ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರನ್ನು ಗೆಲ್ಲಿಸುವುದಾಗಿ ಮತದಾರರು ಈಗಾಗಲೇ ತೀರ್ಮಾನ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.ಜಿಲ್ಲೆಯ ನೀಲಾನಗರ, ಐಹೊಳೆ ಹಾಗೂ ಅಮೀನಗಡದಲ್ಲಿ ಮಂಗಳವಾರ ನಡೆದ ಉಪ ಚುನಾವಣೆ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ದಿ.ಎಚ್.ವೈ.ಮೇಟಿ ಅವರು ಐದು ಬಾರಿ ಶಾಸಕರಾಗಿ ಆಯ್ಕೆಯಾಗಿ ಕ್ಷೇತ್ರ ವ್ಯಾಪ್ತಿಯಲ್ಲಿ ಸಾಕಷ್ಟು ಜನಪರ ಕಾರ್ಯಗಳನ್ನು ಕೈಗೊಂಡಿದ್ದಾರೆ. ಸಜ್ಜನ ಹಾಗೂ ಪ್ರಾಮಾಣಿಕ ರಾಜಕಾರಣಿಯಾಗಿದ್ದ ಅವರು ಎಲ್ಲ ವರ್ಗದ ಜನರ ಪ್ರೀತಿ, ವಿಶ್ವಾಸ ಗಳಿಸಿದ್ದಾರೆ. ಸೋಲಿನ ಭಯದಿಂದ ಬಿಜೆಪಿಯವರು ಏನೇನೋ ಮಾತನಾಡುತ್ತಿದ್ದಾರೆ. ಧಮಕಿ ಹಾಕುವುದು ಅವರ ಸಂಸ್ಕೃತಿ ನಮ್ಮದಲ್ಲ. ಗ್ರಾಮೀಣ ಭಾಗದಲ್ಲಿ ಜನ ನಮ್ಮ ನಿರೀಕ್ಷೆಗಿಂತ ಹೆಚ್ಚು ಸ್ಪಂದಿಸುತ್ತಿದ್ದಾರೆ. ಕಾಂಗ್ರೆಸ್ಅಭ್ಯರ್ಥಿ ಗೆಲುವು ಖಚಿತ ಎಂದರು.ಸಚಿವ ಶಿವಾನಂದ ಪಾಟೀಲ ಮಾತನಾಡಿ, ದಿ.ಎಚ್.ವೈ.ಮೇಟಿ ಅವರು ಅಭಿವೃದ್ಧಿ ಕಾರ್ಯ ಮುಂದುವರಿಸಲು ಉಮೇಶ ಮೇಟಿ ಅವರನ್ನು ಬೆಂಬಲಿಸಬೇಕು ಎಂದು ವಿನಂತಿಸಿದರು. ಮಾಜಿ ಶಾಸಕ ಆನಂದ ನ್ಯಾಮಗೌಡ ಮಾತನಾಡಿ, ರಾಜ್ಯದಲ್ಲಿ 3.5 ಕೋಟಿ ಮಹಿಳೆಯರು ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ. ಅನ್ಯಭಾಗ್ಯ ಬಡವರ ಬದುಕಿಗೆ ಆಸರೆಯಾಗಿದೆ. ಪಂಚ ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ₹58 ಸಾವಿರ ಕೋಟಿ ವೆಚ್ಚ ಮಾಡುತ್ತಿದೆ. ಇದರಿಂದ ಮಹಿಳೆಯರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ದೊರೆತಿದೆ. ನಿರುದ್ಯೋಗಿ ಯುವಕರಿಗೆ ಸಹಾಯಧನ, ಗೃಹ ಜ್ಯೋತಿ ಜನರ ಬದುಕಿಗೆ ಆಸರೆಯಾಗಿವೆ. ಮತ್ತೊಮ್ಮೆಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಕೋರಿದರು.ಶಾಸಕ ವಿಜಯಾನಂದ ಕಾಶಪ್ಪನವರ ಮಾತನಾಡಿದರು. ಸಚಿವ ಆರ್.ಬಿ.ತಿಮ್ಮಾಪೂರ, ಮಾಜಿ ಸಚಿವ ಅಜಯಕುಮಾರ್ ಸರನಾಯಕ, ಎಸ್.ಆರ್.ಪಾಟೀಲ, ಉಮೇಶ ಮೇಟಿ, ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಹಾಗೂ ಬಾಯಕ್ಕ ಮೇಟಿ, ಕುಮಾರ ಮಹಾರಾಜರು, ಮಹಾದೇವಿ ಮೇಟಿ, ಅನಂತ ನಾಯಕ, ಬಸವಂತಪ್ಪ ಮೇಟಿ, ಬಲರಾಮ್ ಪವಾರ್, ನ್ಯಾಯವಾದಿ ರಾಜುಇತರರಿದ್ದರು.