ಸಾರಾಂಶ
ರಾಯಚೂರು ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪರವಾದ ಅಲೆ ಜೋರಾಗಿದೆ. ಜನತೆ ಬದಲಾವಣೆ ಬಯಸಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಡಾ. ಮೇಟಿ ಹೇಳಿದರು.
ಕನ್ನಡಪ್ರಭ ವಾರ್ತೆ ಯಾದಗಿರಿ
ರಾಯಚೂರು ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪರವಾದ ಅಲೆ ಜೋರಾಗಿದೆ. ಜನತೆ ಬದಲಾವಣೆ ಬಯಸಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಡಾ. ಮೇಟಿ ಹೇಳಿದರು.ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಪಗಲಾಪೂರ, ಕೂಯಿಲೂರು ಮತ್ತು ಹೊಸಳ್ಳಿ ತಾಂಡಾಗಳಲ್ಲಿ ಗ್ಯಾರಂಟಿ ಕಾರ್ಡ್ ಗಳನ್ನು ಮನೆ ಮನೆ ಹಂಚಿ ಮತಯಾಚಿಸಿ ಅವರು ಮಾತನಾಡಿದರು.
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ಪ್ರತಿ ಮಹಿಳೆಗೆ 1 ಲಕ್ಷ ರು.ಗಳು ಮತ್ತು ರೈತರ ಸಂಪೂರ್ಣ ಸಾಲ ಮನ್ನಾ, ಬೆಂಬಲ ಬೆಲೆ ನಿಗದಿ ಹಾಗೂ ಯುವ ಜನತೆ ಉದ್ಯೋಗ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದರು.ಬಿಜೆಪಿ ಸರಕಾರದ ದುರಾಡಳಿತಕ್ಕೆ ಜನತೆ ಬೇಸತ್ತಿದ್ದಾರೆ. ಹೀಗಾಗಿಯೇ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಕುಮಾರನಾಯಕ ಅವರಿಗೆ ಆಶೀರ್ವಾದ ಮಾಡಲಿದ್ದಾರೆ. ಇದರಲ್ಲಿ ಯಾವುದೇ ರೀತಿಯಿಂದ ಅನುಮಾನವೇ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಳೆದ 10 ವರ್ಷಗಳಿಂದಲೂ ದೇಶದಲ್ಲಿ ಹೇಳಿಕೊಳ್ಳುವಂತಹ ರೀತಿಯಲ್ಲಿ ಅಭಿವೃದ್ಧಿ ಮಾಡಿಲ್ಲ. ಇವರ ದುರಾಡಳಿತ ನೋಡಿ ಜನತೆ ಸಂಪೂರ್ಣವಾಗಿ ವಿರುದ್ಧವಾಗಿ ಇದ್ದಾರೆ. ಮತದಾರರು ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು.ರಾಯಚೂರು ಲೋಕಸಭೆ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳು ಇವೆ. ಆದರೆ, ಅವುಗಳನ್ನು ನಿವಾರಣೆ ಮಾಡಲು ಹಾಲಿ ಸಂಸದರು ಏನು ಕ್ರಮ ಕೈಗೊಂಡಿಲ್ಲ. ಹೀಗಾಗಿಯೇ ಅವರ ವಿರುದ್ಧ ಆಡಳಿತ ವಿರೋಧಿ ಅಲೆ ಜೋರಾಗಿ ಬೀಸುತ್ತಿದೆ ಎಂದರು.
ಯಾದಗಿರಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುದರ್ಶನ ನಾಯಕ್, ಬಸವರಾಜಪ್ಪ ಬಾಗಲಿ ಸೇರಿದಂತೆ ಇತರರಿದ್ದರು.