ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಸ್ವಚ್ಛತಾ ಕಾರ್ಯ ಒಂದು ದಿನಕ್ಕೆ ಮಾತ್ರ ಮುಗಿಯುವಂತದ್ದಲ್ಲ, ನಿರಂತರವಾಗಿ ನಾವುಗಳು ಕೈಗೊಳ್ಳಬೇಕಾದ ಪ್ರಕ್ರಿಯೆಯಾಗಿದೆ. ಆ ದಿಸೆಯಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಆಗಿಂದಾಗ್ಗೆ ಸ್ವಚ್ಛತಾ ಆಂದೋಲನವನ್ನು ಜಿಲ್ಲಾ ಮತ್ತು ತಾಲೂಕು ಆಡಳಿತಗಳು ಹಮ್ಮಿಕೊಳ್ಳುತ್ತಿವೆ ಎಂದು ಜಿಲ್ಲಾಧಿಕಾರಿ ಪಿ. ಎನ್. ರವೀಂದ್ರ ತಿಳಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್, ಲೀಡ್ ಬ್ಯಾಂಕ್, ಚಿಕ್ಕಬಳ್ಳಾಪುರ ನಗರಸಭೆಯ ಸಹಯೋಗದಲ್ಲಿ ಗುರುವಾರ ಮುಂಜಾನೆ ಜಿಲ್ಲಾ ಕನ್ನಡ ಭವನದ (ಬಸಪ್ಪ ಛತ್ರ) ಬಳಿ ಇರುವ ಕಲ್ಯಾಣಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಪಾಲ್ಗೊಂಡು ಮಾತನಾಡಿದರು.
ನಿರಂತರ ಕಾರ್ಯಕ್ರಮಸ್ವಚ್ಚತೆಯೇ ಜೀವನ, ಸ್ವಚ್ಛತೆಯೇ ಬಾಳು ಅದಕ್ಕಾಗಿ ನಮ್ಮ ಸುತ್ತಮುತ್ತಲ ಸ್ವಚ್ಛತೆಯನ್ನು ಕಾಪಾಡಿಕೊಳ್ಳೋಣ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಮತ್ತು ಶುಚಿತ್ವದ ಕುರಿತು ಅರಿವು ಮೂಡಿಸುವ ಉದ್ದೇಶದೊಂದಿಗೆ ಸರ್ಕಾರವು ಇದೇ ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 2 ರ ವರೆಗೆ “ಸ್ವಚ್ಛತಾ ಸೇವೆ ಪಾಕ್ಷಿಕ-2024” ನ್ನು ಹಮ್ಮಿಕೊಂಡಿದೆ. ಇದರ ಭಾಗವಾಗಿ ಜಿಲ್ಲೆಯ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಾರ್ಯಕ್ರಮಗಳನ್ನು ನಿರಂತವಾಗಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ನಗರಸಭೆ ಅಧ್ಯಕ್ಷ ಎ.ಗಜೇಂದ್ರ ಮಾತನಾಡಿ, ಸ್ವಚ್ಛತಾ ಕಾರ್ಯಕ್ರಮ ಒಂದು ದಿನಕ್ಕೆ ಸೀಮಿತವಾಗದೆ ಪ್ರತಿದಿನವೂ ನಿರಂತರವಾಗಿರಬೇಕು, ಗಿಡಗಂಟೆಗಳಿಂದ ಮುಚ್ಚಿ ಹೋಗಿದ್ದ ಕಲ್ಯಾಣಿಯನ್ನು ಸ್ವಚ್ಚತೆಗೊಳಿಸಲಾಗಿದೆ. ಚಿಕ್ಕಬಳ್ಳಾಪುರ ನಗರವನ್ನು ಸ್ವಚ್ಚ ಹಾಗೂ ಸುಂದರ ನಗರವನ್ನಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸ್ವಚ್ಚತಾ ಅಭಿಯಾನ ನಡೆಸಲಾಗುತ್ತಿದೆ ಎಂದರು. ನಾಗರೀಕರ ಸಹಕಾರ ಅಗತ್ಯ
ನಗರಸಭೆ ಉಪಾಧ್ಯಕ್ಷ ಜೆ.ನಾಗರಾಜ್ ಮಾತನಾಡಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಪೌರಕಾರ್ಮಿಕರು ಜೊತೆ ಜೊತೆಯಾಗಿ ಸ್ವಚ್ಛತೆಯ ಕಾರ್ಯಗಳಲ್ಲಿ ಭಾಗಿಯಾಗಿರುವುದು ಸಂತಸ ತಂದಿದೆ. ಸ್ವಚ್ಚತಾ ಅಭಿಯಾನ ಯಶಸ್ವಿಯಾಗಬೇಕಾದರೆ ನಗರದ ಸಮಸ್ತ ನಾಗರಿಕರ ಸಹಕಾರ ಅತ್ಯಗತ್ಯ ಎಂದು ತಿಳಿಸಿ ಸಮಸ್ತ ಜನತೆಯನ್ನು ಸ್ವಚ್ಚತೆಯ ಆಂದೋಲನದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ ನಿಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು, ನಗರಸಭೆ ಸದಸ್ಯರು, ಪೌರಕಾರ್ಮಿಕರು, ನಗರಸಭೆ ಅಧಿಕಾರಿಗಳು, ಸ್ಥಳೀಯ ಸಾರ್ವಜನಿಕರು ಇದ್ದರು.