ಸಾರಾಂಶ
ಸಂಡೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ₹೨೦.೧೯ ಕೋಟಿ ಬಳ್ಳಾರಿ ಲೋಕಸಭಾ ಚುನಾವಣೆ ಗೆಲ್ಲಲು ಬೂತ್ ಮಟ್ಟದಲ್ಲಿ ಬಳಸಲಾಗಿದೆ ಎಂದು ಈ ಪ್ರಕರಣದ ತನಿಖೆ ನಡೆಸಿದ್ದ ಜಾರಿ ನಿರ್ದೇಶನಾಲಯವು (ಇಡಿ) ಸ್ಪಷ್ಟವಾಗಿ ಉಲ್ಲೇಖಿಸಿದೆ. ಈ ಹಿನ್ನೆಲೆಯಲ್ಲಿ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಲೋಕಸಭಾ ಸದಸ್ಯ ಈ.ತುಕಾರಾಂ ಸದಸ್ಯತ್ವ ರದ್ದುಗೊಳಿಸುವಂತೆ ಕೋರಿ ಒಂದೆರಡು ದಿನಗಳಲ್ಲಿ ತುಕಾರಾಂ ವಿರುದ್ಧ ಸ್ಪರ್ಧಿಸಿದ್ದ ಬಿ.ಶ್ರೀರಾಮುಲು ಹೈಕೋರ್ಟಿಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ಡಾ. ರಾಧಮೋಹನ್‌ದಾಸ್ ಅಗರ್‌ವಾಲ್ ಹೇಳಿದರು.
ಪಟ್ಟಣದಲ್ಲಿ ಬಿಜೆಪಿ ಸಂಡೂರು ಮಂಡಲದಿಂದ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತ್ವ ಅಭಿಯಾನ ಸಭೆ, ಸಂಡೂರು ವಿಧಾನಸಭಾ ಉಪ ಚುನಾವಣೆ ಕುರಿತ ವಿಶೇಷ ಸಭೆಗೆ ಆಗಮಿಸಿದ್ದ ಅವರು ಸಭೆಗೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ನಿಗಮದ ಹಣವನ್ನು ಕದ್ದು, ಅಕ್ರಮವಾಗಿ ಆಂಧ್ರ, ತೆಲಂಗಾಣ ರಾಜ್ಯಗಳಲ್ಲಿನ ವಿವಿಧ ಅಕೌಂಟ್‌ಗಳಿಗೆ ವರ್ಗಾಯಿಸಲಾಗಿದೆ. ವರ್ಗಾಯಿಸಿದ ಹಣದಲ್ಲಿ ₹೨೦.೧೯ ಕೋಟಿಯನ್ನು ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಬಳಸಲಾಗಿದೆ. ಅಕ್ರಮ ಎಸಗುವ ಮೂಲಕ ಬಳ್ಳಾರಿಯಲ್ಲಿ ಕಾಂಗ್ರೆಸ್ ಗೆದ್ದಿದೆ ಎಂದು ಆರೋಪಿಸಿದರು.
