ಪಿಕೆಪಿಎಸ್: ಹೊಸಮನಿ ಅಧ್ಯಕ್ಷ, ಲಮಾಣಿ ಉಪಾಧ್ಯಕ್ಷ

| Published : May 08 2025, 12:39 AM IST

ಸಾರಾಂಶ

ಕಮತಗಿ ಪಿಕೆಪಿಎಸ್‌ಗೆ ಅಧ್ಯಕ್ಷರಾಗಿ ಶಿದ್ಲಿಂಗಪ್ಪ ಹೊಸಮನಿ ಹಾಗೂ ಉಪಾಧ್ಯಕ್ಷ ಕಾಶೆಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾದರು.

ಕನ್ನಡಪ್ರಭ ವಾರ್ತೆ ಕಮತಗಿ

ಪಟ್ಟಣದಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಶಿದ್ಲಿಂಗಪ್ಪ ಹೊಸಮನಿ(ಕುಂಬಾರ), ಉಪಾಧ್ಯಕ್ಷರಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿ ಕಾಶಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾದರು.

ತೀವ್ರ ಕುತೂಹಲ ಮೂಡಿಸಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯು ಬುಧವಾರ ಜರುಗಿತು. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1ಗಂಟೆವರೆಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಿತು. ಅದ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿ ಶಿದ್ಲಿಂಗಪ್ಪ ಹೊಸಮನಿ (ಕುಂಬಾರ), ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಕಾಶಪ್ಪ ಲಮಾಣಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.

ಸಂಘದ 12 ಸದಸ್ಯರಲ್ಲಿ ಕಾಂಗ್ರೆಸ್ ಬೆಂಬಲಿತ 7 ಸದಸ್ಯರು, ಬಿಜೆಪಿ ಬೆಂಬಲಿತ 3 ಸದಸ್ಯರು, ಓರ್ವ ಪಕ್ಷೇತರ ಸದಸ್ಯ ಚುನಾವಣೆಯಲ್ಲಿ ಭಾಗವಹಿಸಿದ್ದರು. ಕಾಂಗ್ರೆಸ್ ಬೆಂಬಲಿತ ಓರ್ವ ಸದಸ್ಯ ಚುನಾವಣಾ ಪ್ರಕ್ರಿಯೆಯಿಂದ ದೂರವಿದ್ದರು ಎಂದು ಚುನಾವಣಾಧಿಕಾರಿ ಬಿ.ಎನ್.ಪೊಲೀಸ್ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದರು.

ವಿಜಯೋತ್ಸವ: ಕಮತಗಿ ಪಿಕೆಪಿಎಸ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿತ ಅಧ್ಯಕ್ಷ ಶಿದ್ಲಿಂಗಪ್ಪ ಹೊಸಮನಿ ಹಾಗೂ ಉಪಾಧ್ಯಕ್ಷ ಕಾಶೆಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದರಿಂದ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿತ್ತು.