ಆಲೂರು, ಸಕಲೇಶಪುರ ಕ್ಷೇತ್ರದಲ್ಲಿ ಬಿಜೆಪಿ ಸದಸ್ಯತ್ವ ಹೆಚ್ಚಿಸಲು ಯೋಜನೆ: ಪ್ರೀತಮ್ ಗೌಡ

| Published : Oct 03 2024, 01:17 AM IST

ಆಲೂರು, ಸಕಲೇಶಪುರ ಕ್ಷೇತ್ರದಲ್ಲಿ ಬಿಜೆಪಿ ಸದಸ್ಯತ್ವ ಹೆಚ್ಚಿಸಲು ಯೋಜನೆ: ಪ್ರೀತಮ್ ಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಕ್ಷೇತ್ರದ ಶಾಸಕರು ರಾಜ್ಯ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷರಾಗಿದ್ದಾರೆ, ಆದರೆ ಕ್ಷೇತ್ರದಲ್ಲಿ ನಡೆಯುತ್ತಿರುವ ಸದಸ್ಯತ್ವ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೋಂದಣಿ ಮಾಡಲು ಸಾಧ್ಯವಾಗಿಲ್ಲ.

ಕನ್ನಡಪ್ರಭ ವಾರ್ತೆ ಸಕಲೇಶಪುರ

ದೇಶಾದ್ಯಂತ ಭಾರತೀಯ ಜನತಾ ಪಾರ್ಟಿಯಿಂದ ಸದಸ್ಯತ್ವ ಅಭಿಯಾನ ಬಿರುಸಿನಿಂದ ಕೂಡಿದ್ದು, ಸಕಲೇಶಪುರ, ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದಲ್ಲಿ ಸದಸ್ಯತ್ವ ಸಂಖ್ಯೆ ಹೆಚ್ಚು ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮೈಸೂರು ವಿಭಾಗದ ಸದಸ್ಯತ್ವ ಅಭಿಯಾನದ ಉಸ್ತುವಾರಿ ಪ್ರೀತಮ್ ಗೌಡ ಹೇಳಿದರು.

ತಾಲೂಕಿನ ಬಾಳ್ಳುಪೇಟೆ ಸಮೀಪದ ಖಾಸಗಿ ಹೋಟೆಲ್‌ವೊಂದರಲ್ಲಿ ಸದಸ್ಯತ್ವ ಅಭಿಯಾನ- ೨೦೨೪ರ ಅಂಗವಾಗಿ ಕ್ಷೇತ್ರದ ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಮಹಾ ಶಕ್ತಿಕೇಂದ್ರದ ಪದಾಧಿಕಾರಿಗಳ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಕ್ಷೇತ್ರದ ಶಾಸಕರು ರಾಜ್ಯ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷರಾಗಿದ್ದಾರೆ, ಆದರೆ ಕ್ಷೇತ್ರದಲ್ಲಿ ನಡೆಯುತ್ತಿರುವ ಸದಸ್ಯತ್ವ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೋಂದಣಿ ಮಾಡಲು ಸಾಧ್ಯವಾಗಿಲ್ಲ. ಸದಸ್ಯತ್ವ ಸಂಖ್ಯೆ ಹೆಚ್ಚು ಮಾಡಲು ಗ್ರಾಮ ಪಂಚಾಯತಿವಾರು ತಂಡ ರಚನೆ ಮಾಡಬೇಕು. ರಚನೆಯಾದ ತಂಡ ಪಂಚಾಯತಿ ವ್ಯಾಪ್ತಿಯಲ್ಲಿ ಇತರೆ ಕಾರ್ಯಕರ್ತರನ್ನು ಜೋಡಿಸಿಕೊಂಡು ಮೂರು ದಿನದಲ್ಲಿ ಸದಸ್ಯತ್ವ ಸಂಖ್ಯೆಯನ್ನು ೫೦ ಸಾವಿರ ಗಡಿ ದಾಟಬೇಕು ಎಂದು ಪದಾಧಿಕಾರಿಗಳಿಗೆ ಕರೆ ನೀಡಿದರು.

