ಕನ್ನಡಪ್ರಭ ವಾರ್ತೆ ವಿಜಯಪುರ
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಿ ಮರುಪರಿಶೀಲನೆ ನಡೆಸುವಂತೆ ಆಗ್ರಹಿಸಿ ವಿಜಯಪುರದಲ್ಲಿ ವಿವಿಧ ಸಾಮಾಜಿಕ, ಪ್ರಗತಿಪರ ಹಾಗೂ ನಾಗರಿಕ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.ದಲಿತ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಮಾತನಾಡಿ, ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕಾಗಿದ್ದು, ಆಡಳಿತಾತ್ಮಕ ಪ್ರಕ್ರಿಯೆಗಳ ಹೆಸರಿನಲ್ಲಿ ಯಾರೊಬ್ಬರ ಮತದಾನದ ಹಕ್ಕು ಕಸಿದುಕೊಳ್ಳುವಂತಾಗಬಾರದು. ಎಸ್‌ಐಆರ್ ಪ್ರಕ್ರಿಯೆ ಮರುಪರಿಶೀಲಿಸಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿದ ನಂತರವೇ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಡಿಎಸ್ಎಸ್ ಜಿಲ್ಲಾ ಸಂಚಾಲಕ ಚನ್ನು ಕಟ್ಟಿಮನಿ, ರೈತ ಮುಖಂಡ ಅರವಿಂದ ಕುಲಕರ್ಣಿ, ಸ್ಲಂ ಅಭಿವೃದ್ಧಿ ಸಮಿತಿ ಅಧ್ಯಕ್ಷ ಅಕ್ರಮ ಮಾಶಾಳಕರ, ಯು.ಎಚ್. ಖದೀರ, ಅನಿಲ ಹೊಸಮನಿ, ಫಯಾಜ್ ಕಲಾದಗಿ, ಸುರೇಶ ಬಿಜಾಪುರ, ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪುರ, ವಿದ್ಯಾವತಿ ಅಂಕಲಗಿ, ರಾವುತ ತಳಕೆರಿ, ಎದ್ದೇಳು ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಹಾಗೂ ವಿವಿಧ ಸಾಮಾಜಿಕ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.