ಸುಗಮ ಚುನಾವಣೆಗೆ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ: ಜಿಲ್ಲಾಧಿಕಾರಿ ಗಂಗೂಬಾಯಿ

| Published : Apr 04 2024, 01:01 AM IST

ಸುಗಮ ಚುನಾವಣೆಗೆ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ: ಜಿಲ್ಲಾಧಿಕಾರಿ ಗಂಗೂಬಾಯಿ
Share this Article
  • FB
  • TW
  • Linkdin
  • Email

ಸಾರಾಂಶ

ಚುನಾವಣಾ ಆಯೋಗದ ನಿರ್ದೇಶನಗಳು ಮತ್ತು ಮಾರ್ಗಸೂಚಿಗಳಂತೆ ಸೆಕ್ಟರ್ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.

ಕಾರವಾರ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸುಗಮ ರೀತಿಯಲ್ಲಿ ಮತದಾನ ಮತ್ತು ಚುನಾವಣಾ ಪ್ರಕ್ರಿಯೆಗಳು ನಡೆಯುವಂತೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲ ಸೆಕ್ಟರ್ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಸೆಕ್ಟರ್ ಅಧಿಕಾರಿಗಳಿಗೆ ಬುಧವಾರ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ಚುನಾವಣಾ ಆಯೋಗದ ನಿರ್ದೇಶನಗಳು ಮತ್ತು ಮಾರ್ಗಸೂಚಿಗಳಂತೆ ಸೆಕ್ಟರ್ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ಎಲ್ಲ ಸೆಕ್ಟರ್ ಅಧಿಕಾರಿಗಳು ತಮ್ಮ ಅಧೀನದ ಪಿಆರ್‌ಒ ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಅಗತ್ಯ ತರಬೇತಿಯನ್ನು ನೀಡಿ, ಮತದಾನದ ದಿನದಂದು ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಸುಗಮವಾಗಿ ಮತದಾನ ಪ್ರಕ್ರಿಯೆಗಳು ನಡೆಯುವಂತೆ ನೋಡಿಕೊಳ್ಳಬೇಕು ಎಂದರು.

ಮತದಾನದ ದಿನದಂದು ತಮಗೆ ನಿಗದಿಪಡಿಸಿದ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮತಗಟ್ಟೆ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಮತಗಟ್ಟೆಯಲ್ಲಿ ಕಂಡು ಬರುವ ಯಾವುದೇ ಬಗೆಯ ಸಮಸ್ಯೆಗಳ ಬಗ್ಗೆ ತಕ್ಷಣವೇ ಸ್ಪಂದಿಸಿ, ಈ ಬಗ್ಗೆ ಅಗತ್ಯ ಕ್ರಮ ಕೈಗೊಂಡು, ಸುಗಮ ಮತದಾನಕ್ಕೆ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ಬಹುತೇಕ ಎಲ್ಲ ಸೆಕ್ಟರ್ ಅಧಿಕಾರಿಗಳು ಈಗಾಗಲೇ ಹಲವು ಚುನಾವಣಾ ಕರ್ತವ್ಯದಲ್ಲಿ ಕಾರ್ಯನಿರ್ವಹಿಸಿರುವ ಅನುಭವ ಹೊಂದಿದ್ದು, ತಮ್ಮ ಅನುಭವವನ್ನು ಬಳಸಿಕೊಂಡು ಪ್ರಸಕ್ತ ಲೋಕಸಭಾ ಚುನಾವಣೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಯುವಂತೆ ಕರ್ತವ್ಯ ನಿರ್ವಹಿಸುವುದರ ಮೂಲಕ ಚುನಾವಣಾ ಯಶಸ್ಸಿಗೆ ಸಹಕಾರ ನೀಡಬೇಕು ಎಂದರು.

ತರಬೇತಿಯಲ್ಲಿ ಸೆಕ್ಟರ್ ಅಧಿಕಾರಿಗಳ ಕರ್ತವ್ಯಗಳ ಬಗ್ಗೆ ಹಾಗೂ ಇವಿಎಂ ಮತ್ತು ವಿವಿ ಪ್ಯಾಟ್‌ಗಳನ್ನು ಬಳಸುವ ಬಗ್ಗೆ ಹಾಗೂ ಅವುಗಳ ಕಾರ್ಯ ನಿರ್ವಹಣೆ ಬಗ್ಗೆ ಪ್ರಾಯೋಗಿಕವಾಗಿ ತರಬೇತಿ ನೀಡಲಾಯಿತು.

ಅಪರ ಜಿಲ್ಲಾಧಿಕಾರಿ ಪ್ರಕಾಶ ರಾಜಪುತ, ಕಾರವಾರ ಉಪ ವಿಭಾಗಾಧಿಕಾರಿ, ಸಹಾಯಕ ಚುನಾವಣಾಧಿಕಾರಿ ಕನಿಷ್ಕ, ಹಳಿಯಾಳದ ಸಹಾಯಕ ಚುನಾವಣಾಧಿಕಾರಿ ಸ್ಟೆಲ್ಲಾ ವರ್ಗಿಸ್ ಇದ್ದರು.