ಶಾಸಕ ಸಿಮೆಂಟ್ ಮಂಜು ಮಾತನಾಡಿ, ಬಿಜೆಪಿ ಕಾರ್ಯಕರ್ತರ ಪಕ್ಷ. ಇಡೀ ವಿಶ್ವದಲ್ಲಿ ಹೆಚ್ಚು ಸದಸ್ಯರನ್ನು ಹೊಂದಿರುವ ಏಕೈಕ ಪಕ್ಷವೆಂದರೆ ಅದು ಬಿಜೆಪಿ. ಆದ್ದರಿಂದ ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಸದಸ್ಯತ್ವ ಸಂಖ್ಯೆ ಹೆಚ್ಚಿಗೆ ಮಾಡಬೇಕಿದೆ. ಸಕಲೇಶಪುರ ವಿಧಾನಸಭಾ ಕ್ಷೇತ್ರ ಬಿಜೆಪಿಯು ಶಕ್ತಿ ಕೇಂದ್ರವಾಗಿದ್ದರೂ ಸಹ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೋಂದಣಿ ಮಾಡಲು ಸಾಧ್ಯವಾಗಿಲ್ಲ. ಈ ನಿಟ್ಟಿನಲ್ಲಿ ಎಲ್ಲಾ ಮುಖಂಡರು, ಕಾರ್ಯಕರ್ತರು ಸದಸ್ಯತ್ವ ಅಭಿಯಾನದಲ್ಲಿ ಕೈಜೋಡಿಸಬೇಕೆಂದು ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಮಾತನಾಡಿ, ರಾಜ್ಯದಲ್ಲಿ ಈಗಾಗಲೇ ೩೬ ಲಕ್ಷಕ್ಕೂ ಹಾಗೂ ಜಿಲ್ಲೆಯಲ್ಲಿ ಒಂದು ಲಕ್ಷಕ್ಕೂ ಅಧಿಕ ಜನರು ಬಿಜೆಪಿ ಸದಸ್ಯತ್ವ ನೋಂದಣಿ ಮಾಡಿಸಿದ್ದಾರೆ. ಹಾಸನ ಜಿಲ್ಲೆಯಲ್ಲಿ ಸಕಲೇಶಪುರ ಕ್ಷೇತ್ರದಲ್ಲಿ ಪಕ್ಷ ಸದೃಢವಾಗಿದೆ. ಆದರೆ ಸದಸ್ಯತ್ವ ನೋಂದಣಿಯಲ್ಲಿ ಇಳಿಮುಖವಾಗಿರುವುದು ಆಶ್ಚರ್ಯ ತಂದಿದೆ. ಇನ್ನು ೩-೪ ದಿನದಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಶ್ರಮ ವಹಿಸಿ ಸದಸ್ಯತ್ವ ನೋಂದಣಿ ಕಾರ್ಯದಲ್ಲಿ ತೊಡಗಬೇಕು ಎಂದು ಸೂಚನೆ ನೀಡಿದರು.

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ನೇತ್ರಾವತಿ ಮಂಜುನಾಥ್, ಜಿಲ್ಲಾ ಪ್ರದಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಮನ್ ಕೀ ಬಾತ್ ಜಿ ಸಂಚಾಲಕ ಚೇತನ್, ಸಕಲೇಶಪುರ ಮಂಡಲ ಅಧ್ಯಕ್ಷ ವಳಲಹಳ್ಳಿ ಅಶ್ವತ್ಥ್, ಆಲೂರು - ಕಟ್ಟಾಯ ಮಂಡಲ ಅಧ್ಯಕ್ಷೆ ಉಮಾ ರವಿ ಪ್ರಕಾಶ್ ಸೇರಿದಂತೆ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.