ಜಿಲ್ಲಾ ಕೇಂದ್ರಕ್ಕೆ ಬರುವುದನ್ನು ತಪ್ಪಿಸಲು ಜನಸ್ಪಂದನ ಆಯೋಜನೆ

| Published : Jun 20 2024, 01:12 AM IST

ಜಿಲ್ಲಾ ಕೇಂದ್ರಕ್ಕೆ ಬರುವುದನ್ನು ತಪ್ಪಿಸಲು ಜನಸ್ಪಂದನ ಆಯೋಜನೆ
Share this Article
  • FB
  • TW
  • Linkdin
  • Email

ಸಾರಾಂಶ

ಜನಸಾಮಾನ್ಯರು ಸ್ಥಳೀಯ ಮಟ್ಟದಲ್ಲಿ ಬಗೆಹರಿಯದ ಸಮಸ್ಯೆಗಳನ್ನು ಹೊತ್ತು ಜಿಲ್ಲಾ ಕೇಂದ್ರಕ್ಕೆ ಬರುವುದನ್ನು ತಪ್ಪಿಸಲು ಹಾಗೂ ಶೀಘ್ರಗತಿಯಲ್ಲಿ ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಜಿಲ್ಲಾಡಳಿತದ ವತಿಯಿಂದ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಪ್ರತಿ ತಿಂಗಳು ಜನಸ್ಪಂದನ ಕಾರ್ಯಕ್ರಮವನ್ನು ಏರ್ಪಡಿಸಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ತುಮಕೂರುಜನಸಾಮಾನ್ಯರು ಸ್ಥಳೀಯ ಮಟ್ಟದಲ್ಲಿ ಬಗೆಹರಿಯದ ಸಮಸ್ಯೆಗಳನ್ನು ಹೊತ್ತು ಜಿಲ್ಲಾ ಕೇಂದ್ರಕ್ಕೆ ಬರುವುದನ್ನು ತಪ್ಪಿಸಲು ಹಾಗೂ ಶೀಘ್ರಗತಿಯಲ್ಲಿ ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಜಿಲ್ಲಾಡಳಿತದ ವತಿಯಿಂದ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಪ್ರತಿ ತಿಂಗಳು ಜನಸ್ಪಂದನ ಕಾರ್ಯಕ್ರಮವನ್ನು ಏರ್ಪಡಿಸಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದರು.ಕೊರಟಗೆರೆಯ ಮಾರುತಿ ಕಲ್ಯಾಣ ಮಂಟಪದಲ್ಲಿ ಬುಧವಾರ ಏರ್ಪಡಿಸಿದ್ದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾಡಳಿತದಿಂದ ಜನರಿದ್ದೆಡೆಯೇ ಸೇವೆ ಒದಗಿಸುವ ಸರ್ಕಾರದ ಮಹದಾಸೆಯಂತೆ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಜಿಲ್ಲೆ, ರಾಜ್ಯ ಮಟ್ಟದ ಸಮಸ್ಯೆಗಳಿದ್ದರೆ ಕಾಲಮಿತಿಯೊಳಗೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು. ಜಿಲ್ಲಾಡಳಿತವು ಪ್ರತಿ ಹಳ್ಳಿಗೆ ಹೋಗಿ ಜನರ ಕಷ್ಟ-ಸುಖಗಳನ್ನು ಆಲಿಸಿ ಸ್ಪಂದಿಸುವ ಮೂಲಕ ಅವರ ಸಮಸ್ಯೆಗಳಿಗೆ ಪರಿಹಾರ ನೀಡಬೇಕೆಂಬ ಸರ್ಕಾರದ ನಿರ್ದೇಶನದನ್ವಯ ಜನಸ್ಪಂದನ ಕಾರ್ಯಕ್ರಮದಲ್ಲಿ ಸಂಬಂಧಿಸಿದ ಇಲಾಖಾಧಿಕಾರಿಗಳು ಸ್ಥಳದಲ್ಲಿಯೇ ಹಾಜರಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ. ಜನ ಸಾಮಾನ್ಯರು ಈ ಸದವಕಾಶವನ್ನು ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದರು.ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಸುಮಾರು 2.5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಿದ್ದು, ಉತ್ತಮ ಮಳೆಯಾಗಿರುವುದರಿಂದ ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಂಡು ಗುರಿ ಮೀರಿ ಬಿತ್ತನೆ ಮಾಡಬೇಕು. ಬಿತ್ತನೆಗನುಗುಣವಾಗಿ ಅಗತ್ಯ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ದಾಸ್ತಾನು ಮಾಡಲಾಗಿದ್ದು, ರೈತರು ರಿಯಾಯಿತಿ ದರದ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು. ಜಿಲ್ಲೆಯಲ್ಲಿ 107 ಕೋಟಿ ರೂ.ಗಳ ಬರಪರಿಹಾರವನ್ನು ರೈತರ ಖಾತೆಗೆ ಜಮೆ ಮಾಡಲಾಗಿದ್ದು, ತಾಂತ್ರಿಕ ಕಾರಣಗಳಿಂದ ಇನ್ನು 30,000 ರೈತರಿಗೆ ಜಮೆ ಮಾಡಬೇಕಾಗಿದೆ. ಈವರೆಗೂ ಬರ ಪರಿಹಾರ ಜಮೆಯಾಗದ ರೈತರ ಖಾತೆಗೆ ಆಧಾರ್ ಸಂಖ್ಯೆಯನ್ನು ಜೂನ್ 30 ರೊಳಗಾಗಿ ಜೋಡಣೆ ಮಾಡಿಸಲು ಕೃಷಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ರೈತರು ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಜೋಡಣೆ ಮಾಡಿಸುವ ಮೂಲಕ ಬರ ಪರಿಹಾರವನ್ನು ಪಡೆಯಬೇಕೆಂದು ಮನವಿ ಮಾಡಿದರು. ಇತ್ತೀಚೆಗಷ್ಟೇ ಪಾವಗಡ, ಗುಬ್ಬಿ ತಾಲೂಕಿನಲ್ಲಿ ಏರ್ಪಡಿಸಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಬೆಳೆ ಸಮೀಕ್ಷೆಗೆ ಸಂಬಂಧಿಸಿದಂತೆ ಹೆಚ್ಚಿನ ಅಹವಾಲುಗಳು ಸ್ವೀಕೃತವಾಗಿವೆ. ಪ್ರತಿ ಗ್ರಾಮ ಪಂಚಾಯತಿಯಲ್ಲಿ ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆ ಕೈಗೊಳ್ಳುವ ಬಗ್ಗೆ ರೈತರಿಗೆ 2 ರಿಂದ 3 ಸುತ್ತಿನ ತರಬೇತಿ ನೀಡಬೇಕು. ಹೆಚ್ಚಿನ ಸಂಖ್ಯೆಯಲ್ಲಿ ರೈತರನ್ನು ಬೆಳೆ ವಿಮೆಗೆ ನೋಂದಣಿ ಮಾಡಬೇಕೆಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲೆಯ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರಿನ ಸೇವನೆಯಿಂದ ಉಂಟಾದ ವಾಂತಿ-ಭೇದಿ ಪ್ರಕರಣ ನಮಗೆ ಎಚ್ಚರಿಕೆ ಪಾಠವಾಗಿದೆ. ಕುಡಿಯುವ ನೀರಿನ ಬಗ್ಗೆ ಸಂಶಯ ಬಂದಲ್ಲಿ ಕೂಡಲೇ ಅಧಿಕಾರಿಗಳ ಗಮನಕ್ಕೆ ತರಬೇಕು. ಯೋಗ್ಯವಲ್ಲದ ನೀರನ್ನು ಜನರಿಗೆ ಕುಡಿಯಲು ಪೂರೈಕೆ ಮಾಡಬಾರದು ಎಂದು ಅಧಿಕಾರಿಗಳು ಸೂಚಿಸಿದರು.ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಿಂದ ಅರ್ಹ ಫಲಾನುಭವಿಗಳಿಗೆ ಮಂಜೂರಾತಿ ಆದೇಶಗಳನ್ನು ವಿತರಿಸಲಾಯಿತು. ಸಮಾಜ ಕಲ್ಯಾಣ ಇಲಾಖೆಯಡಿ ಅಂತರ್ಜಾತಿ ವಿವಾಹವಾದ ನರಸಿಂಹಮೂರ್ತಿ ಹಾಗೂ ಪೂಜಾ ದಂಪತಿಗಳಿಗೆ 1.25 ಲಕ್ಷ ರು.