ಪಟ್ಟಣ ಸಮೀಪದ ಆಶಿಹಾಳ ಗ್ರಾಮದಲ್ಲಿ ಕುಡಿಯುವ ನೀರಿಲ್ಲದೆ ಹಾಹಾಕಾರ ಉಂಟಾಗಿದ್ದು, ಸುಮಾರು 3 ಸಾವಿರ ಜನಸಂಖ್ಯೆ ಹೊಂದಿರುವ ಗ್ರಾಮಕ್ಕೆ ನೀರು ಪೂರೈಕೆ ಮಾಡುತ್ತಿದ್ದ ಮೂರು ಕೊಳವೆ ಬಾವಿಗಳು ಬತ್ತಿ ಹೋಗಿವೆ. ಇನ್ನುಳಿದ ಎರಡು ಬೋರವೆಲ್ಗಳು ಸಣ್ಣ ಪ್ರಮಾಣದಲ್ಲಿ ನೀರು ಹೊಂದಿದ್ದು ಗ್ರಾಮಕ್ಕೆ ನೀರು ಪೂರೈಸುತ್ತಿದ್ದರೂ ಸಾಕಾಗುತ್ತಿಲ್ಲ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸುತ್ತಾರೆ.
ಚಂದ್ರಶೇಖರ ಗಂಗಾವತಿ
ಕನ್ನಡಪ್ರಭ ವಾರ್ತೆ ಮುದಗಲ್ಪಟ್ಟಣ ಸಮೀಪದ ಆಶಿಹಾಳ ಗ್ರಾಮದಲ್ಲಿ ಕುಡಿಯುವ ನೀರಿಲ್ಲದೆ ಹಾಹಾಕಾರ ಉಂಟಾಗಿದ್ದು, ಸುಮಾರು 3 ಸಾವಿರ ಜನಸಂಖ್ಯೆ ಹೊಂದಿರುವ ಗ್ರಾಮಕ್ಕೆ ನೀರು ಪೂರೈಕೆ ಮಾಡುತ್ತಿದ್ದ ಮೂರು ಕೊಳವೆ ಬಾವಿಗಳು ಬತ್ತಿ ಹೋಗಿವೆ. ಇನ್ನುಳಿದ ಎರಡು ಬೋರವೆಲ್ಗಳು ಸಣ್ಣ ಪ್ರಮಾಣದಲ್ಲಿ ನೀರು ಹೊಂದಿದ್ದು ಗ್ರಾಮಕ್ಕೆ ನೀರು ಪೂರೈಸುತ್ತಿದ್ದರೂ ಸಾಕಾಗುತ್ತಿಲ್ಲ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸುತ್ತಾರೆ.
ಕುಡಿಯುವ ನೀರಿಗಾಗಿ ವಿದ್ಯುತ್ ಇರುವ ಸಮಯ ನೋಡಿ ದ್ವಿಚಕ್ರ ವಾಹನ ಮತ್ತು ನೀರಿನ ಬಂಡಿ ಮೂಲಕ ಸುತ್ತಲಿನ ತೋಟಗಳಿಂದ ನೀರು ತರಬೇಕಾಗಿದೆ. ಮುಂಗಾರು ಮಳೆ ಕೈಕೊಟ್ಟಿರುವುದರಿಂದ ಮತ್ತು ಅಂತರ್ಜಲ ಕುಸಿದು ಹೋಗಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಜನರು ಅಗತ್ಯ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಮೂರು ನಾಲ್ಕು ದಿನಗಳಿಂದ ಸಮರ್ಪಕವಾಗಿ ನೀರು ಪೂರೈಕೆಯಾಗದ ಹಿನ್ನೆಲೆಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಗ್ರಾಮಸ್ಥರು ನೀರಿನ ಕೊರತೆ ಅನುಭವಿಸುತ್ತಿದ್ದಾರೆ. ಗ್ರಾಮದಲ್ಲಿರುವ ಬೋರ್ ವೆಲ್ ನೀರಿನ ಮೂಲಗಳ ಮೇಲೆಯೇ ಜನರು ಅವಲಂಬಿತರಾಗಿದ್ದು, ಅವುಗಳಲ್ಲಿಯೂ ನೀರಿನ ಪ್ರಮಾಣ ಕಡಿಮೆಯಾಗುತ್ತಿರುವುದು ಸಮಸ್ಯೆಯನ್ನು ಮತ್ತಷ್ಟು ಗಂಭೀರಗೊಳಿಸಿದೆ. ಕುಡಿಯುವ ನೀರಿನ ಕೊರತೆಯಿಂದ ಗ್ರಾಮಸ್ಥರ ದೈನಂದಿನ ಜೀವನಕ್ಕೆ ತೊಂದರೆಯಾಗಿದ್ದು, ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಸಮರ್ಪಕ ನೀರು ಪೂರೈಕೆ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಹಾಗೂ ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಕುಡಿಯುವ ನೀರು ಪೂರೈಕೆ ಸೇರಿದಂತೆ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
----ಪಂಚಾಯ್ತಿಯಲ್ಲಿ ಅನುದಾನದ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ತೊಂದರೆ ಉಂಟಾಗಿದೆ.ಆದರೂ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಜನರಿಗೆ ಅನುಕೂಲ ಮಾಡಿಕೊಡುತ್ತೇನೆ.
- ಮಲ್ಲಿಕಾರ್ಜುನ, ಪಿಡಿಒ ಖೈರವಾಡಗಿ----
ಮಳೆ ಕೈ ಕೊಟ್ಟಿರುವರುವುದರಿಂದ ಗ್ರಾಮದಲ್ಲಿ ಕುಡಿಯುವ ನೀರಿಗೆ ತೀವ್ರ ಸಮಸ್ಯೆ ಎದುರಾಗಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಇಲ್ಲಿವರೆಗೂ ಪರಿಹಾರ ಕಂಡುಕೊಂಡಿಲ್ಲ. ಕೂಡಲೇ ನೀರಿನ ಸಮಸ್ಯೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು.-ಯಂಕೋಬ ತಳವಾರ, ಆಶಿಹಾಳ ಗ್ರಾಮಸ್ಥ