ಸಿಎಎ ವಿರೋಧಿಸಿ ಪ್ರಗತಿಪರ ಸಂಘಟನೆಗಳ ಮನವಿ

| Published : Mar 17 2024, 01:45 AM IST

ಸಾರಾಂಶ

ಪ್ರಗತಿ ಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಸಂಘಟನೆಗಳಿಂದ ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಡಿ. ಕಡಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಕೊಪ್ಪಳ

ತಾರತಮ್ಯದಿಂದ ಕೂಡಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ರದ್ದತಿ, ಸಂವಿಧಾನ ವಿರೋಧಿ ಹೇಳಿಕೆ ನೀಡುತ್ತಿರುವ ಅನಂತ್ ಕುಮಾರ್ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹಿಸಿ ಪ್ರಗತಿ ಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಸಂಘಟನೆಗಳಿಂದ ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಡಿ. ಕಡಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

ದೇಶದಲ್ಲಿ ಜಾರಿ ಮಾಡಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಯಿಂದ ಕಾನೂನು ಎದುರು ಎಲ್ಲರೂ ಸಮಾನರು ಎಂಬ ಕಲಂ 14ರ ಉಲ್ಲಂಘನೆಯಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ವಿಶ್ವಸಂಸ್ಥೆಯ ಪ್ರಧಾನ ಆಯುಕ್ತರ ಕಚೇರಿಯ ವಕ್ತಾರರು ತಿಳಿಸಿದ್ದಾರೆ. ಧಾರ್ಮಿಕ ಸ್ವಾತಂತ್ರ್ಯಕ್ಕೆ ಗೌರವ ಹಾಗೂ ಎಲ್ಲಾ ಸಮುದಾಯಗಳಿಗೆ ಸಮಾನ ಹಕ್ಕುಗಳು ನೆಲದ ಕಾನೂನು ಅಡಿಯಲ್ಲಿ ದೊರಕಬೇಕು. ಇದು ಪ್ರಜಾಪ್ರಭುತ್ವದ ಭೌಗೋಳಿಕವಾದ ಮೂಲಭೂತ ಸಿದ್ಧಾಂತಗಳಲ್ಲಿ ಪ್ರತಿಪಾದನೆಯಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಮುಂಚೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು. ಎಲ್ಲರೂ ಒಳಗೊಂಡಂತೆ ಪೌರತ್ವ ಜಾರಿಗೆ ತರುವಂತೆ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಬಿಜೆಪಿಯ ಸಂಸದ ಅನಂತ್ ಕುಮಾರ್ ಹೆಗಡೆ ಈ ಹಿಂದೆ ನಾವು ಬಂದಿದ್ದೇ ಸಂವಿಧಾನ ಬದಲಾಯಿಸಲು, ಯಾರೂ ತಡೆಯಲು ಸಾಧ್ಯವಿಲ್ಲ ಎಂದು ಅಹಂಕಾರದಿಂದ ಹೇಳಿದ್ದರು. ಆಗ ಲೋಕಸಭೆಯಲ್ಲಿ ಸಾಕಷ್ಟು ಚರ್ಚೆಗಳಾಗಿತ್ತು. ಅದೇ ರೀತಿ ಇತ್ತೀಚೆಗೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸಂವಿಧಾನ ಬದಲಾಯಿಸಲು ಈ ಬಾರಿ 400 ಸಂಸದರು ಆಯ್ಕೆ ಮಾಡಿ ಎಂದು ಕರೆ ನೀಡಿರುವುದು ಸಂವಿಧಾನ ಮತ್ತು ದೇಶ ವಿರೋಧಿಯಾಗಿದೆ. ಅಲ್ಲದೆ ಮಾಧ್ಯಮದವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇವರ ಹೇಳಿಕೆ ಕೋಮುಗಲಭೆಗೆ ಕಾರಣವಾಗುತ್ತದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಆಗ್ರಹಿಸಿದರು.

ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಬಸವರಾಜ ಶೀಲವಂತರ, ಜನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್.ಎ. ಗಫಾರ್, ಬೀದಿ ಬದಿ ವ್ಯಾಪಾರಸ್ಥರ ಸಂಘದ ತಾಲೂಕಾ ಅಧ್ಯಕ್ಷ ಆನಂದ ಅರಕೇರಿ, ಕರ್ನಾಟಕ ರೈತ ಸಂಘದ ರಾಜ್ಯ ಅಧ್ಯಕ್ಷ ಡಿ.ಎಚ್. ಪೂಜಾರ, ಜಿಲ್ಲಾ ಕಾರ್ಯದರ್ಶಿ ಬಸವರಾಜ್ ನರೇಗಲ್, ಮುಖಂಡರಾದ ತುಕಾರಾಮ್ ಬಿ. ಪಾತ್ರೋಟಿ, ಪ್ರಸಾದ್ ಕಾಳೆ, ಮುದಿಯಪ್ಪ ಹೊಸಮನಿ. ನಿಂಗು ಜಿ.ಎಸ್. ಬೆಣಕಲ್ ಮುಂತಾದವರಿದ್ದರು.