ಈ ಹಿಂದೆ ೧೯೭೫ರಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅಕ್ರಮವಾಗಿ ಚುನಾವಣೆಯಲ್ಲಿ ಗೆಲುವು ಸಾಧಿಸಿದಾಗ, ಅವರ ಸದಸ್ಯತ್ವ ರದ್ದುಗೊಳಿಸುವಂತೆ ಕೋರಿ ಅವರ ಪ್ರತಿಸ್ಪರ್ಧಿ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಇಂದಿರಾಗಾಂಧಿ ಲೋಕಸಭಾ ಸದಸ್ಯತ್ವವನ್ನು ರದ್ದುಗೊಳಿಸಿತ್ತು. ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲೂ ಮತದಾರರ ಓಲೈಕೆಗೆ ಹಣ ಬಳಕೆಯಾಗಿರುವ ಆರೋಪದ ಹಿನ್ನೆಲೆಯಲ್ಲಿ ವಿಜೇತ ಅಭ್ಯರ್ಥಿಯ ಸದಸ್ಯತ್ವ ರದ್ದುಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗುವುದು. ತುಕಾರಾಂ ಅನರ್ಹಗೊಂಡರೆ ಸ್ವಾಭಾವಿಕವಾಗಿ ಎರಡನೇ ಸ್ಥಾನದಲ್ಲಿರುವ ಬಿ.ಶ್ರೀರಾಮುಲು ಸಂಸದರಾಗಲಿದ್ದಾರೆ ಎಂದರು.ರಾಮುಲು ಸಂಡೂರು ಉಪಚುನಾವಣೆಗೆ ಸ್ಪರ್ಧಿಸಲ್ಲ:
ಸಂಡೂರು ವಿಧಾನಸಭಾ ಉಪ ಚುನಾವಣೆಗೆ ಬಿ.ಶ್ರೀರಾಮುಲು ಸೇರಿದಂತೆ ಹಲವರ ಹೆಸರು ಕೇಳಿ ಬರುತ್ತಿರುವ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಜ್ಯ ಉಸ್ತುವಾರಿ, ಶ್ರೀರಾಮುಲು ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಅವರನ್ನು ಲೋಕಸಭಾ ಸದಸ್ಯರನ್ನಾಗಿ ಮಾಡುತ್ತೇವೆ. ಕ್ಷೇತ್ರದಲ್ಲಿ ಸ್ಪರ್ಧೆ ಬಯಸಿ ಹಲವರು ಅರ್ಜಿ ಸಲ್ಲಿಸಿದ್ದಾರೆ. ಪಕ್ಷ ಅಭ್ಯರ್ಥಿ ಯಾರೆಂಬುದನ್ನು ನಿರ್ಧರಿಸಲಿದೆ. ಯಾರೇ ಚುನಾವಣೆಗೆ ನಿಲ್ಲಲಿ, ಎಲ್ಲರೂ ಒಟ್ಟಾಗಿ ಪಕ್ಷ ಕಣಕ್ಕಿಳಿಸುವ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದರು.ಮಾಜಿ ಸಚಿವ ಶ್ರೀರಾಮುಲು ಮಾತನಾಡಿ, ವಾಲ್ಮೀಕಿ ನಿಗಮದ ಹಣ ದುರುಪಯೋಗವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಈ ಹಣ ಬಳಕೆ ಮಾಡಲಾಗಿದೆ. ಈ ಬಗ್ಗೆ ಕಾನೂನು ತಜ್ಞರ ಜೊತೆಗೆ ಚರ್ಚೆ ಮಾಡಿ, ಕೋರ್ಟ್ ಮೊರೆ ಹೋಗುತ್ತೇನೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಮೋಕಾ, ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಕುಡಚಿ, ವಿಪ ಸದಸ್ಯ ವೈ.ಎಂ. ಸತೀಶ್, ಮಾಜಿ ಸಂಸದ ವೈ.ದೇವೇಂದ್ರಪ್ಪ, ಜಿಲ್ಲಾ ಘಟಕದ ಉಪಾಧ್ಯಕ್ಷ ಜಿ.ಟಿ. ಪಂಪಾಪತಿ, ಪ್ರಧಾನ ಕಾರ್ಯದರ್ಶಿ ಉಡೇದ ಸುರೇಶ, ದೊಡ್ಡ ಹುಲುಗಪ್ಪ, ಸೋಮನಗೌಡ್ರು, ಸಂಡೂರು ಮಂಡಲ ಅಧ್ಯಕ್ಷ ನಾನಾಸಾಹೇಬ್ ನಿಕ್ಕಂ, ಮುಖಂಡರಾದ ಡಿ.ಕೃಷ್ಣಪ್ಪ, ಕೆ.ಎಸ್. ದಿವಾಕರ್, ಆರ್.ಟಿ. ರಘುನಾಥ, ರವಿಕಾಂತ ಭೋಸ್ಲೆ, ದರೋಜಿ ರಮೇಶ್ ಇದ್ದರು.