ಸಾರಾಂಶ
ಸಂತ ಶಿಶುನಾಳ ಶರೀಫ ಹೆಸರಿನಲ್ಲಿ ಪ್ರಾಧಿಕಾರ ರಚಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಶಿಗ್ಗಾಂವಿ ತಾಲೂಕು ಸಮಿತಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಶಿಗ್ಗಾಂವಿ: ಸಂತ ಶಿಶುನಾಳ ಶರೀಫ ಹೆಸರಿನಲ್ಲಿ ಪ್ರಾಧಿಕಾರ ರಚಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಶಿಗ್ಗಾಂವಿ ತಾಲೂಕು ಸಮಿತಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದಲ್ಲಿ ಮನವಿ ನೀಡಿ ಮಾತನಾಡಿದ ಜಿಲ್ಲಾಧ್ಯಕ್ಷ ರಾಮು ತಳವಾರ, ಸಂತ ಶಿಶುನಾಳ ಶರೀಫರ ಹೆಸರಿನಲ್ಲಿ ಪ್ರಾಧಿಕಾರ ರಚಿಸುವಂತೆ ಈ ಭಾಗದ ಹಲವಾರು ಕನ್ನಡ ಪರ ಸಂಘಟನೆಗಳು ಹಾಗೂ ಸಾರ್ವಜನಿಕರು ಒತ್ತಾಯಿಸುತ್ತಾ ಬಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಹಿಂದಿನ ಸರ್ಕಾರ ಶರೀಫಗಿರಿ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಿದ್ದರು ಸಹ ಪ್ರಾಧಿಕಾರ ರಚನೆ ಸಾಧ್ಯವಾಗಿಲ್ಲ. ರಾಜ್ಯ ಸರ್ಕಾರ ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ, ಪ್ರಾಧಿಕಾರ ರಚಿಸಬೇಕು ಎಂದು ಆಗ್ರಹಿಸಿದರು.ತಾಲೂಕು ಸಮಿತಿಯ ಅಧ್ಯಕ್ಷ ಸುರೇಶ ಬ. ವನ್ನಹಳ್ಳಿ ಮಾತನಾಡಿ, ಶಿಶುವಿನಹಾಳ ಶರೀಫಗಿರಿಯಲ್ಲಿ ಪ್ರಾಧಿಕಾರ ಸ್ಥಾಪನೆಯಿಂದ ಶರೀಫರ ತತ್ವ-ಸಿದ್ಧಾಂತವನ್ನು ಹೆಚ್ಚಿನ ರೀತಿಯಲ್ಲಿ ಅಧ್ಯಯನ ನಡೆಸಿ, ನಾಡಿದಾದ್ಯಂತ ಪ್ರಸಾರ ಮಾಡಲು ಸಾಧ್ಯವಾಗುತ್ತದೆ. ಅಲ್ಲದೇ ನಾಡಿನಲ್ಲಿ ಭಾವೈಕ್ಯದ ಬೇರುಗಳನ್ನು ಮತ್ತಷ್ಟು ಗಟ್ಟಿಗೊಳಿಸಲು ಸಾಧ್ಯವಾಗುತ್ತದೆ. ಕಾರಣ ರಾಜ್ಯ ಸರ್ಕಾರ ಬರುವ ಮಾರ್ಚ್ ತಿಂಗಳಲ್ಲಿ ಮಂಡಿಸುವ ಬಜೆಟ್‌ನಲ್ಲಿ ಪ್ರಾಧಿಕಾರ ಘೋಷಣೆ ಮಾಡಿ ಅನುದಾನ ಬಿಡುಗಡೆಗೆ ಒತ್ತಾಯಿಸಿದರು.
ತಾಲೂಕು ಉಪಾಧ್ಯಕ್ಷ ರಮೇಶ ಹರಿಜನ, ರೈತ ಘಟಕದ ತಾಲೂಕು ಅಧ್ಯಕ್ಷ ವೀರಭದ್ರಗೌಡ ಪೊಲೀಸ್‌ಗೌಡ್ರ, ತಾಲೂಕು ಕಾರ್ಮಿಕ ಘಟಕದ ಅಧ್ಯಕ್ಷ ಖಾಸಿಂಸಾಬ್ ಮುಲ್ಲಾ, ಸಂಚಾಲಕ ರಮೇಶ ಈಟಿ, ಗಣಪತಿ ಕಲಗುದರಿ, ಬಸವರಾಜ ಶಿಡ್ಲಾಪುರ, ಮಂಜುನಾಥ ಅವಲಿ, ಅರ್ಜುನ ತಳವಾರ, ರಮೇಶ ದೇವಗಿರಿ, ಮುಂತಾಜ್ ಬಾಳಣ್ಣನವರ, ಅರುಣಾ ಬ. ಅಡರಕಟ್ಟಿ ಮುಂತಾದವರು ಉಪಸ್ಥಿತರಿದ್ದರು.