ಸಾರಾಂಶ
ಚಾಮರಾಜನಗರ: ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಬ್ರಹ್ಮರ್ಷಿ ನಾರಾಯಣಗುರು ಜಯಂತಿ ಅಂಗವಾಗಿ ನಡೆದ ನಾರಾಯಣಗುರು ಭಾವಚಿತ್ರ ಮೆರವಣಿಗೆಗೆ ಚಾಲನೆ ನೀಡಬೇಕಾಗಿದ್ದ ಜನಪ್ರತಿನಿಧಿಗಳು, ಅಧಿಕಾರಿಗಳು ಗೈರು ಹಾಜರಾಗಿದ್ದರಿಂದ ಆಕ್ರೋಶಗೊಂಡ ಸಮುದಾಯವರು ಪ್ರತಿಭಟನೆ ನಡೆಸಿದರು.ನಗರದ ಪ್ರವಾಸಿ ಮಂದಿರದ ಬಳಿಯಿಂದ ನಾರಾಯಣಗುರು ಭಾವಚಿತ್ರ ಮೆರವಣಿಗೆಗೆ ಚಾಲನೆ ನೀಡಬೇಕಾಗಿತ್ತು, ಚಾಲನೆ ನೀಡಲು ಯಾವ ಜನಪ್ರತಿನಿಧಿಯಾಗಲೀ, ಅಧಿಕಾರಿಗಳಾಗಲೀ ಬಾರದೇ ಇದ್ದರಿಂದ ಆಕ್ರೋಶಗೊಂಡ ಸಮುದಾಯವರು ಜಿಲ್ಲಾಡಳಿತದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ತೀರ್ಥಹಳ್ಳಿ ತಾಲೂಕು ನಿಟ್ಟೂರು ಶ್ರೀ ನಾರಾಯಣಗುರು ಮಹಾ ಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ ತಾವೇ ಮೆರವಣಿಗೆಗೆ ಚಾಲನೆ ನೀಡಿದರು.ಆನಂತರ ಮೆರವಣಿಗೆಯು ವಿವಿಧ ಜಾನಪದ ಕಲಾತಂಡಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ. ರಾಜ್‌ಕುಮಾರ್ ಕಲಾ ಮಂದಿರದ ಆವರಣ ತಲುಪಿತು.