ಸಾರಾಂಶ
ವಿಧಾನ ಪರಿಷತ್ : ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹತ್ತು ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆಯ ಅನುಮತಿ ಕೋರಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದ್ದಾರೆ.
ಕಾಂಗ್ರೆಸ್ ಸದಸ್ಯ ಯತೀಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಖಾಲಿಯಿರುವ 7500 ಶಿಕ್ಷಕರು ಮತ್ತು ಪ್ರೌಢಶಾಲೆಯಲ್ಲಿ 2500 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ. ಆರ್ಥಿಕ ಇಲಾಖೆ ಅನುಮತಿ ಕೊಟ್ಟ ಕೂಡಲೇ ಭರ್ತಿಗೆ ಕ್ರಮಕೈಗೊಳ್ಳಲಾಗುವುದು ಎಂದರು. 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ 8954 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ಕಲ್ಯಾಣ ಕರ್ನಾಟಕಕ್ಕೆ ಆದ್ಯತೆ
ಹೊಸದಾಗಿ ನೇಮಕ ಮಾಡಿಕೊಳ್ಳಲಿರುವ ಶಿಕ್ಷಕರ ಪೈಕಿ 6500 ಶಿಕ್ಷಕರನ್ನು ಕಲ್ಯಾಣ ಕರ್ನಾಟಕ ಜಿಲ್ಲೆಗಳ ಶಾಲೆಗೆ ನೇಮಕ ಮಾಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.
ಬಿಜೆಪಿಯ ತಳವಾರ ಸಾಬಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಶಾಲೆಗಳಿಗೆ ಶಿಕ್ಷಕರ ನೇಮಕ, ಶಾಲೆಗಳ ದುರಸ್ತಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.
ಮಧ್ಯ ಪ್ರವೇಶಿಸಿದ ಸಚಿವ ಈಶ್ವರ ಖಂಡ್ರೆ 371ಜೆ ಪ್ರಕಾರ ಈ ಜಿಲ್ಲೆಗಳಿಗೆ ನೇಮಕಾತಿ ಮಾಡಲು ಆರ್ಥಿಕ ಇಲಾಖೆಯ ಅನುಮತಿ ಅಗತ್ಯ ಇಲ್ಲ. ಈಗಾಗಲೇ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಖಾಲಿ ಇರುವ ಶಿಕ್ಷಕರನ್ನು ಭರ್ತಿ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಮುಖ್ಯವಾಗಿ ಶಾಲೆಗಳಿಗೆ ಮಕ್ಕಳ ನೋಂದಣಿ ಹೆಚ್ಚಾಗುತ್ತಿದ್ದರೂ, ಹಾಜರಾಗುವವರ ಸಂಖ್ಯೆ ಬಹಳ ಕಡಿಮೆಯಿದೆ. ಆದ್ದರಿಂದ ಮಕ್ಕಳು ತರಗತಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗುವಂತೆ ಕ್ರಮ ಕೈಗೊಳ್ಳಲು ಶಿಕ್ಷಕರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಸರ್ಕಾರಿ ಶಾಲಾ ಕೊಠಡಿಗಳ ದುರಸ್ಥಿ ಮತ್ತು ಶೌಚಾಲಯ ನಿರ್ಮಾಣಕ್ಕೆ ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದೆ. ದುರಸ್ಥಿಗೆ 51.29 ಕೋಟಿ ರು.ಗಳು ಹಾಗೂ ಹೊಸ ಯೋಜನೆಗೆ 100 ಕೋಟಿ ನಿಗದಿಯಾಗಿದೆ. ಇನ್ನೂ ಶೌಚಾಲಯಗಳ ನಿರ್ಮಾಣಕ್ಕೆ 122,79 ಕೋಟಿ ರು.ನಿಗದಿಯಾಗಿದ್ದು, ಕ್ರಮ ವಹಿಸಲಾಗಿದೆ.