಧ ಇದುವರೆಗೆ ಯಾವ ಕ್ರಿಯಾಯೋಜನೆ ತಯಾರಿಸಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿರುವ ಬಗ್ಗೆ ಚುನಾಯಿತ ಸದಸ್ಯರಿಗೆ ಮಾಹಿತಿ ನೀಡುತ್ತಿಲ್ಲ ಎಂದು ಆರೋಪಿಸಿದರು.ಅನುದಾನ ಬಿಡುಗಡೆ ಸಂಬಂಧ ಮುಂದಿನ ಸಭೆಗಳಲ್ಲಿ ಕ್ರಿಯಾಯೋಜನೆ ತಯಾರಿಸುವ ಮೂಲಕ ಅಪೂರ್ಣಗೊಂಡಿರುವ ಕಾಮಗಾರಿಗಳನ್ನು ಪೂರ್ಣ ಗೊಳಿಸುವ ಬಗ್ಗೆ ಸದಸ್ಯರಿಗೆ ಮಾಹಿತಿ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಮುಖ್ಯ ಅಧಿಕಾರಿ ಮೀನಾಕ್ಷಿ ಆಶ್ವಾಸನೆ ನೀಡಿದರು.
2025ನೇ ಸಾಲಿನಲ್ಲಿ ಬಿಡುಗಡೆಯಾಗಿರುವ 1.28 ಕೋಟಿ ರು. ಅನುದಾನದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಕ್ರಿಯಾ ಯೋಜನೆ ತಯಾರಿಸಿ ಸಭೆ ಅನುಮೋದನೆ ಪಡೆಯಲಾಯಿತು. ತಾಲೂಕಿನ ಊತಗೆರೆ ಗ್ರಾಮದ ಘನತ್ಯಾಜ್ಯ ವಿಲೇವಾರಿ ಘಟಕದ ಕಾಂಪೌಂಡ್ ನಿರ್ಮಾಣ, ವಿದ್ಯುತ್ ಕಾಮಗಾರಿ, ಪುರಸಭೆ ಆವರಣದಲ್ಲಿ ಘನತಾಜ್ಯ ವಸ್ತುಗಳ ಸಾಗಾಣಿಕೆ ವಾಹನಗಳಿಗೆ ಹೆಚ್ಚುವರಿ ಶೆಡ್, ವಾಶಿಂಗ್ ಪ್ಯಾಂಟ್ ನಿರ್ಮಾಣ ಸೇರಿದಂತೆ ಹಲವು ವಿಷಯಗಳಿಗೆ ಸಭೆಯಲ್ಲಿ ಅನುಮೋದನೆ ಪಡೆಯಲಾಯಿತು.ಸಭೆಯಲ್ಲಿ ಉಪಾಧ್ಯಕ್ಷ ಟಿ.ಆರ್. ಪ್ರಸನ್ನ ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ವನಿತಾ ಸೇರಿದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಚರ್ಚೆಯಲ್ಲಿ ಭಾಗವಹಿಸಿದ್ದರು.