ಸಾರಾಂಶ
ಕೊಪ್ಪಳ:
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಜನರು ಆರ್ಥಿಕವಾಗಿ ಸಬಲರಾಗಲು ಅನುಕೂಲವಾಗಿದೆ ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದರು.ಕೊಪ್ಪಳ ಕೇಂದ್ರ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜು. 2ರಿಂದ ಜು. 4ರ ವರೆಗೆ ಏರ್ಪಡಿಸಿರುವ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದ್ದು, ಪಂಚ ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಇದರಿಂದ ಜನರು ಆರ್ಥಿಕವಾಗಿ ಸದೃಢರಾಗಿ ನೆಮ್ಮದಿಯಿಂದ ಬದುಕುವಂತಾಗಿದೆ. ಅದರಲ್ಲೂ ಕಡು ಬಡವರು, ಕೃಷಿ ಕೂಲಿ-ಕಾರ್ಮಿಕರಿಗೆ ಸಾಕಷ್ಟು ಅನುಕೂಲವಾಗಿದೆ. ಸ್ತ್ರೀಶಕ್ತಿ ಯೋಜನೆಯಿಂದ ಮಹಿಳೆಯರು ಧಾರ್ಮಿಕ ಸ್ಥಳ ಮತ್ತು ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಿದ್ದಾರೆ. ಗೃಹಲಕ್ಷ್ಮೀ ಸಹಾಯಧನ ಕುಟುಂಬ ನಿರ್ವಹಣೆಗೆ ನೆರವಾಗಿದೆ ಎಂದರು.ರಾಜ್ಯ ಸರ್ಕಾರ ಎರಡು ವರ್ಷದ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನದಲ್ಲಿ ವಿವಿಧ ಯೋಜನೆಗಳ ಮಾಹಿತಿ ಬಿಂಬಿಸಲಾಗಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ ಅವುಗಳ ಮಾಹಿತಿ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಮಾತನಾಡಿ, ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ್ದು ಶೇ. 98ರಷ್ಟು ಗುರಿ ತಲುಪಿದ್ದೇವೆ. ಸಂಸದ, ಶಾಸಕರ ಮಾರ್ಗದರ್ಶನದಲ್ಲಿ ಎಲ್ಲ ಅರ್ಹರಿಗೂ ಯೋಜನೆ ತಲುಪಿಸಲು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನಿರಂತರ ಸಭೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.ಈ ವೇಳೆ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ, ಜಿಪಂ ಸಿಇಒ ವರ್ಣಿತ್ ನೇಗಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮಂಜುನಾಥ ಗೊಂಡಬಾಳ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಂದ್ರ ಜಾಧವ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಡಾ. ಸುರೇಶ ಜಿ., ನಗರಸಭೆ ಸದಸ್ಯ ಗುರುರಾಜ ಹಲಗೇರಿ, ಗ್ಯಾರಂಟಿ ಸಮಿತಿ ತಾಲೂಕು ಸದಸ್ಯರಾದ ಜ್ಯೋತಿ ಎಂ. ಗೊಂಡಬಾಳ, ಅವಿತಾ ಗೋರಂಟ್ಲಿ, ಮಾನ್ವಿ ಪಾಶಾ, ಅಧಿಕಾರಿಗಳಾದ ಪರಮೇಶ್ವರಪ್ಪ, ಸತ್ಯನಾರಾಣ, ಘಟಕ ವ್ಯವಸ್ಥಾಪಕ ರಮೇಶ ಚಿಣಗಿ ಸೇರಿದಂತೆ ಇತರರು ಇದ್ದರು.4ರ ವರೆಗೆ ವಸ್ತು ಪ್ರದರ್ಶನ
ಪಂಚ ಗ್ಯಾರಂಟಿ ಯೋಜನೆ ಸೇರಿದಂತೆ ಸರ್ಕಾರದ ಎಲ್ಲ ಯೋಜನೆಗಳ ಮಾಹಿತಿ ಒಳಗೊಂಡಿರುವ ವಸ್ತು ಪ್ರದರ್ಶನ ನೋಡಲು ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವ ಸೆಲ್ಫಿ ಪಾಯಿಂಟ್ ಮಾಡಲಾಗಿದೆ. ಈ ವಸ್ತು ಪ್ರದರ್ಶನ ಜು. 4ರ ವರೆಗೆ ನಡೆಯಲಿದೆ.