ಸಾರಾಂಶ
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರವು ಹೆಚ್ಚಿನ ಆದ್ಯತೆಯನ್ನು ನೀಡುತ್ತಿದ್ದು ಗ್ರಾಮೀಣ ವಿದ್ಯಾರ್ಥಿಗಳು ಇದನ್ನು ಬಳಸಿಕೊಂಡು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು
ಕನ್ನಡಪ್ರಭ ವಾರ್ತೆ ರಾವಂದೂರು
ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಹಾಗೂ ಸಂಸ್ಕಾರಯುತ ಶಿಕ್ಷಣ ದೊರೆಯುತ್ತದೆ ಎಂದು ವಿಜ್ಞಾನಿ ಇಂದು ಶೇಖರ್ ಹೇಳಿದರು.ಪಿರಿಯಾಪಟ್ಟಣ ತಾಲೂಕು ಸಂಗರಶೆಟ್ಟಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶಗಳಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳ ದುಶ್ಚಟಕ್ಕೆ ಬಲಿಯಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಆದರೆ ಗ್ರಾಮೀಣ ಭಾಗದ ಶಾಲೆಗಳಲ್ಲಿ ಉತ್ತಮ ಗುಣಾತ್ಮಕ ಶಿಕ್ಷಣದ ಜೊತೆಗೆ ಸಂಸ್ಕಾರಯುತ ಶಿಕ್ಷಣವು ಕೂಡ ದೊರೆಯುತ್ತಿದ್ದು ಭವ್ಯ ಭಾರತದ ನಿರ್ಮಾಣಕ್ಕೆ ಗ್ರಾಮೀಣ ವಿದ್ಯಾರ್ಥಿಗಳು ಮತ್ತು ಯುವಕರ ಕೊಡುಗೆ ಬಹಳ ಅಪಾರವಾದದ್ದು ಎಂದು ತಿಳಿಸಿದರು.ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದ ಆಶ್ರಯ ಸಮಿತಿಯ ಅಧ್ಯಕ್ಷ ನಿತಿನ್ ವೆಂಕಟೇಶ್ ಮಾತನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರವು ಹೆಚ್ಚಿನ ಆದ್ಯತೆಯನ್ನು ನೀಡುತ್ತಿದ್ದು ಗ್ರಾಮೀಣ ವಿದ್ಯಾರ್ಥಿಗಳು ಇದನ್ನು ಬಳಸಿಕೊಂಡು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ್ ಮಾತನಾಡಿ, ಶಾಲಾ ಚಟುವಟಿಕೆಗಳ ಜೊತೆಗೆ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳನ್ನು ನೀಡಿದಾಗ ಮಕ್ಕಳು ಸಂತೋಷದಿಂದ ಭಾಗವಹಿಸಿ ಸಂಭ್ರಮಿಸುವುದರ ಜೊತೆಗೆ ಕಲಿಕೆಯಲ್ಲಿಯೂ ಸಹ ಮುಂದೆ ಬರುತ್ತಾರೆ ಎಂದು ತಿಳಿಸಿದರು.ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಈ ಶಾಲೆಯ ಹಳೆಯ ವಿದ್ಯಾರ್ಥಿಗಳನ್ನು ಗ್ರಾಮದ ಹಿರಿಯರನ್ನು ಸನ್ಮಾನಿಸಲಾಯಿತು.
ಕ್ಷೇತ್ರ ಸಮನ್ವಯ ಅಧಿಕಾರಿ ಶಿವರಾಜ್ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಸಿ. ಪ್ರಶಾಂತ್, ಪ್ರೌಢಶಾಲಾ ಮುಖ್ಯೋಪಾಧ್ಯಾಯ ನಾಗಶೆಟ್ಟಿ, ಬಿಆರ್.ಪಿ ಶ್ರೀನಿಧಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಮಚಂದ್ರ, ಮುಖ್ಯೋಪಾಧ್ಯಾಯ ರೇವಣ್ಣ, ರಮೇಶ್, ಬಿಐಆರ್. ಟಿ ಪುಟ್ಟರಾಜು, ಸಿ.ಆರ್.ಪಿ ಗುರು ರಾಘವೇಂದ್ರ, ಗ್ರಾಪಂ ಅಧ್ಯಕ್ಷಗಂಗಾಧರ್, ಗ್ರಾಪಂ ಸದಸ್ಯರಾದ ಸುಬ್ರಮಣ್ಯ, ಮಂಜುಳಾ, ಸತೀಶ್ ನಾಯಕ, ಮುರುಳಿಧರ್ , ಬಸವರಾಜ್, ಶಾಲಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಶಶಿಧರ್, ಗ್ರಾಮದ ಹಿರಿಯರು ಮತ್ತು ಹಳೆಯ ವಿದ್ಯಾರ್ಥಿಗಳು ಇದ್ದರು.