ಗಳ ಎನ್‌ಎಸ್‌ಸಿ ಬಾಂಡ್ ವಿತರಿಸಲಾಯಿತು. ಕೃಷಿ ಇಲಾಖೆಯಿಂದ ರೈತರಿಗೆ ಬಿತ್ತನೆ ಬೀಜ, ಕಂದಾಯ ಇಲಾಖೆಯಿಂದ ವೃದ್ಧಾಪ್ಯ ವೇತನ, ವಿಧವಾ ವೇತನ, ಪವತಿ ಖಾತೆ ಪಹಣಿ, ವಸತಿ ಸೌಲಭ್ಯಗಳ ಕಾರ್ಯಾದೇಶಗಳನ್ನು ಹಾಗೂ ಕಾಡು ಪ್ರಾಣಿಗಳಿಂದ ದಾಳಿಗೊಳಗಾದವರಿಗೆ ಪರಿಹಾರ ಮೊತ್ತವನ್ನು ಫಲಾನುಭವಿಗಳಿಗೆ ವಿತರಿಸಲಾಯಿತು. ಎತ್ತಿನ ಹೊಳೆ ಯೋಜನೆಗೆ ಸಂಬಂಧಿಸಿದಂತೆ ಭೂಮಿಯನ್ನು ಕಳೆದುಕೊಂಡ ರೈತರು ತಮಗಿನ್ನೂ ಪರಿಹಾರ ಕೈ ಸೇರಿಲ್ಲವೆಂದು ಜಿಲ್ಲಾಧಿಕಾರಿಗಳ ಬಳಿ ತಮ್ಮ ಅಳಲು ತೋಡಿಕೊಂಡಾಗ ರೈತರ ಜೀವನಾಧಾರವಾಗಿದ್ದ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಪರಿಹಾರ ನೀಡದಿದ್ದರೆ ಹೇಗೆ?. ಸರ್ಕಾರದಿಂದ ಪರಿಹಾರ ನೀಡಲು ಅಧಿಸೂಚನೆಯಾಗಿದ್ದರೂ ವಿತರಣೆಗೆ ಮೀನಾಮೇಷ ಏಕೆ? ಎಂದು ಜಿಲ್ಲಾಧಿಕಾರಿಗಳು ಸ್ಥಳದಲ್ಲಿದ್ದ ಎತ್ತಿನಹೊಳೆ ಯೋಜನೆ ಭೂಸ್ವಾಧೀನಾಧಿಕಾರಿಗಳಿಗೆ ಕೂಡಲೇ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.ತಾಲೂಕಿನ ಬೆಂಡೊಣೆ ಗ್ರಾಮದ ಲಕ್ಷಮ್ಮ ತಮ್ಮ ಮನೆಗೆ ಓಡಾಡಲು ದಾರಿ ಬೇಕು. ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎನ್. ಸುಕುಮಾರ್ ಅವರ ಪಹಣಿ ತಿದ್ದುಪಡಿ ಸೇರಿದಂತೆ ಮತ್ತಿತರ ಪ್ರಮುಖ ಸಮಸ್ಯೆಗಳ ಮನವಿ ಅರ್ಜಿಗಳಿಗೆ ಜಿಲ್ಲಾಧಿಕಾರಿಗಳು ಸ್ಪಂದಿಸಿ ಪರಿಹರಿಸಲು ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಸೂಚಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಮಾತನಾಡಿ, ಜನಸಾಮಾನ್ಯರು ಸುರಕ್ಷಿತವಾಗಿ ಶಾಂತಿ ನೆಮ್ಮದಿಯಿಂದ ಬದುಕುವ ವಾತಾವರಣ ಕಲ್ಪಿಸಲು ಪೊಲೀಸ್ ಇಲಾಖೆ ಸದಾ ಸಿದ್ಧವಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಲ್ಲಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ಪೊಲೀಸ್ ಇಲಾಖೆಯಿಂದ ಜನಸ್ನೇಹಿ ಸೇವೆ ನೀಡುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು. ವಿವಿಧ ಜನಪ್ರತಿನಿಧಿಗಳು, ತಹಸೀಲ್ದಾರ್ ಕೆ. ಮಂಜುನಾಥ್, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅಪೂರ್ವ ಸಿ. ಅನಂತರಾಮು, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಸಹಾಯಕ ನಿರ್ದೇಶಕಿ ಯಮುನಾ ಸೇರಿದಂತೆ ಬೆಸ್ಕಾಂ, ಆರೋಗ್ಯ, ಶಿಕ್ಷಣ, ಪಟ್ಟಣ ಪಂಚಾಯತಿ, ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.