ಸಾರಾಂಶ
ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಪಡೆಯಲು ಓದಿನಲ್ಲಿ ಶ್ರದ್ಧೆ, ಪರಿಶ್ರಮ, ತಾಳ್ಮೆ ಹಾಗೂ ಅತ್ಮವಿಶ್ವಾಸ ಹೊಂದಿರಬೇಕು ಆಗಮಾತ್ರ ತಾವು ಇತರೆ ವಿದ್ಯಾರ್ಥಿಗಳಿಗೆ ಮಾದರಿಯಾಗಲು ಸಾಧ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಪಡೆಯಲು ಓದಿನಲ್ಲಿ ಶ್ರದ್ಧೆ, ಪರಿಶ್ರಮ, ತಾಳ್ಮೆ ಹಾಗೂ ಅತ್ಮವಿಶ್ವಾಸ ಹೊಂದಿರಬೇಕು ಆಗಮಾತ್ರ ತಾವು ಇತರೆ ವಿದ್ಯಾರ್ಥಿಗಳಿಗೆ ಮಾದರಿಯಾಗಲು ಸಾಧ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಅತೀ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಪ್ರಾಂಶುಪಾಲರ ಸಂಘದಿಂದ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಅಭಿನಂದಿಸಿ, ನಗದು ಬಹುಮಾನ ವಿತರಿಸಿ ಮಾತನಾಡಿದರು.ಈ ಬಾರಿಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದೀರಿ. ನಿಮ್ಮ ಈ ಸಾಧನೆ ಇತರರಿಗೆ ಪ್ರೇರಣೆಯಾಗಬೆಕು. ಮುಂದಿನ ದಿನಗಳಲ್ಲಿ ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಿ ಜಿಲ್ಲೆ, ರಾಜ್ಯ, ದೇಶಕ್ಕೆ ಕೀರ್ತಿ ತರಬೇಕು. ವಿದ್ಯಾರ್ಥಿಗಳು ಸಾಮಾಜಿಕ ಕಳಕಳಿಯನ್ನು ಹೊಂದಿ ಇದೇ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿ ಜಿಲ್ಲೆಯನ್ನು ಮುಂಚೂಣಿಗೆ ತರಲು ಮುಂದಾಗಬೇಕು ಎಂದರು.
ಪ್ರತಿಯೊಬ್ಬ ವಿದ್ಯಾರ್ಥಿಗೂ ಉನ್ನತ ಸ್ಥಾನ ಪಡೆಯಲು ಉತ್ತಮ ಅವಕಾಶಗಳಿವೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪಟ್ಟಣ ಪ್ರದೇಶದ ಮಕ್ಕಳಿಗೆ ಸಮಾನವಾಗಿ ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದೀರಿ. ಅವರಷ್ಟೇ ನೀವು ಬುದ್ದಿವಂತರು, ಸಮರ್ಥರಾಗಿದ್ದೀರಿ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಆತ್ಮವಿಶ್ವಾಸವಿದೆ ಎಂದರು.ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ ಮಾತನಾಡಿ, ಭವಿಷ್ಯದಲ್ಲಿ ನಿಗದಿತ ಗುರಿ ಸಾಧನೆಗೆ ಪ್ರಯತ್ನ ಮಾಡಬೇಕು. ವಿದ್ಯಾರ್ಥಿಗಳ ಗುರಿ ಸಾಧನೆಗೆ ಪೋಷಕರು, ಶಿಕ್ಷಕರ ಸಹಕಾರ ಅತೀ ಮುಖ್ಯವಾಗಿದೆ. ಉನ್ನತ ಹುದ್ದೆಗಳನ್ನು ಅಲಂಕರಿಸಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಿ ಎಂದು ಸಲಹೆ ನೀಡಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ ಪ್ರಸನ್ನ ಪ್ರಾಸ್ತಾವಿಕವಾಗಿ ಮಾತನಾಡಿ, ದ್ವಿತೀಯ ಪಿ.ಯು.ಸಿ 1ನೇ ಹಂತದ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಉನ್ನತ ಶ್ರೇಣಿ ಪಡೆದಿರುವ ಕಲಾ ವಿಭಾಗದಲ್ಲಿ 3, ವಾಣಿಜ್ಯ ವಿಭಾಗದಲ್ಲಿ 6 ಮತ್ತು ವಿಜ್ಞಾನ ವಿಭಾಗದ 3 ಸೇರಿದಂತೆ ಒಟ್ಟು 12 ಮಂದಿ ವಿದ್ಯಾರ್ಥಿಗಳನ್ನು ಜಿಲ್ಲಾಡಳಿತ ವತಿಯಿಂದ ಗೌರವಿಸಲಾಗುತ್ತಿದೆ ಎಂದರು.ಈ ವೇಳೆ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ತಮ್ಮ ಮುಂದಿನ ಭವಿಷ್ಯದ ಗುರಿ ಕುರಿತು ಅನಿಸಿಕೆಗಳನ್ನು ಕಾರ್ಯಕ್ರಮದಲ್ಲಿ ಹಂಚಿಕೊಂಡರು. ವಿದ್ಯಾರ್ಥಿಗಳ ಅನಿಸಿಕೆಗಳಿಗೆ ಜಿಲ್ಲಾಧಿಕಾರಿಯವರಾದ ಶಿಲ್ಪಾ ನಾಗ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾ ಪ್ರಾಂಶುಪಾಲರ ಸಂಘದಿಂದ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳನ್ನು ಶಾಲು ಹೊದಿಸಿ, ಸ್ಮರಣಿಕೆ ಹಾಗೂ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು. ಎಡಿಸಿ ಗೀತಾ ಹುಡೇದ, ವಿದ್ಯಾರ್ಥಿಗಳ ಪೋಷಕರು, ಶಿಕ್ಷಕರು ಕಾರ್ಯಕ್ರಮದಲ್ಲಿ ಇದ್ದರು.