ದೊಡ್ಡಬಳ್ಳಾಪುರ: ಅತಿ ವೇಗವಾಗಿ ಚಲಿಸುತ್ತಿದ್ದ ಪೆಟ್ರೋಲ್ ಟ್ಯಾಂಕರ್ ಲಾರಿಯೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಗ್ನಿ ಅವಘಡ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಮಲ್ಲೋಹಳ್ಳಿ ಕ್ರಾಸ್ ಬಳಿ ಗುರುವಾರ ನಡೆದಿದೆ. ಕ್ಷಣಾರ್ಧದಲ್ಲೇ ಟ್ಯಾಂಕರ್ ಬೆಂಕಿಗಾಹುತಿಯಾಗಿದ್ದು, ಪಕ್ಕದಲ್ಲಿದ್ದ ಹಾಲಿನ ಟ್ಯಾಂಕರ್‌ಗೂ ಬೆಂಕಿ ವ್ಯಾಪಿಸಿದೆ. ಎರಡೂ ವಾಹನಗಳು ಸುಟ್ಟು ಕರಕಲಾಗಿವೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಮರಕ್ಕೆ ಡಿಕ್ಕಿ ಹೊಡೆದ ತಕ್ಷಣ ಪೆಟ್ರೋಲ್ ಟ್ಯಾಂಕರ್ ಧಗಧಗನೆ ಹೊತ್ತಿ ಉರಿದಿದ್ದು, ಆ ವೇಳೆ ಸಮೀಪದಲ್ಲಿ ರಿವರ್ಸ್ ತೆಗೆದುಕೊಳ್ಳುತ್ತಿದ್ದ ಹಾಲಿನ ಟ್ಯಾಂಕರ್‌ಗೂ ಅಗ್ನಿಜ್ವಾಲೆ ವ್ಯಾಪಿಸಿದೆ ಎನ್ನಲಾಗಿದೆ. ಅವಘಡ ಸಂಭವಿಸುತ್ತಿದ್ದಂತೆ ಎರಡೂ ವಾಹನಗಳ ಚಾಲಕರು ಸಮಯಪ್ರಜ್ಞೆ ಮೆರೆದು ಲಾರಿಯಿಂದ ಹೊರಗೆ ಹಾರಿದ ಪರಿಣಾಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯಲ್ಲಿ ಎರಡೂ ಲಾರಿಗಳು ಬಹುತೇಕ ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ನಿಖರ ಕಾರಣವನ್ನು ತನಿಖೆ ನಡೆಸುತ್ತಿದ್ದಾರೆ.
ಮರಕ್ಕೆ ಡಿಕ್ಕಿಯಾಗಿ ಪೆಟ್ರೋಲ್ - ಹಾಲಿನ ಟ್ಯಾಂಕರ್ ಬೆಂಕಿಗಾಹುತಿ
ಮರಕ್ಕೆ ಡಿಕ್ಕಿ ಹೊಡೆದ ತಕ್ಷಣ ಪೆಟ್ರೋಲ್ ಟ್ಯಾಂಕರ್ ಧಗಧಗನೆ ಹೊತ್ತಿ ಉರಿದಿದ್ದು, ಆ ವೇಳೆ ಸಮೀಪದಲ್ಲಿ ರಿವರ್ಸ್ ತೆಗೆದುಕೊಳ್ಳುತ್ತಿದ್ದ ಹಾಲಿನ ಟ್ಯಾಂಕರ್‌ಗೂ ಅಗ್ನಿಜ್ವಾಲೆ ವ್ಯಾಪಿಸಿದೆ ಎನ್ನಲಾಗಿದೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.