ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ಅಲಂಕರಿಸಿರುವ 42 ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಿರುವ ಕರ್ನಾಟಕ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ಕನ್ನಡಪ್ರಭ ವಾರ್ತೆ ನವದೆಹಲಿ

ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ಅಲಂಕರಿಸಿರುವ 42 ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಿರುವ ಕರ್ನಾಟಕ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

2025ರ ಜನವರಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 42 ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರನ್ನು ನಿಗಮ-ಮಂಡಳಿಗಳ ಅಧ್ಯಕ್ಷರನ್ನಾಗಿ ನೇಮಿಸಿ, ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿತ್ತು. ರಾಜ್ಯ ಸರ್ಕಾರದ ಈ ನಿರ್ಧಾರ ಪ್ರಶ್ನಿಸಿ, ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.

ವಿಧಾನಸಭೆಯ ಸದಸ್ಯರು (ಶಾಸಕರು) ಮತ್ತು ವಿಧಾನ ಪರಿಷತ್ತಿನ (ಎಂಎಲ್‌ಸಿ) ಸದಸ್ಯರನ್ನು ವಿವಿಧ ಮಂಡಳಿಗಳು ಮತ್ತು ನಿಗಮಗಳ ಅಧ್ಯಕ್ಷರನ್ನಾಗಿ ನೇಮಿಸುವುದು ತಪ್ಪಲ್ಲ. ಆದರೆ, ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡುವುದು ಸಂವಿಧಾನದ 161 (1ಎ) ತಿದ್ದುಪಡಿಯ ಉಲ್ಲಂಘನೆಯಾಗಲಿದೆ. ಮುಖ್ಯಮಂತ್ರಿ ಸೇರಿ ಒಟ್ಟು ಸಚಿವರ ಸಂಖ್ಯೆ, ವಿಧಾನಸಭೆಯ ಒಟ್ಟು ಸದಸ್ಯರ ಸಂಖ್ಯೆಯ ಶೇಕಡಾ 15ಕ್ಕಿಂತ (15%) ಹೆಚ್ಚಿರಬಾರದು ಎಂಬ ನಿಯಮದ ಉಲ್ಲಂಘನೆಯಾಗಲಿದೆ. ಜೊತೆಗೆ, ಈ ಶಾಸಕರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡುವುದರಿಂದ ಹೆಚ್ಚಿನ ಸಂಬಳ, ಅಧಿಕೃತ ವಾಹನಗಳು, ಚಾಲಕರು, ಇಂಧನ ಭತ್ಯೆ, ಮನೆ ಬಾಡಿಗೆ ಭತ್ಯೆ ಮತ್ತು ವೈದ್ಯಕೀಯ ಮರುಪಾವತಿಗಳಂತಹ ಆರ್ಥಿಕ ಹೊರೆ ಹೆಚ್ಚಾಗಲಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.

ಮಾರ್ಚ್‌ 4ರಂದು ಅರ್ಜಿಯ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್, ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ, ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು. ಮಂಗಳವಾರ ಈ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ದ್ವಿಸದಸ್ಯ ಪೀಠ, ಅರ್ಜಿಯನ್ನು ವಜಾಗೊಳಿಸಿತು. ಈ ಸಂಬಂಧ ಹೈಕೋರ್ಟ್‌ನಲ್ಲಿ ಪರಿಶೀಲನಾ ಅರ್ಜಿ ಸಲ್ಲಿಸುವಂತೆ ಸೂಚಿಸಿತು.