ದೈಹಿಕ ಶಿಕ್ಷಣ ಶಿಕ್ಷಕ, ಶಿಕ್ಷಕಿಯರ ಸಮಸ್ಯೆಗಳ ಸಂಪೂರ್ಣ ಅರಿವು ನನಗಿದೆ: ಬಸವರಾಜ ಹೊರಟ್ಟಿ

| Published : Aug 13 2024, 12:47 AM IST

ದೈಹಿಕ ಶಿಕ್ಷಣ ಶಿಕ್ಷಕ, ಶಿಕ್ಷಕಿಯರ ಸಮಸ್ಯೆಗಳ ಸಂಪೂರ್ಣ ಅರಿವು ನನಗಿದೆ: ಬಸವರಾಜ ಹೊರಟ್ಟಿ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಬಹುದಿನದ ಬೇಡಿಕೆಗಳ ಈಡೇರಿಕೆಗಾಗಿ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರ, ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಅತಿ ಶೀಘ್ರದಲ್ಲಿಯೇ ಸಮಸ್ಯೆ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು ರಾಜ್ಯ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ರಾಣಿಬೆನ್ನೂರು: ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಬಹುದಿನದ ಬೇಡಿಕೆಗಳ ಈಡೇರಿಕೆಗಾಗಿ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರ, ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಅತಿ ಶೀಘ್ರದಲ್ಲಿಯೇ ಸಮಸ್ಯೆ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು ರಾಜ್ಯ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.ನಗರದ ರೈಲ್ವೆ ಸ್ಟೇಶನ್ ರಸ್ತೆಯ ವರ್ತಕರ ಸಮುದಾಯ ಭವನದಲ್ಲಿ ಭಾನುವಾರ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಹಾಗೂ ತಾಲೂಕು ಘಟಕಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿಯ 2024-25ನೇ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ನಾನು ಸಹ ದೈಹಿಕ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸಿರುವೆ. ಸರ್ಕಾರಿ, ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕ, ಶಿಕ್ಷಕಿಯರ ಸಮಸ್ಯೆಗಳ ಸಂಪೂರ್ಣ ಅರಿವು ನನಗಿದೆ. ಕಳೆದ ಹಲವಾರು ವರ್ಷಗಳಿಂದ ದೈಹಿಕ ಶಿಕ್ಷಕರ ಅನೇಕ ಸಮಸ್ಯೆಗಳು ಸಮಸ್ಯೆಗಳಾಗಿಯೇ ಉಳಿದಿವೆ. ಅವುಗಳ ಇತ್ಯರ್ಥಕ್ಕಾಗಿ ಈಗಾಗಲೆ ಮುಖ್ಯ ಮಂತ್ರಿಗಳೊಂದಿಗೆ, ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಹಲವಾರು ಬಾರಿ ಚರ್ಚಿಸಿದ್ದೇನೆ. ಶೀಘ್ರದಲ್ಲಿಯೇ ನಿಮ್ಮ ಬೇಡಿಕೆಗಳು ಈಡೇರಲಿವೆ ಎಂದು ಭರವಸೆ ನೀಡಿದರು.ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚೌಡಪ್ಪ ಎಸ್. ಮಾತನಾಡಿ, ಕಳೆದ 25 ರಿಂದ 30 ವರ್ಷಗಳ ಕಾಲ ನಮ್ಮ ಹಲವಾರು ಬೇಡಿಕೆಗಳ ಈಡೇರಿಕೆಗಾಗಿ ನಾವು ಹೊರಾಟ ನಡೆಸುತ್ತಾ ಬಂದಿದ್ದೇವೆ. ದೈಹಿಕ ಶಿಕ್ಷಣ ಶಿಕ್ಷಕರನ್ನು ಸಹ ಶಿಕ್ಷಕರೆಂದು ಪರಿಗಣಿಸಬೇಕು. ರಾಜ್ಯ ಪ್ರಾಥಮಿಕ/ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಬೇಕು. ಸರ್ಕಾರಿ/ಅನುದಾನಿತ ಪ್ರಾಥಮಿಕ/ ಪ್ರೌಢ ಶಾಲೆಗಳಲ್ಲಿ ಹಾಗೂ ಪ.ಪೂ. ಕಾಲೇಜುಗಳಲ್ಲಿ ಖಾಲಿ ಇರುವ ಮುಖ್ಯ ಶಿಕ್ಷಕರ ಹುದ್ದೇಗೆ, ಜೇಷ್ಠತೆ ಆಧಾರದ ಮೇಲೆ ಮುಖ್ಯ ಶಿಕ್ಷಕರು/ಪ್ರಾಂಶುಪಾಲರೆಂದು ನೇಮಕ ಮಾಡಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಡಿಡಿಪಿಐ ಕಚೇರಿಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಸಂಯೋಜಕರ ಮತ್ತು ಸಹಾಯಕ ಶಿಕ್ಷಣ ಪರೀವಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡಬೇಕು ಎಂದರು. ರಾಜ್ಯ ಸಂಘದ ಕಾರ್ಯಾಧ್ಯಕ್ಷ ಪಿ.ಡಿ. ಕಾಲವಾಡ, ಪ್ರಧಾನ ಕಾರ್ಯದರ್ಶಿ ಚಂದ್ರಶೇಕರ ಕೆ,ಜೆ. ಮಾತನಾಡಿದರು. ರಾಜ್ಯ ಸಂಘದ ಖಜಾಂಚಿ ಡಿ.ವಿ. ಬಾಲರಾಜು, ರಾಜ್ಯ ಉಪಾಧ್ಯಕ್ಷ ಬಸವರಾಜ ಪಿ. ಪ್ರಮೋದ ರೋಣದ, ವಿಭಾಗೀಯ ಕಾರ್ಯದರ್ಶಿ ಶಾಹೀನಾ ಎಫ್., ಆರ್.ಟಿ.ಇ.ಎಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಭಾಸ ಸಾಹುಕಾರ, ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಚ್.ಪಿ. ಬಣಕಾರ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರು ಗ್ಯಾನಗೌಡ್ರ, ಕಾರ್ಯದರ್ಶಿ ಬಸವರಾಜ ಬಸಪ್ಪನವರ ಮತ್ತಿತರರಿದ್ದರು.