ಕೊಳವೆ ಬಾವಿ ಕೊರೆಯಲು ಅನುಮತಿ ಕಡ್ಡಾಯ

| Published : Mar 11 2024, 01:16 AM IST

ಸಾರಾಂಶ

ಬೆಂಗಳೂರಿನಲ್ಲಿ ಬೋರ್‌ವೆಲ್‌ ಕೊರೆಸಲು ಜಲಮಂಡಳಿಯ ಅನುಮತಿ ಕಡ್ಡಾಯವಾಗಿದೆ. ಒಂದು ವೇಳೆ ಅನುಮತಿ ಪಡೆಯದಿದ್ದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ನಗರದಲ್ಲಿ ಇನ್ನು ಮುಂದೆ ಕಡ್ಡಾಯವಾಗಿ ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು ಕೊಳವೆ ಬಾವಿ ಕೊರೆಯಬೇಕು. ಇಲ್ಲವಾದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ‌ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಎಚ್ಚರಿಕೆ ನೀಡಿದೆ.

ನಗರದಲ್ಲಿ ಮಳೆ ಕೊರತೆ ಉಂಟಾಗಿ ಕೊಳವೆ ಬಾವಿಗಳಲ್ಲಿ ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಅಂರ್ತಜಲ ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಲು ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡು ಆದೇಶ ಹೊರಡಿಸಲಾಗಿದೆ. ಅನುಮತಿ ಪಡೆಯದೇ ಕೊಳವೆ ಬಾವಿ ಕೊರೆದರೆ ದೂರು ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗುವುದು. ವೈಯಕ್ತಿಕ ಮತ್ತು ಇತರೆ ಬಳಕೆ ಕೊಳವೆ ಬಾವಿ ಎರಡಕ್ಕೂ ಈ ನಿಯಮ ಅನ್ವಯವಾಗಲಿದೆ ಎಂದು ಜಲಮಂಡಳಿ ಅಧ್ಯಕ್ಷರು ಆದೇಶದಲ್ಲಿ ತಿಳಿಸಿದ್ದಾರೆ.ಮಾ.15ರಿಂದ ಅರ್ಜಿ

ಈ ಆದೇಶ ಮಾ.15ರಿಂದ ಜಾರಿಗೆ ಬರಲಿದ್ದು, ಅಂದಿನಿಂದಲೇ ಬೆಂಗಳೂರು ಜಲಮಂಡಳಿ ವೆಬ್‌ ಸೈಟ್‌ನಲ್ಲಿ ಅರ್ಜಿ ವಿತರಿಸಲಾಗುವುದು. ಸಾರ್ವಜನಿಕ ಕೊಳವೆ ಬಾವಿಗೆ ಮೊದಲ ಆದ್ಯತೆ ನೀಡಲಾಗುವುದು. ಖಾಸಗಿ ಕೊಳವೆ ಬಾವಿಗಳಿಗೆ ಅಂತರ್ಜಲ ಮಟ್ಟ, ಅವಶ್ಯಕತೆ, ತಜ್ಞರ ವರದಿ ಆಧಾರಿಸಿ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ ನಂತರ ಅನುಮತಿ ನೀಡಲಾಗುತ್ತದೆ.

ಇನ್ನು ಕೊಳವೆ ಬಾವಿ ಕೊರೆಯುವವರು ಅನುಮತಿ ಪಡೆದಿರುವ ಜಾಗದಲ್ಲಿ ಮಾತ್ರ ಕೊರೆಯಬೇಕು. ಒಂದು ವೇಳೆ ಅನುಮತಿ ಪಡೆಯದ ಸ್ಥಳಗಳಲ್ಲಿ ಕೊಳವೆ ಬಾವಿ ಕೊರೆದಲ್ಲಿ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಲಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.