ವಿಕಲಚೇತನರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ

| Published : Apr 07 2024, 01:48 AM IST

ವಿಕಲಚೇತನರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಮತದಾನದ ಬಗ್ಗೆ ಅರಿವು ಮೂಡಿಸಲು ಗ್ರಾಮೀಣ, ನಗರ ಹಾಗೂ ತಾಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಗೂ ವಿಕಲಚೇತನರಿಂದ ಶನಿವಾರ ಏರ್ಪಡಿಸಿದ್ದ ವಿಕಲಚೇತನರ ಬೈಕ್ ರ್‍ಯಾಲಿ ಎಲ್ಲರ ಗಮನ ಸೆಳೆಯಿತು.

ಬೈಕ್ ರ್‍ಯಾಲಿ ಚಾಲನೆ ನೀಡಿದ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್

ಕನ್ನಡಪ್ರಭವಾರ್ತೆ ಚಿತ್ರದುರ್ಗಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಮತದಾನದ ಬಗ್ಗೆ ಅರಿವು ಮೂಡಿಸಲು ಗ್ರಾಮೀಣ, ನಗರ ಹಾಗೂ ತಾಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಗೂ ವಿಕಲಚೇತನರಿಂದ ಶನಿವಾರ ಏರ್ಪಡಿಸಿದ್ದ ವಿಕಲಚೇತನರ ಬೈಕ್ ರ್‍ಯಾಲಿ ಎಲ್ಲರ ಗಮನ ಸೆಳೆಯಿತು. ಜಿಲ್ಲಾಧಿಕಾರಿ ಕಚೇರಿ ಸಮೀಪದ ಓನಕೆ ಓಬವ್ವ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ ಹಾಗೂ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಕಲಚೇತನರ ಬೈಕ್ ರ್‍ಯಾಲಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಎಸ್.ಜೆ.ಸೋಮಶೇಖರ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಕಡಿಮೆ ಮತದಾನವಾಗಿರುವ ಪ್ರದೇಶಗಳಲ್ಲಿ ಹಾಗೂ ಅರ್ಹ ಮತದಾರರು ಯಾರೂ ಕೂಡ ಮತದಾನ ಪ್ರಕ್ರಿಯೆಯಿಂದ ಹೊರಗುಳಿಯಬಾರದು. ಈ ಹಿನ್ನಲೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಅಂಗವಿಕಲ ಮತದಾರರು, ಯುವ ಮತದಾರರು, ಮಹಿಳಾ ಮತದಾರರು ಸೇರಿದಂತೆ ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ಪ್ರಕ್ರಿಯೆಯಿಂದ ಹೊರಗುಳಿಯದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ. ಕಡ್ಡಾಯವಾಗಿ ಮತದಾನ ಮಾಡುವಂತೆ ಪ್ರೇರೇಪಿಸಲಾಗುತ್ತಿದೆ ಎಂದರು.

ಏ.26ರಂದು ನಡೆಯುವ ಲೋಕಸಭಾ ಸಾರ್ವತ್ರಿಕ ಚನಾವಣೆಯಲ್ಲಿ ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೇ ತಮ್ಮ ಮತಗಟ್ಟೆಗಳಿಗೆ ತೆರಳಿ ಕಡ್ಡಾಯ ಮತ ಚಲಾಯಿಸಿ ಪ್ರಜಾಪ್ರಭುತ್ವ ಸದೃಢಗೊಳಿಸಬೇಕು ಎಂದರು. ಒನಕೆ ಓಬವ್ವ ವೃತ್ತದಿಂದ ಆರಂಭವಾದ ವಿಕಲಚೇತನರ ಬೈಕ್ ರ್‍ಯಾಲಿ, ಮದಕರಿ ನಾಯಕ ವೃತ್ತ, ಅಂಬೇಡ್ಕರ್ ವೃತ್ತ, ಮಹಾವೀರ ವೃತ್ತ, ಎಸ್‍ಬಿಎಂ ವೃತ್ತ, ಗಾಂಧಿ ವೃತ್ತದ ಮೂಲಕ ಸಂಗೊಳ್ಳಿ ರಾಯಣ್ಣ ವೃತ್ತ, ಕನಕ ವೃತ್ತದವರೆಗೂ ಸಂಚರಿಸಿ ಪುನಃ ಒನಕೆ ವೃತ್ತ ತಲುಪಿತು.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ತಿಮ್ಮಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಎಂ.ವಿ.ವೀಣಾ, ತಾಪಂ ಇಒ ಅನಂತ ರಾಜು, ಸಹಾಯಕ ನಿರ್ದೇಶಕ ಯರ್ರಿಸ್ವಾಮಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಧಾ, ಜಿಲ್ಲಾ ಸ್ವೀಪ್ ಸಮಿತಿ ಸಂಯೋಜಕಿ ಸುಷ್ಮಾರಾಣಿ, ಎಂಆರ್.ಡಬ್ಯೂ ಎನ್.ಮೈಲಾರಪ್ಪ ಸೇರಿದಂತೆ ವಿಆರ್.ಡಬ್ಲ್ಯೂ, ಯುಆರ್.ಡಬ್ಲ್ಯೂ ಹಾಗೂ ವಿಕಲಚೇತನರು ಇದ್ದರು.