ಕರ್ತವ್ಯ ಲೋಪಗಳಾಗದಂತೆ ಚುನಾವಣಾ ಕರ್ತವ್ಯ ನಿರ್ವಹಿಸಿ: ಜಿಲ್ಲಾಧಿಕಾರಿ ಟಿ.ವೆಂಕಟೇಶ್

| Published : Apr 09 2024, 12:54 AM IST

ಕರ್ತವ್ಯ ಲೋಪಗಳಾಗದಂತೆ ಚುನಾವಣಾ ಕರ್ತವ್ಯ ನಿರ್ವಹಿಸಿ: ಜಿಲ್ಲಾಧಿಕಾರಿ ಟಿ.ವೆಂಕಟೇಶ್
Share this Article
  • FB
  • TW
  • Linkdin
  • Email

ಸಾರಾಂಶ

ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜಿನಲ್ಲಿ ಭಾನುವಾರ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಚುನಾವಣಾ ತರಬೇತಿ ಕಾರ್ಯಾಗಾರವನ್ನು ಜಿಲ್ಲಾ ಚುನಾವಣಾ ಅಧಿಕಾರಿ ಟಿ.ವೆಂಕಟೇಶ್ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗಎಲ್ಲಿಯೂ ಕರ್ತವ್ಯ ಲೋಪಗಳಾಗದಂತೆ ಚುನಾವಣೆ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.

ಇಲ್ಲಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ಭಾನುವಾರ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಚುನಾವಣಾ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಯಾವುದೇ ಲೋಪವಾಗದಂತೆ ತಮಗೆ ವಹಿಸಿದ ಚುನಾವಣಾ ಕಾರ್ಯವನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸಿ ಚುನಾವಣೆ ಯಶಸ್ವಿಗೊಳಿಸಬೇಕು ಎಂದು ಮತಗಟ್ಟೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಲೋಕಸಭೆ ಚುನಾವಣೆ ಅತ್ಯಂತ ಮಹತ್ವದ್ದಾಗಿದ್ದು ಚುನಾವಣೆ ಸಿಬ್ಬಂದಿಗೆ ಈಗಾಗಲೇ ಕಾಲ ಕಾಲಕ್ಕೆ ತರಬೇತಿ ನೀಡಲಾಗಿದೆ. ಜವಾಬ್ದಾರಿಗಳ ಹಂಚಿಕೆ ಮಾಡಲಾಗಿದೆ. ಪ್ರತಿ ಹಂತದಲ್ಲಿಯೂ ಕಣ್ಗಾವಲು ಮೂಲಕ ಮೇಲುಸ್ತುವಾರಿ ನಡೆಸಲಾಗುತ್ತಿದೆ. ಚುನಾವಣೆ ಕೆಲಸ ಕಾರ್ಯಗಳ ಬಗ್ಗೆ ಯಾವುದೇ ಗೊಂದಲ ಇಲ್ಲದೆ, ತರಬೇತಿಯಲ್ಲಿ ತಮ್ಮ ಅನುಮಾನಗಳನ್ನು ಬಗೆಹರಿಸಿಕೊಂಡು ಮತಗಟ್ಟೆಗಳಿಗೆ ತೆರಳಬೇಕು ಎಂದು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತಹಸೀಲ್ದಾರ್ ಡಾ.ನಾಗವೇಣಿ, ಜಿಲ್ಲಾ ತರಬೇತಿ ನೋಡಲ್ ಅಧಿಕಾರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ಸೆಕ್ಟರ್ ಅಧಿಕಾರಿಗಳು ಹಾಗೂ ಚುನಾವಣಾ ಸಿಬ್ಬಂದಿ ಇದ್ದರು.

ಅಂಚೆ ಮತದಾನ ಕೇಂದ್ರ ಸ್ಥಾಪನೆ

ಏಪ್ರಿಲ್ 8 ರಿಂದ ಅನ್ವಯವಾಗುವಂತೆ ಅಂಚೆ ಮತದಾನ ಕೇಂದ್ರ (ಪೋಸ್ಟಲ್ ವೋಟಿಂಗ್ ಸೆಂಟರ್)ವನ್ನು ನಗರದ ತಹಸೀಲ್ದಾರ್ ಕಚೇರಿಯಲ್ಲಿರುವ ಚಿತ್ರದುರ್ಗ-99 ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಲಾಗಿದೆ.

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಸಂಬಂಧ ಕರ್ತವ್ಯ ನಿರತ - ಗೈರು ಹಾಜರಿ ಮತದಾರರು ಇದೇ ಏಪ್ರಿಲ್ 19 ರಿಂದ 21 ರ ವರೆಗೆ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯ ಒಳಗೆ ಪೋಸ್ಟಲ್ ವೋಟಿಂಗ್ ಸೆಂಟರ್‍ಗೆ ಆಗಮಿಸಿ ತಮ್ಮ ಮತ ಚಲಾಯಿಸಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.